

ಚಿತ್ತಾಪುರ: ಅಕ್ಷರ ದಾಸೋಹ ನೌಕರರ ಪ್ರಮುಖ ಬೇಡಿಕೆಯಾಗಿರುವ ಇಡಿಗಂಟು ನೀಡಬೇಕೆಂದು ಸರ್ಕಾರ ಆದೇಶ ಮಾಡಿರುವುದರಿಂದ ನಮ್ಮ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ ಎಂದು ಜಿಲ್ಲಾ ಅಕ್ಷರ ದಾಸೋಹ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಸಂಗೀತಾ ಗುತ್ತೇದಾರ್ ಹೇಳಿದರು.
ಕಳೆದ 3-4 ವರ್ಷಗಳಿಂದಲೂ ವಯಸ್ಸಿನ ಆಧಾರದಲ್ಲಿ ನಿವೃತ್ತಿ ಸೌಲಭ್ಯ ಕೊಡಬೇಕು, ನಿವೃತ್ತ ಅಡುಗೆಯವರಿಗೆ ಇಡಿಗಂಟು ನೀಡಬೇಕು ಎಂದು ಒತ್ತಾಯಿಸಿ ಸರ್ಕಾರಕ್ಕೆ ಮತ್ತು ಶಿಕ್ಷಣ ಇಲಾಖೆಗೆ ಮನವಿ ಮಾಡಿಕೊಂಡು ಬರುತ್ತಿದ್ದವು. ಇತ್ತೀಚೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅಕ್ಷರ ದಾಸೋಹ ನೌಕರರ ಸಂಘದ ನೇತೃತ್ವದಲ್ಲಿ ಅನಿರ್ದಿಷ್ಟವಾಧಿ ಹೋರಾಟ ಹಮ್ಮಿಕೊಳ್ಳಲಾಗಿತ್ತು. ನಮ್ಮ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ, 15 ವರ್ಷಕ್ಕಿಂದ ಹೆಚ್ಚಿನ ಅವಧಿಗೆ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಅಡುಗೆ ಸಿಬ್ಬಂದಿಗೆ 40 ಸಾವಿರ ರೂ. ನಿವೃತ್ತಿ ವೇತನ ಹಾಗೂ 5 ವರ್ಷಕ್ಕಿಂತ ಹೆಚ್ಚು, 15 ವರ್ಷಕ್ಕಿಂತ ಕಡಿಮೆ ಅವಧಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದವರಿಗೆ 30 ಸಾವಿರ ರೂ. ನಿವೃತ್ತಿ ವೇತನ ಕೊಡಲು ನಿರ್ಧರಿಸಿದೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಜಿಲ್ಲಾಧ್ಯಕ್ಷೆ ವಿಜಯಲಕ್ಷ್ಮೀ ಹಿರೇಮಠ, ಖಜಾಂಚಿ ರೇಖಾ ರಂಗನ್ ಇದ್ದರು.