

ವಿಜಯವಾಣಿ ಸುದ್ದಿಜಾಲ ಮಡಿಕೇರಿ
ನಾಡಪ್ರಭು, ಆದರ್ಶ ಆಡಳಿತಗಾರ ಕೆಂಪೇಗೌಡರ ೧೦೮ ಅಡಿ ಕಂಚಿನ ಪ್ರತಿಮೆ ಉದ್ಘಾಟನೆ ಸಂಬಂಧ ಪತ್ರ ಮೃತ್ತಿಕೆ ಸಂಗ್ರಹಣಾ ಕಾರ್ಯಕ್ಕೆ ್ಲ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್ ಜಿಲ್ಲಾಡಳಿತ ಭವನ ಆವರಣದಲ್ಲಿ ಗುರುವಾರ ಚಾಲನೆ ನೀಡಿದರು.
ಓಂಕಾರೇಶ್ವರ ದೇವಾಲಯ, ಕೋಟೆ ಹಾಗೂ ಗದ್ದಿಗೆಯಲ್ಲಿನ ಪತ್ರ ಮೃತ್ತಿಕೆಯನ್ನು ನಾಡಪ್ರಭು ಕೆಂಪೇಗೌಡರ ರಥಯಾತ್ರೆ ವಾಹನದಲ್ಲಿ ಸಂಗ್ರಹಿಸಿಟ್ಟರು. ಬಳಿಕ ಪತ್ರ ಮೃತ್ತಿಕೆ ಸಂಗ್ರಹಣೆ ವಾಹನವು ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಂಚರಿಸಲಿದ್ದು, ಈ ವಾಹನಕ್ಕೆ ಹಸಿರು ನಿಶಾನೆ ತೋರಿಸಿದರು.
ನವೆಂಬರ್ ೧೧ ರಂದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆವರಣದಲ್ಲಿ ನಿರ್ಮಿಸಿರುವ ೧೦೮ ಅಡಿ ಎತ್ತರದ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ. ಆ ನಿಟ್ಟಿನಲ್ಲಿ ರಾಜ್ಯಾದ್ಯಂತ ಪತ್ರ ಮೃತ್ತಿಕೆ ಸಂಗ್ರಹಣಾ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ಸಚಿವರು ಹೇಳಿದರು.
ಭಾರತದ ಸ್ವಾತಂತ್ರ್ಯ ಪೂರ್ವ ಸಂದರ್ಭ ರಾಷ್ಟ್ರ ಅಭಿವೃದ್ಧಿಗೆ ರಾಜ ಮಹಾರಾಜರ ಕೊಡುಗೆ ಅಪಾರವಾಗಿದೆ. ಆ ಸಾಲಿಗೆ ನಾಡಪ್ರಭು, ಆದರ್ಶ ಆಡಳಿತಗಾರ ಕೆಂಪೇಗೌಡರು ಒಬ್ಬರು. ಕೆಂಪೇಗೌಡರ ಆದರ್ಶ ಆಡಳಿತ ಪ್ರತಿಯೊಬ್ಬರ ಮನೆಗೆ ತಲುಪಬೇಕು. ಆ ನಿಟ್ಟಿನಲ್ಲಿ ಪತ್ರ ಮೃತ್ತಿಕೆ ಸಂಗ್ರಹಿಸಲಾಗುತ್ತಿದೆ ಎಂದರು.
ಶಿಕ್ಷಣ, ಆರೋಗ್ಯ, ಕೈಗಾರಿಕೆ, ನೀರಾವರಿ ಹೀಗೆ ಹಲವು ಕ್ಷೇತ್ರಗಳಿಗೆ ಮೈಸೂರು ಮಹಾರಾಜರು ಸೇರಿದಂತೆ ನಾಡಪ್ರಭು ಕೆಂಪೇಗೌಡರು ಬೆಂಗಳೂರು ಪ್ರಾಂತ್ಯದಲ್ಲಿ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ರಾಷ್ಟ್ರದ ಪ್ರಥಮ ಗೃಹ ಸಚಿವರಾದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯ್ ಪಟೇಲ್ ಪ್ರತಿಮೆಯಂತೆ, ನಾಡಪ್ರಭು ಕೆಂಪೇಗೌಡರ ಪ್ರತಿಮೆ ಸರ್ಕಾರದಿಂದ ನಿರ್ಮಿಸಲಾಗಿದೆ. ರಥಯಾತ್ರೆ ಮೂಲಕ ಪತ್ರ ಮೃತ್ತಿಕೆ ಸಂಗ್ರಹಿಸಲಾಗುತ್ತದೆ ಎಂದು ಹೇಳಿದರು.
ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ, ನಗರಸಭೆ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ, ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ.ಎ. ಅಯ್ಯಪ್ಪ, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಭನ್ವರ್ ಸಿಂಘ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ಜಿಪಂ ಉಪ ಕಾರ್ಯದರ್ಶಿ ಜಿ.ಧನರಾಜ್, ಮಡಿಕೇರಿ ತಹಸೀಲ್ದಾರ್ ಪಿ.ಎಸ್. ಮಹೇಶ್, ಸರ್ವೋದಯ ಸಮಿತಿ ಅಧ್ಯಕ್ಷ ಅಂಬೆಕಲ್ ಕುಶಾಲಪ್ಪ ಮತ್ತಿತರರು ಇದ್ದರು.