

ಮೈಸೂರು: ಅಂಗವಿಕಲರಲ್ಲಿ ವಿಶಿಷ್ಟ ಗುಣಗಳು ಇರುತ್ತವೆ. ಅವುಗಳನ್ನು ಗುರುತಿಸಿ, ಪ್ರೋತ್ಸಾಹಿಸಬೇಕಿದೆ ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ (ಆಡಳಿತ) ಸವಿತಾ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅಂಗವಿಕಲರಿಗಾಗಿ ಸೇವೆ ಸಲ್ಲಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ಭಾನುವಾರ ದಸರಾ ವಸ್ತುಪ್ರದರ್ಶನ ಆವರಣದಲ್ಲಿ ಆಯೋಜಿಸಲಾಗಿದ್ದ ವಿಕಲಚೇತನರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಮನುಷ್ಯನಿಗೆ ವಿಶೇಷ ಗುಣಗಳಿರುತ್ತವೆ. ಅಂತೆಯೆ, ಅಂಗವಿಕಲರಲ್ಲೂ ವಿಶಿಷ್ಟವಾದ ಗುಣಗಳು ಇವೆ. ಇವರ ಏಳಿಗೆಗೆ ಸರ್ಕಾರ ಹಲವು ಸೌಲಭ್ಯಗಳನ್ನು ಕಲ್ಪಿಸಿದ್ದು, ಈ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕಿದೆ. ಸಾಮಾನ್ಯರಂತೆ ಅಂಗವಿಕಲರು ಕೂಡ ವಿಶೇಷವಾದ ದೂರದೃಷ್ಟಿ ಮತ್ತು ಶಕ್ತಿ ಹೊಂದಿರುತ್ತಾರೆ ಎಂದು ತಿಳಿಸಿದರು.
ಈ ಹಿಂದೆ ಅಂಗವಿಕಲರ ಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ಮಕ್ಕಳು ಯೋಗಪಟುಗಳಿಗಿಂತ ವಿಶೇಷವಾದ ಯೋಗ ಅಭ್ಯಾಸವನ್ನು ಮಾಡಿದ್ದನ್ನು ನಾವು ನೋಡಿದ್ದೇವೆ. ಹಾಗಾಗಿ ಅವರು ಯಾರಿಗೂ ಕಡಿಮೆ ಇಲ್ಲ. ಸರ್ಕಾರವು ಅವರಿಗೆ ವಿಶೇಷ ಸ್ಥಾನಮಾನ ನೀಡಿ, ಪ್ರತಿಯೊಂದು ಕ್ಷೇತ್ರದಲ್ಲಿ ಮೀಸಲಾತಿಯನ್ನೂ ನೀಡುತ್ತಿದೆ. ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಬಿ.ಬಸವರಾಜು, ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣ ಅಧಿಕಾರಿ ಕೆ.ವಿ. ಜ್ಯೋತಿ, ಅಂದ ಮಕ್ಕಳ ಪಾಠಶಾಲೆಯ ಪ್ರಾಂಶುಪಾಲ ಸತೀಶ್ ಇತರರು ಇದ್ದರು.
ಇದೇ ಸಂದರ್ಭದಲ್ಲಿ ಅಂಧಮಕ್ಕಳಿಗೆ ಉಪಯುಕ್ತ ವಾಗುವ ಬ್ರೈಲ್‌ಲಿಪಿ ಆಧಾರಿತ 2024ನೇ ವರ್ಷದ ಕ್ಯಾಲೆಂಡರ್ ಅನ್ನು ಬಿಡುಗಡೆ ಮಾಡಲಾಯಿತು.