ಉತ್ತಮ ಆರೋಗ್ಯದಿಂದ ಸದೃಢ ಸಮಾಜ

ಸೋಮವಾರಪೇಟೆ ತಾಲೂಕಿನ ಮಾದಾಪುರದಲ್ಲಿ ಆಯೋಜಿಸಿದ್ದ ಅರೋಗ್ಯ ತಪಾಸಣೆ ಶಿಬಿರವನ್ನು ಜಿಲ್ಲಾಸ್ಪತ್ರೆಯ ಮುಖ್ಯಸ್ಥರಾದ ಲೋಕೇಶ್ ಉದ್ಘಾಟಿಸಿದರು. ವಿಶ್ವ ಕುಂಬೂರು, ಪರಮೇಶ್ ಕುಮಾರ್, ಡಾ.ನಂಜುಂಡಯ್ಯ ಇದ್ದರು.
ಸೋಮವಾರಪೇಟೆ ತಾಲೂಕಿನ ಮಾದಾಪುರದಲ್ಲಿ ಆಯೋಜಿಸಿದ್ದ ಅರೋಗ್ಯ ತಪಾಸಣೆ ಶಿಬಿರವನ್ನು ಜಿಲ್ಲಾಸ್ಪತ್ರೆಯ ಮುಖ್ಯಸ್ಥರಾದ ಲೋಕೇಶ್ ಉದ್ಘಾಟಿಸಿದರು. ವಿಶ್ವ ಕುಂಬೂರು, ಪರಮೇಶ್ ಕುಮಾರ್, ಡಾ.ನಂಜುಂಡಯ್ಯ ಇದ್ದರು.
Published on
ಸೋಮವಾರಪೇಟೆ: ಉತ್ತಮ ಆರೋಗ್ಯ ಹಾಗೂ ಆರೋಗ್ಯ ಜಾಗೃತಿಯ ಮೂಲಕ ಆರೋಗ್ಯವಂತ ಸಮಾಜವನ್ನು ನಿರ್ಮಿಸಲು ಸಾಧ್ಯ ಎಂದು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಬೋಧಕ ಆಸ್ಪತ್ರೆಯ ಡೀನ್ ಡಾ.ಲೋಕೇಶ್ ಅಭಿಪ್ರಾಯಪಟ್ಟರು.
ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಸೋಮವಾರಪೇಟೆ ತಾಲೂಕು ಘಟಕ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ-ಬೋಧಕ ಆಸ್ಪತ್ರೆ ಹಾಗೂ ಮಾದಾಪುರ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಶನಿವಾರ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಆರೋಗ್ಯ ಉಚಿತ ತಪಾಸಣೆ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಗ್ರಾಮೀಣ ಪ್ರದೇಶದ ಜನರಿಗೆ ಆರೋಗ್ಯ ಸೇವೆಗಳನ್ನು ತಲುಪಿಸುವ ಉದ್ದೇಶದಿಂದ ಇಂತಹ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಆರೋಗ್ಯ ಸಮಸ್ಯೆಗಳು ಆರಂಭಿಕ ಹಂತದಲ್ಲೇ ಪತ್ತೆಯಾದರೆ ಚಿಕಿತ್ಸೆ ಸುಲಭವಾಗುತ್ತದೆ. ಆದ್ದರಿಂದ ಸಾರ್ವಜನಿಕರು ಆರೋಗ್ಯ ನಿರ್ಲಕ್ಷಿಸದೆ ನಿಯಮಿತವಾಗಿ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಎಂಬಿಬಿಎಸ್ ಸೇರಿದಂತೆ ಆರೋಗ್ಯ ವಿಜ್ಞಾನ ಕೋರ್ಸ್‌ಗಳು ಲಭ್ಯವಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಈ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಮೂಲಕ ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಬಹುದು ಎಂದರು.
ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ.ನಂಜುಂಡಯ್ಯ ಮಾತನಾಡಿ, ಗರ್ಭಿಣಿಯರು ಹಾಗೂ ಮಕ್ಕಳ ಆರೋಗ್ಯ ರಕ್ಷಣೆಗೆ ಸರ್ಕಾರದಿಂದ ಹಲವು ಸೌಲಭ್ಯಗಳು ಲಭ್ಯವಿವೆ. ಗರ್ಭಧಾರಣೆಯ ಆರಂಭದಿಂದಲೇ ನಿಯಮಿತ ತಪಾಸಣೆ, ಪೌಷ್ಟಿಕ ಆಹಾರ ಹಾಗೂ ವೈದ್ಯರ ಸಲಹೆಗಳನ್ನು ಪಾಲಿಸುವುದು ತಾಯಿ ಮತ್ತು ಮಗುವಿನ ಆರೋಗ್ಯಕ್ಕೆ ಅಗತ್ಯವಾಗಿದೆ. ಬೋಧಕ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ಸೇವೆ, ಹೆರಿಗೆ ಸೌಲಭ್ಯ, ನವಜಾತ ಶಿಶುಗಳ ಆರೈಕೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕಿ ಸವಿತಾ ರೈ ಮಾತನಾಡಿ, ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಎಲ್ಲ ರೀತಿಯ ಅರೋಗ್ಯ ಸೇವೆಗಳು ಒಂದೇ ಸೂರಿನಲ್ಲಿ ದೊರೆಯುತ್ತಿದೆ. ಅಚ್ಚುಕಟ್ಟಾದ ಸೇವೆ ಸಿಗುತ್ತಿದೆ. ಗ್ರಾಮೀಣ ಜನರಿಗೆ ಸೌಲಭ್ಯ ಸಿಗಬೇಕೆಂಬ ಉದ್ದೇಶದಿಂದ ಇಂತಹ ಸ್ಥಳಗಳಲ್ಲಿ ಅರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿದೆ. ಜನರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ವೈದ್ಯಕೀಯ ಸೇವೆಗಳ ಪ್ರಯೋಜನ ಪಡೆಯಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ವಿಶ್ವ ಕುಂಬೂರು ಮಾತನಾಡಿ, ಗ್ರಾಮೀಣ ಜನರಿಗೆ ಆರೋಗ್ಯ ಸೇವೆಗಳನ್ನು ಮನೆಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಇಂತಹ ಶಿಬಿರಗಳನ್ನು ಸಂಘದ ವತಿಯಿಂದ ಆಯೋಜಿಸಲಾಗುತ್ತಿದೆ ಎಂದು ಹೇಳಿದರು. ಆರೋಗ್ಯ, ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಜನರಿಗೆ ನೆರವಾಗುವ ಕಾರ್ಯಕ್ರಮಗಳನ್ನು ಮುಂದೆಯೂ ಹಮ್ಮಿಕೊಳ್ಳಲಾಗುವುದು ಎಂದರು.
ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್ ಮಾತನಾಡಿ, ಪ್ರತಿಯೊಬ್ಬರೂ ನಿಯಮಿತ ವ್ಯಾಯಾಮ ನಿತ್ಯ ಮಾಡಿದರೆ ಆರೋಗ್ಯದಿಂದಿರಬಹುದು. ಅರೋಗ್ಯ ಇದ್ದರೆ ಮಾತ್ರ ಕೆಲಸವನ್ನು ಬದ್ದತೆಯಿಂದ ಮಾಡಲು ಸಾಧ್ಯ ಎಂದು ಅಭಿಪ್ರಾಯಿಸಿದರು.
ವೇದಿಕೆಯಲ್ಲಿ ಪಂಚಾಯಿತಿ ಆಡಳಿತಾಧಿಕಾರಿ ಹೇಮಂತ್, ಪಿಡಿಒ ರವಿ, ಕರವೇ ಅಧ್ಯಕ್ಷ ಬಬಿನ್ ನಾಗಂಡ ಇದ್ದರು.
ಶಿಬಿರದಲ್ಲಿ ಸಾಮಾನ್ಯ ಆರೋಗ್ಯ ತಪಾಸಣೆ, ರಕ್ತದೊತ್ತಡ, ಮಧುಮೇಹ ಪರೀಕ್ಷೆ, ಮಹಿಳಾ ಮತ್ತು ಮಕ್ಕಳ ಆರೋಗ್ಯ ತಪಾಸಣೆ, ಕೀಲು, ನೇತ್ರ, ಮಾನಸಿಕ, ಚರ್ಮ, ಸರ್ಜರಿ ಸೇರಿದಂತೆ ವಿವಿಧ ಸೇವೆಗಳನ್ನು ಒದಗಿಸಲಾಯಿತು. ವೈದ್ಯರು ಸಾರ್ವಜನಿಕರ ಆರೋಗ್ಯ ಸಮಸ್ಯೆಗಳನ್ನು ಆಲಿಸಿ ಅಗತ್ಯ ಸಲಹೆ ನೀಡಿದರು. 373 ಮಂದಿ ಪರೀಕ್ಷೆ ಗೆ ಒಳಗಾದರು. ಸಾರ್ವಜನಿಕರು, ಪಂಚಾಯಿತಿ ಸಿಬ್ಬಂದಿ ಮತ್ತು ಪತ್ರಕರ್ತರು ರಕ್ತದಾನ ಮಾಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net