

ರಾಮನಗರ : ಜಿಲ್ಲಾಸ್ಪತ್ರೆಯ ಅವ್ಯವಸ್ಥೆ ಸರಿಪಡಿಸುವಂತೆ ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಭಾನುವಾರ ಪ್ರತಿಭಟಿಸಿದರು.
ವಾಟಾಳ್ ನಾಗರಾಜ್ ಮಾತನಾಡಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಅವ್ಯವಸ್ಥೆ ಹೆಚ್ಚಾಗುತ್ತಿದ್ದು, ಜನರ ಪಾಲಿಗೆ ನರಕ ಸದೃಶ್ಯವಾಗುತ್ತಿವೆ ಎಂದು ಕಿಡಿಕಾರಿದರು.
ಸರ್ಕಾರಿ ಆಸ್ಪತ್ರೆ ವೈದ್ಯರು ಖಾಸಗಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜ್ಯದೆಲ್ಲೆಡೆ ಸರ್ಕಾರಿ ಆಸ್ಪತ್ರೆಗಳು ಸಾಲು ಸಾಲು ಸಮಸ್ಯೆ ಹೊಂದಿವೆ. ಈ ಅವ್ಯವಸ್ಥೆಗೆ ಶೀಘ್ರವೇ ಪರಿಹಾರ ಕಲ್ಪಿಸಿ, ಜನರಿಗೆ ಗುಣಮಟ್ಟದ ಸೇವೆ ದೊರಕಿಸಿಕೊಡಬೇಕು. ರಾಜಕಾರಣಿಗಳ ಹಿಡಿತದಲ್ಲಿರುವ ಖಾಸಗಿ ಆಸ್ಪತ್ರೆಗಳನ್ನು ರಾಷ್ಟ್ರೀಕರಣ ಮಾಡಬೇಕು ಎಂದು ಆಗ್ರಹಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ಅನುಮತಿಗೆ ಆಕ್ರೋಶ ವ್ಯಕ್ತಪಡಿಸಿದ ಅವರು, ರಾಜ್ಯಪಾಲರ ನಡೆಯು ಪ್ರಜಾಪ್ರಭುತ್ವದ ವಿರುದ್ಧವಾಗಿದೆ. ಸಿಎಂ ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ಮಾಡಿ ಅವರನ್ನು ಅಧಿಕಾರದಿಂದ ಕೆಳಗಿಳಿಸುವ ಪ್ರಯತ್ನ ಮಾಡಲಾಗುತ್ತಿದೆ. ಇದರ ಹಿಂದೆ ಬಿಜೆಪಿ, ಜೆಡಿಎಸ್ ಜತೆಗೆ ಕಾಂಗ್ರೆಸ್ ಕೆಲ ನಾಯಕರೂ ಇದ್ದಾರೆ. ರಾಜ್ಯಪಾಲರು ಸರ್ವಾಧಿಕಾರಿಗಳಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇಡಿ ಕೇಂದ್ರದ ಕೈಗೊಂಬೆಯಾಗಿದೆ. ಹಾಗಾಗಿ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡಬಾರದು. ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ, ತೆಲಂಗಾಣದ ರಾಜ್ಯಪಾಲರು ಸರ್ವಾಧಿಕಾರಿಗಳ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ತಮಿಳುನಾಡಿನ ವಿಧಾನಸಭೆಯಲ್ಲಿ ರಾಜ್ಯಪಾಲ ಭಾಷಣ ಮಾಡದೆ ಹೊರಟು ಹೋಗಿದ್ದಾರೆ. ಇದು ಸರ್ವಾಧಿಕಾರಿಗಳ ರೀತಿ ವರ್ತಿಸುತ್ತಿರುವುದಕ್ಕೆ ಸಾಕ್ಷಿ ಎಂದು ಹೇಳಿದರು.
ಕರುನಾಡು ಸೇನೆಯ ಪದಾಧಿಕಾರಿಗಳಾದ ಕುಮಾರ್, ರಾ.ಶಿ.ಬಸವರಾಜು, ಚಂದ್ರಶೇಖರಯ್ಯ, ಮಂಜುನಾಥ್, ಕೃಷ್ಣಮೂರ್ತಿ, ರಾಜು, ಆರ್.ಜಿ. ಅರ್ಜುನ್ ಇದ್ದರು.
ಆರ್‌ಎಂಜಿಎಂ 3
ರಾಮನಗರ ಜಿಲ್ಲಾಸ್ಪತ್ರೆಯ ಅವ್ಯವಸ್ಥೆ ಖಂಡಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟಿಸಿದರು. ಕರುನಾಡು ಸೇನೆ ಉಪಾಧ್ಯಕ್ಷ ಐಜೂರು ಎಂ. ಜಗದೀಶ್, ತಾಲೂಕು ಅಧ್ಯಕ್ಷ ವಿ.ಎನ್. ಗಂಗಾಧರ್, ನಗರ ಘಟಕದ ಅಧ್ಯಕ್ಷ ಪ್ರಸನ್ನಕುಮಾರ್ ಇತರರು ಇದ್ದರು.