ಡ್ರಗ್ಸ್ ದುಷ್ಪರಿಣಾಮ ಕುರಿತು ಜಾಗೃತಿ ಅಗತ್ಯ

ಜಿಲ್ಲಾ ಮಟ್ಟದ ಮಾದಕ ವಸ್ತು ದ್ರವ್ಯ ಸಮನ್ವಯ ಕೇಂದ್ರ ಸಭೆಯಲ್ಲಿ ಜಿಲಾಧಿಕಾರಿ ಎಸ್.ಜೆ.ಸೋಮಶೇಖರ್ ಮಾತನಾಡಿದರು. ಬಿಂಧುಮಣಿ, ಅಭಿಷೇಕ್, ಸೆಂಥಿಲ್ ಕುಮಾರ್ ಇತರರು ಇದ್ದರು.
ಜಿಲ್ಲಾ ಮಟ್ಟದ ಮಾದಕ ವಸ್ತು ದ್ರವ್ಯ ಸಮನ್ವಯ ಕೇಂದ್ರ ಸಭೆಯಲ್ಲಿ ಜಿಲಾಧಿಕಾರಿ ಎಸ್.ಜೆ.ಸೋಮಶೇಖರ್ ಮಾತನಾಡಿದರು. ಬಿಂಧುಮಣಿ, ಅಭಿಷೇಕ್, ಸೆಂಥಿಲ್ ಕುಮಾರ್ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • drugs
ಮಡಿಕೇರಿ: ಇತ್ತೀಚಿನ ದಿನಗಳಲ್ಲಿ ಮಾದಕ ವಸ್ತುಗಳ ಜಾಲ ಎಲ್ಲಡೆ ಪತ್ತೆಯಾಗುತ್ತಿದ್ದು, ಅವುಗಳಿಂದ ಉಂಟಾಗುವ ದುಷ್ಪರಿಣಾಮ ಕುರಿತು ಹೆಚ್ಚಿನ ಜಾಗೃತಿ ಮೂಡಿಸುವಂತಾಗಬೇಕು ಎಂದು ಜಿಲಾಧಿಕಾರಿ ಎಸ್.ಜೆ.ಸೋಮಶೇಖರ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಕೇಂದ್ರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಯುವಜನರು ಮಾದಕ ವಸ್ತುಗಳ ಚಟಕ್ಕೆ ತುತ್ತಾಗಿ, ಇಡೀ ಜೀವನವನ್ನೇ ಹಾಳುಮಾಡಿ ಕೊಳ್ಳುತ್ತಿದ್ದಾರೆ. ಆದ್ದರಿಂದ ಈ ಬಗ್ಗೆ ಶಾಲಾ-ಕಾಲೇಜು, ವಿದ್ಯಾರ್ಥಿ ನಿಲಯಗಳು ಸೇರಿದಂತೆ ಎಲ್ಲೆಡೆ ಅರಿವು ಮೂಡಿಸಬೇಕು. ಈ ಬಗ್ಗೆ ಕಾರ್ಯಕ್ರಮ ಆಯೋಜಿಸಬೇಕು ಎಂದು ಜಿಲ್ಲಾಧಿಕಾರಿ ಸಲಹೆ ಮಾಡಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಶಾಲಾ ಶಿಕ್ಷಣ, ಪದವಿ ಪೂರ್ವ ಶಿಕ್ಷಣ ಹಾಗೂ ಕಾಲೇಜು ಶಿಕ್ಷಣ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಸಮಗ್ರ ಗಿರಿಜನ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಕೃಷಿ, ತೋಟಗಾರಿಕೆ, ಪಶುಪಾಲನೆ, ಯುವ ಸಬಲೀಕರಣ, ಕಾರ್ಮಿಕ, ಹೀಗೆ ವಿವಿಧ ಇಲಾಖೆಗಳು ಮಾದಕ ವಸ್ತುಗಳ ಬಳಕೆಯಿಂದ ಉಂಟಾಗುವ ಕೆಟ್ಟ ಪರಿಣಾಮ ಕುರಿತು ತಮ್ಮ ತಮ್ಮ ಇಲಾಖೆ ವ್ಯಾಪ್ತಿಯಲ್ಲಿ ಜಾಗೃತಿ ಮೂಡಿಸಲು ಶ್ರಮಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂಧುಮಣಿ ಮಾತನಾಡಿ, ಮಾದಕ ವಸ್ತುಗಳ ಜಾಲ ತಡೆಗಟ್ಟುವ ಬಗ್ಗೆ ಜಿಲ್ಲೆಯ ಗಡಿ ಭಾಗದಲ್ಲಿ ಹೆಚ್ಚಿನ ಎಚ್ಚರ ವಹಿಸಬೇಕಿದೆ. ಅಂತಾರಾಜ್ಯ ಗಡಿ ಪ್ರದೇಶದ ಚೆಕ್‌ಪೋಸ್ಟ್‌ಗಳಲ್ಲಿ ವಾಹನ ಮತ್ತು ಪ್ರಯಾಣಿಕರ ತಪಾಸಣೆ ಮಾಡಬೇಕಿದೆ. ಡ್ರಗ್ ಟೆಸ್ಟ್ ಕಿಟ್ ಅನ್ನು ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ದಾಸ್ತಾನು ಮಾಡಿಕೊಳ್ಳಬೇಕು ಎಂದು ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸಲಹೆ ನೀಡಿದರು.
ಜಿಲ್ಲೆಯಲ್ಲಿ ಮಾದಕ ವಸ್ತುಗಳಿಗೆ ಸಂಬಂಧಿಸಿದಂತೆ 58 ಪ್ರಕರಣಗಳು ದಾಖಲಾಗಿದ್ದು, ಸುಮಾರು ಎರಡೂವರೆ ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಉಪ ವಿಭಾಗಾಧಿಕಾರಿ ಹಾಗೂ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ನಿತಿನ್ ಚಕ್ಕಿ ಮಾತನಾಡಿ, ಜಿಲ್ಲೆಯ ಹೋಂ ಸ್ಟೇ ಗಳಲ್ಲಿಯೂ ರ‌್ಯಾಂಡಮ್ ಆಗಿ ಪರೀಕ್ಷಿಸುವಂತಾಗಬೇಕು ಎಂದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಮಾತನಾಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಶ ಮುಕ್ತ ಭಾರತ ಹೆಸರಿನಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್ ಮಾತನಾಡಿ, ಗಡಿಭಾಗದ ಚೆಕ್‌ಪೋಸ್ಟ್‌ಗಳಲ್ಲಿ ವಾಹನಗಳ ತಪಾಸಣೆಗೆ ಕೈಜೋಡಿಸಲಾಗುವುದು. ಮಾದಕ ವಸ್ತುಗಳ ನಿಯಂತ್ರಣ ಸಂಬಂಧ ಜಿಲ್ಲಾ ಪೊಲೀಸ್ ಇಲಾಖೆ ಜತೆ ಸಹಕರಿಸಲಾಗುವುದು ಎಂದರು.
ಸಹಾಯಕ ಔಷಧ ನಿಯಂತ್ರಣಾಧಿಕಾರಿ ಅಜಯ್ ರಾಜ್ ಮಾತನಾಡಿದರು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸೆಂಥಿಲ್ ಕುಮಾರ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬಸವರಾಜು, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ವಿಜಯ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಚಂದ್ರಶೇಖರ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಶಶಿಧರ, ಡಿವೈಎಸ್‌ಪಿ ಸೂರಜ್, ಐ.ಪಿ.ಮೇದಪ್ಪ, ಸರ್ಕಲ್ ಇನ್ಸ್‌ಪೆಕ್ಟರ್ ಪಿ.ರಾಜು, ಅಬಕಾರಿ ಉಪ ನಿರೀಕ್ಷಕ ಅಬ್ರಾಹಂ ಚೇತನ್, ಪೊಲೀಸ್ ಇಲಾಖೆಯ ಗುಪ್ತಚರ ವಿಭಾಗದ ಅಧಿಕಾರಿ ಟಿ.ಆರ್.ಸುರೇಂದ್ರ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net