

ಗೌರಿಬಿದನೂರು: ಪ್ರತಿ ವರ್ಷವೂ ಒಂದೊಂದು ಘೋಷಣೆಯೊಂದಿಗೆ ಡೆಂಘೆ ದಿನವನ್ನು ಆಚರಿಸಲಾಗುತ್ತಿದ್ದು, ಈ ವರ್ಷದ ಘೋಷವಾಕ್ಯ ‘ಸಮುದಾಯದ ಸಹಭಾಗಿತ್ವದೊಂದಿಗೆ ಡೆಂಘೆ ನಿಯಂತ್ರಣ’ ಎಂಬುದಾಗಿದೆ ಎಂದು ತಾಲೂಕು ಪಂಚಾಯಿತಿ ಇಒ ಜಿ.ಕೆ. ಹೊನ್ನಯ್ಯ ತಿಳಿಸಿದರು.
ನಗರದ ತಾಪಂ ಸಭಾಂಗಣದಲ್ಲಿ ತಾಲೂಕು ಮಟ್ಟದ ರಾಷ್ಟ್ರೀಯ ಡೆಂಘೆ ದಿನಾಚರಣೆ ಪ್ರಯುಕ್ತ ಮಂಗಳವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜಾಗೃತಿ ಕರಪತ್ರ ಬಿಡುಗಡೆಗೊಳಿಸಿ ಮಾತನಾಡಿದರು.
ಡೆಂಘೆ ಬಗ್ಗೆ ಜನರಿಗೆ ಅರಿವು ಮೂಡಿಸಲು ಆರೋಗ್ಯ ಇಲಾಖೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಬದ್ಧವಾಗಿದೆ. ಗ್ರಾಪಂಗಳಿಂದ ಪ್ರತಿ ಗ್ರಾಮದಲ್ಲಿ ವಾರಕ್ಕೊಮ್ಮೆ ನೀರು ಸರಬರಾಜು ನಿಲ್ಲಿಸಿ ವಾಟರ್‌ಮ್ಯಾನ್‌ಗಳ ಸಹಕಾರದೊಂದಿಗೆ ಮನೆಗಳಲ್ಲಿನ ನೀರು ಸಂಗ್ರಹ ಸಾಧನಗಳ ಸ್ವಚ್ಛತೆ ಖಾತ್ರಿ ಪಡಿಸಿಕೊಂಡು ನಂತರ ನೀರು ಪೂರೈಸುವುದರಿಂದ ಸೊಳ್ಳೆಗಳ ಸಂತತಿ ತಡೆಯಲು ಸಾಧ್ಯ ಎಂದರು.
ಎಲ್ಲರಿಗೂ ಆರೋಗ್ಯ ಮುಖ್ಯವಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ ಹೊಸ ರೋಗಗಳು ಪತ್ತೆಯಾಗುತ್ತಿದ್ದು, ಇದರಲ್ಲಿ ಡೆಂಘೆಯೂ ಒಂದಾಗಿದೆ. ಇದರ ಬಗ್ಗೆ ಪ್ರತಿಯೊಬ್ಬರು ಎಚ್ಚರಿಕೆ ವಹಿಸಬೇಕು. ಎಲ್ಲರೂ ತಮ್ಮ ಜವಾಬ್ದಾರಿ ಅರಿತು ರೋಗದಿಂದ ದೂರವಿರಿ. ಮನೆಯಲ್ಲಿರುವ ನೀರಿನ ತೊಟ್ಟಿ, ಡ್ರಮ್ ಹಾಗೂ ಟ್ಯಾಂಕ್‌ಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸಬೇಕು ಎಂದು ಸಲಹೆ ನೀಡಿದರು.
ತಾಲೂಕು ವೈದ್ಯಾಧಿಕಾರಿ ಡಾ. ಚಂದ್ರಮೋಹನ್ ರೆಡ್ಡಿ ಮಾತನಾಡಿ, ಮಳೆಗಾಲ ಆರಂಭವಾಗಿದ್ದು ಸಾರ್ವಜನಿಕರು ಸ್ವಚ್ಛತೆ ಕಾಪಾಡಿಕೊಳ್ಳಬೇಕು. ರೋಗ ಲಕ್ಷಣ ಕಂಡುಬಂದ ಕೂಡಲೇ ವೈದ್ಯರನ್ನು ಸಂಪರ್ಕಿಸಬೇಕು. ಜ್ವರ, ಕೆಮ್ಮು, ನೆಗಡಿ ಮತ್ತು ಮೊಣಕಾಲು ನೋವು ಕಾಣಿಸಿಕೊಂಡರೆ ನಿರ್ಲಕ್ಷ್ಯ ಮಾಡದೆ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಹೇಳಿದರು.
ಡಾ. ಮುರಳೀಧರ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಭಾಗವಹಿಸಿದ್ದರು.