ಬಿ.ಎಸ್. ಅನಂತಕುಮಾರ್ ಪದಚ್ಯುತಿಗೆ ವರಿಷ್ಠರ ಎದುರು ಕಾಂಗ್ರೆಸ್ ನಿಯೋಗ ಆಕ್ಷೇಪ

19mdks3 - Copy
Published on

ವಿಜಯವಾಣಿ ಸುದ್ದಿಜಾಲ ಮಡಿಕೇರಿ
ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಬಿ.ಎಸ್. ಅನಂತಕುಮಾರ್ ಅವರನ್ನು ಪದಚ್ಯುತಗೊಳಿಸಿರುವುದಕ್ಕೆ ಕೊಡಗಿನ ಕಾಂಗ್ರೆಸ್ ನಾಯಕರ ನಿಯೋಗ ವರಿಷ್ಠರ ಎದುರು ತಮ್ಮ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ.

ಮೈಸೂರಿನಲ್ಲಿ ಭಾನುವಾರ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಕೊಡಗು ಜಿಲ್ಲಾ ಉಸ್ತುವಾರಿ ವಿನಯ್‌ಕುಮಾರ್ ಸೊರಕೆ ಅವರನ್ನು ಭೇಟಿ ಮಾಡಿ ತಮ್ಮ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಅನಂತಕುಮಾರ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ೨ ವರ್ಷ ೯ ತಿಂಗಳು ಮಾಡಿದ ಪಕ್ಷ ಸಂಘಟನೆಗೆ ಸಂಬಂಧಿಸಿ ೧ ಸಾವಿರ ಪುಟದ ಲಿಖಿತ ಮಾಹಿತಿ ನೀಡಲಾಯಿತು.

ವಿಧಾನಸಭೆ ಚುನಾವಣೆಗೆ ಪಕ್ಷ ಸಿದ್ಧತೆ ಮಾಡಿಕೊಳ್ಳುತ್ತಿರುವ ಸಮಯದಲ್ಲಿ ಬ್ಲಾಕ್ ಅಧ್ಯಕ್ಷರನ್ನು ಪದಚ್ಯುತಿಗೊಳಿಸಿರುವುದು ಸರಿಯಲ್ಲ. ಸಾಮಾಜಿಕ ನ್ಯಾಯದಡಿ ವೀರಶೈವ ಲಿಂಗಾಯಿತ ಸಮುದಾಯದ ಒಬ್ಬರಿಗೆ ನೀಡಿದ್ದ ಅಧ್ಯಕ್ಷ ಸ್ಥಾನ ಕಿತ್ತುಕೊಂಡಿರುವುದು ಕೆಟ್ಟ ಸಂದೇಶ ರವಾನಿಸುತ್ತದೆ ಎಂದು ಕಳವಳ ವ್ಯಕ್ತ ಪಡಿಸಿದರು.

ಪಟ್ಟಭದ್ರ ಹಿತಾಸಕ್ತಿಗಳು ಷಡ್ಯಂತ್ರ ನಡೆಸಿ ತನ್ನ ವಿರುದ್ಧ ಸುಳ್ಳು ಮಾಹಿತಿ ನೀಡುವುದರ ಮೂಲಕ ಅಧ್ಯಕ್ಷ ಸ್ಥಾನದಿಂದ ಪದಚ್ಯುತಗೊಳಿಸ ಲಾಗಿದೆ. ವರಿಷ್ಠರು ಸಕಾರತ್ಮಕವಾಗಿ ಸ್ಪಂದಿಸಿದ್ದು, ಶೀಘ್ರ ಸೂಕ್ತ ಜವಾಬ್ದಾರಿ ನೀಡುವ ಭರವಸೆ ನೀಡಿದ್ದಾರೆಂದು ಬಿ.ಎಸ್. ಅನಂತಕುಮಾರ್ ವಿಜಯವಾಣಿಗೆ ಮಾಹಿತಿ ನೀಡಿದ್ದಾರೆ.

ಕಾಂಗ್ರೆಸ್ ನಿಯೋಗದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಚ್.ಎಸ್. ಚಂದ್ರಮೌಳಿ, ಮಹಿಳಾ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಗೀತಾ ಧರ್ಮಪ್ಪ, ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಜಿಲ್ಲಾಧ್ಯಕ್ಷ ಎಂ.ಎ. ಉಸ್ಮಾನ್, ಜಿಲ್ಲಾ ವಕ್ತಾರ ಟಿ.ಇ. ಸುರೇಶ್, ಡಿಸಿಸಿ ಸದಸ್ಯ ಕೆ.ಎನ್. ಹೂವಯ್ಯ, ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಜಿ. ಚಂದ್ರಶೇಖರ್, ಕುಶಾಲನಗರ ನಗರ ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಅಶ್ರಫ್, ಕುಶಾಲನಗರ ನಗರ ಕಾಂಗ್ರೆಸ್ ಮಾಜಿ ಅಧ್ಯಕ್ಷ ಶರೀಫ್ ಇಬ್ರಾಹಿಂ, ತಾಲೂಕು ಪಂಚಾಯಿತಿ ಮಾಜಿ ಸದಸ್ಯರಫೀಕ್ ಇಬ್ರಾಹಿಂ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net