

ಅಜ್ಜಮಾಡ ರಮೇಶ್ ಕುಟ್ಟಪ್ಪ ಮಡಿಕೇರಿ
ಮಡಿಕೇರಿ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಕಾಂಗ್ರೆಸ್ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಸಿದ್ಧಗೊಂಡಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಕಾರ್ಯಾಧ್ಯಕ್ಷ ಧ್ರುವನಾರಾಯಣ, ಜಿಲ್ಲಾ ಉಸ್ತುವಾರಿ ಡಾ.ಎಚ್.ಸಿ. ಮಹದೇವಪ್ಪ ನೇತೃತ್ವದಲ್ಲಿ ಕೊಡಗಿನಲ್ಲಿ ಸಂಗ್ರಹಿಸಿದ ಅಭಿಪ್ರಾಯದ ಆಧಾರದಲ್ಲಿ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಸಿದ್ಧಗೊಂಡಿದೆ.
ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಏಳು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಮೂವರು ಆಕಾಂಕ್ಷಿಗಳು ಟಿಕೆಟ್‌ಗೆ ಕೆಪಿಸಿಸಿಗೆ ೨ ಲಕ್ಷ ರೂಪಾಯಿ ಪಾವತಿಸಿ ಅರ್ಜಿ ಸಲ್ಲಿಸಿದ್ದರು. ಕಾಂಗ್ರೆಸ್ ಮುಖಂಡರ ವೈಯುಕ್ತಿಕ ಅಭಿಪ್ರಾಯದ ಆಧಾರದಲ್ಲಿ ಕೆಪಿಸಿಸಿಗೆ ಸಂಭವನೀಯ ಅಭ್ಯರ್ಥಿಗಳ ಹೆಸರು ಶಿಫಾರಸ್ಸು ಮಾಡಲಾಗಿದೆ ಎಂಬ ಮಾಹಿತಿ ವಿಶ್ವಾಸನೀಯ ಮೂಲದಿಂದ ಲಭ್ಯವಾಗಿದೆ.
ಮಡಿಕೇರಿ ಕ್ಷೇತ್ರ
ಮಡಿಕೇರಿ ಕ್ಷೇತ್ರದಲ್ಲಿ ಮಾಜಿ ಸಚಿವ ಬಿ.ಎ. ಜೀವಿಜಯ, ಕೊಡಗು ಸ್ಥಳೀಯ ಸಂಸ್ಥೆ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿ ಗಮನ ಸೆಳೆದ ಡಾ.ಮಂಥರ್ ಗೌಡ, ಈ ಹಿಂದೆ ಕೊಡಗು ಸ್ಥಳೀಯ ಸಂಸ್ಥೆ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಲು ಪರಾಭವ ಗೊಂಡ ಹೈಕೋಟರ್ ಹಿರಿಯ ವಕೀಲ ಎಚ್.ಎಸ್. ಚಂದ್ರಮೌಳಿ ಅಂತಿಮ ಮೂವರ ಸಂಭವನೀಯ ಪಟ್ಟಿ ಯಲ್ಲಿ ಸ್ಥಾನ ಪಡೆದಿದ್ದಾರೆ.
ಕಳೆದ ಬಾರಿ ಎಂಎಲ್‌ಎ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಕೊಡಗು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ, ಸೋಮವಾರಪೇಟೆ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಎಂ. ಲೋಕೇಶ್, ಕರ್ನಾಟಕ ಒಕ್ಕಲಿಗರ ಸಂಘ ಕಾರ್ಯಾಧ್ಯಕ್ಷ ಹರಪಳ್ಳಿ ರವೀಂದ್ರ, ಕೊಡಗು ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆ.ಕೆ. ಮಂಜುನಾಥ್‌ಕುಮಾರ್ ಟಿಕೆಟ್ ಆಕಾಂಕ್ಷಿಗಳಾಗಿದ್ದರು.
ಹಿರಿಯ ಮುಖಂಡ ಜೀವಿಜಯ ಸ್ಪರ್ಧೆಗೆ ಬೆಂಬಲ ವ್ಯಕ್ತ ಪಡಿಸಿದ್ದ ಕೆ.ಕೆ. ಮಂಜುನಾಥ್‌ಕುಮಾರ್, ಹೊಸಬರಿಗೆ ಅವಕಾಶ ನೀಡುವು ದಾದ್ದಲ್ಲಿ ತನಗೆ ನೀಡಿ ಎಂದು ಟಿಕೆಟ್ ಕೇಳಿದ್ದರು. ಆದರೆ, ಎಂಎಲ್‌ಎ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿರುವ ಸಮಾಜ ಸೇವಕ ಹರಪಳ್ಳಿ ರವೀಂದ್ರ ಕಾಂಗ್ರೆಸ್ ಟಿಕೆಟ್ ಪ್ರಬಲ ಆಕಾಂಕ್ಷಿಯಾಗಿದ್ದಾರೆ.
ಸೋಲು ಸ್ಥಾನ ಎಂಬ ಕಾರಣಕ್ಕಾಗಿ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಲು ಕೊಡಗಿನ ಯಾವ ಕಾಂಗ್ರೆಸ್ ಮುಖಂಡರು ಆಸಕ್ತಿ ತೋರಲಿಲ್ಲ. ಚುನಾವಣೆ ಎದುರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳದಿದ್ದರೂ ಕೆ.ಎಂ. ಲೋಕೇಶ್ ಮಾತ್ರ ಅರ್ಜಿ ಸಲ್ಲಿಸಿದ್ದರು. ಕೊಡಗು ಜಿಲ್ಲಾ ಕಾಂಗ್ರೆಸ್ ಅವರೊಬ್ಬರ ಹೆಸರು ಶಿಫಾರಸ್ಸು ಮಾಡಿತ್ತು. ಆದರೆ, ಅಂತಿಮ ಕ್ಷಣದಲ್ಲಿ ಹಾಸನ ಜಿಲ್ಲೆಯ ಡಾ.ಮಂಥರ್ ಗೌಡ ಟಿಕೆಟ್ ಪಡೆದು ಪ್ರಬಲ ಸ್ಪರ್ಧೆವೊಡ್ಡುವುದರ ಮೂಲಕ ಗಮನ ಸೆಳೆದರು.
ಎಂಎಲ್ಸಿ ಚುನಾವಣೆಯಲ್ಲಿ ಡಾ.ಮಂಥರ್ ಗೌಡ ಅವರಿಗೆ ಬೆಂಬಲ ವ್ಯಕ್ತ ಪಡಿಸಿದ್ದ ಮಡಿಕೇರಿ ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ ಮುಖಂಡ ರು ವಿಧಾನಸಭೆ ಚುನಾವಣೆಯಲ್ಲಿ ಆಕಾಂಕ್ಷಿ ಆಗುತ್ತಿದ್ದಂತೆ ಅವರ ವಿರುದ್ಧ ನಿಂತುಕೊಳ್ಳಲಾರಂಭಿಸಿದ್ದರು. ತಮ್ಮ ರಾಜಕೀಯ ಅಸ್ತಿತ್ವ ಇಲ್ಲದಂತಾಗುತ್ತದೆ ಎಂಬ ಭಯ ಸ್ಥಳೀಯ ಮುಖಂಡರನ್ನು ಕಾಡಲಾರಂಭಿಸಿದೆ. ಈ ಕಾರಣಕ್ಕಾಗಿಯೇ ಕೆಲವರು ಹರಪಳ್ಳಿ ರವೀಂದ್ರ ಹೆಸರು ಮುಂಚೂಣಿಗೆ ಬರುವಂತೆ ಮಾಡಿದ್ದಾರೆ.
ವಿರಾಜಪೇಟೆ ಕ್ಷೇತ್ರ
ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷರು, ವಕ್ತರರಾಗಿರುವ ಎ.ಎಸ್. ಪೊನ್ನಣ್ಣ, ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ಹೆಸರು ಶಿಫಾರಸ್ಸು ಮಾಡಲಾಗಿದೆ. ಕೊಡಗು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಿ.ಎಂ. ಲತೀಫ್ ಕೂಡ ಆಕಾಂಕ್ಷಿಯಾಗಿದ್ದರು. ಆದರೆ, ಅಲ್ಪಸಂಖ್ಯಾತ ಮುಖಂಡರ ಒತ್ತಡಕ್ಕೆ ಮಣಿದು ಅರ್ಜಿ ಸಲ್ಲಿಸಿದ್ದು, ಚುನಾವಣೆ ಎದುರಿಸಲು ಸಿದ್ಧರಾಗಿರಲಿಲ್ಲ. ಈ ಕಾರಣಕ್ಕಾಗಿ ವಿರಾಜಪೇಟೆ ಕ್ಷೇತ್ರಕ್ಕೆ ಇಬ್ಬರ ಹೆಸರನ್ನು ಮಾತ್ರ ಶಿಫಾರಸ್ಸು ಮಾಡಲಾಗಿದೆ.
ಕಳೆದ ಮೂರು ವರ್ಷದಿಂದ ಕ್ಷೇತ್ರ ವ್ಯಾಪ್ತಿಯಲ್ಲಿ ಮಿಂಚಿನ ಸಂಚಾರ ಮಾಡಿರುವ ಎ.ಎಸ್. ಪೊನ್ನಣ್ಣ ಚುನಾವಣೆ ಎದುರಿಸಲು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಕೊಡಗಿನ ಕಾಂಗ್ರೆಸ್ ಇತಿಹಾಸದಲ್ಲಿ ಇಷ್ಟೊಂದು ಸಿದ್ಧತೆ ಮತ್ತೊಬ್ಬ ಆಕಾಂಕ್ಷಿ ಮಾಡಿರಲಿಲ್ಲ. ಪಕ್ಷ ಸಂಘಟನೆ ಹಾಗೂ ಜನರ ವಿಶ್ವಾಸ ಸಂಪಾದಿಸುವ ನಿಟ್ಟಿನಲ್ಲಿ ಪೊನ್ನಣ್ಣ ಸಫಲರಾಗಿದ್ದಾರೆ.
ವಿಧಾನ ಪರಿಷತ್ ಸದಸ್ಯರಾಗಿದ್ದ ಅವಧಿಯಲ್ಲಿ ವೀಣಾ ಅಚ್ಚಯ್ಯ ವಿರಾಜಪೇಟೆ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ಕೊಟ್ಟಿದ್ದರು. ಎಂಎಲ್ಸಿ ಅನುದಾನ ದಲ್ಲಿ ಬಹುಪಾಲು ಅನುದಾನ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಮಗಾರಿಗೆ ವಿನಿಯೋಗಿಸಿದ್ದಾರೆ. ಆ ಮೂಲಕ ಚುನಾವಣೆ ಎದುರಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ೨೦೧೮ ರಲ್ಲಿ ಈ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋಲು ಅನುಭವಿಸಿದ್ದರು.
**
ಮಡಿಕೇರಿ ಕ್ಷೇತ್ರದಲ್ಲಿ ೭ ಹಾಗೂ ವಿರಾಜಪೇಟೆ ಕ್ಷೇತ್ರದಲ್ಲಿ ೩ ಆಕಾಂಕ್ಷಿಗಳು ಟಿಕೆಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಕೆಪಿಸಿಸಿ ಕಾರ್ಯಾದ್ಯಕ್ಷ ಧ್ರುವನಾರಾಯಣ ಹಾಗೂ ಉಸ್ತುವಾರಿ ಡಾ.ಎಚ್.ಸಿ. ಮಹದೇವಪ್ಪ ನೇತೃತ್ವದಲ್ಲಿ ಕೊಡಗಿನ ಕಾಂಗ್ರೆಸ್ ಮುಖಂಡರಿಂದ ವೈಯುಕ್ತಿಕ ಅಭಿಪ್ರಾಯ ಸಂಗ್ರಹಿಸಿ, ಕೆಪಿಸಿಸಿಗೆ ವರದಿ ಸಲ್ಲಿಸಿದ್ದಾರೆ. ಹೈಕಮಾಂಡ್ ಸೂಕ್ತ ಅಭ್ಯರ್ಥಿ ಆಯ್ಕೆ ಮಾಡಲಿದೆ. ತೀತೀರ ಧರ್ಮಜ ಉತ್ತಪ್ಪ, ಕಾಂಗ್ರೆಸ್ ಜಿಲ್ಲಾಧ್ಯಕ್ಷ.