ನುಗ್ಗೇಹಳ್ಳಿ ಹೋಬಳಿ ಕೇಂದ್ರದ ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ಹೊಯ್ಸಳ ಕ್ರಿಕೆಟರ್ಸ್ ವತಿಯಿಂದ ಆಯೋಜಿಸಿದ್ದ ಪ್ರೀಮಿಯರ್ ಲೀಗ್ ಸೀಸನ್ 1 ಕ್ರಿಕೆಟ್ ಪಂದ್ಯಾವಳಿಯನ್ನು ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಎ.ಗೋಪಾಲಸ್ವಾಮಿ ಉದ್ಘಾಟಿಸಿದರು. ಪ್ರಕಾಶ್, ವೇಣು ಕುಮಾರ್, ಅಶೋಕ್, ನಟರಾಜ್, ಪ್ರದೀಪ್, ಇದ್ದರು.
ನುಗ್ಗೇಹಳ್ಳಿ: ಹೋಬಳಿ ಕೇಂದ್ರದ ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ಗ್ರಾಮೀಣ ಆಟಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮಿನಿ ಕ್ರೀಡಾಂಗಣ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರನ್ನು ಒತ್ತಾಯಿಸುವುದಾಗಿ ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಎ.ಗೋಪಾಲಸ್ವಾಮಿ ತಿಳಿಸಿದರು.
ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ಹೊಯ್ಸಳ ಕ್ರಿಕೆಟರ್ಸ್ ವತಿಯಿಂದ ಪ್ರೀಮಿಯರ್ ಲೀಗ್ ಸೀಸನ್ 1 ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು.
ಇದೇ ಮೊದಲ ಬಾರಿಗೆ ಹೊಯ್ಸಳ ಕ್ರಿಕೆಟರ್ಸ್ ವತಿಯಿಂದ ಕ್ರಿಕೆಟ್ ಪಂದ್ಯಾವಳಿ ಆಯೋಜಿಸುವ ಮೂಲಕ ಕ್ರಿಕೆಟ್ ಪಂದ್ಯಾವಳಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಜತೆಗೆ ಹೋಬಳಿಯ ಮೂಲ ಕ್ರೀಡೆಯಾದ ವಾಲಿಬಾಲ್ ಆಟಕ್ಕೆ ಹೆಚ್ಚಿನ ಪ್ರೋತ್ಸಾಹ ಅಗತ್ಯವಿದೆ. ಎಲ್ಲ ಕ್ರೀಡೆಗಳಿಗೂ ಅವಕಾಶ ಕಲ್ಪಿಸುವ ಸಲುವಾಗಿ ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ಮಿನಿ ಕ್ರೀಡಾಂಗಣ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರನ್ನು ಹಾಗೂ ಕ್ರೀಡಾ ಸಚಿವರನ್ನು ಒತ್ತಾಯಿಸುವುದಾಗಿ ಹೇಳಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಯೋಜನೆಗಳ ಜತೆಗೆ ಪಕ್ಷಾತೀತವಾಗಿ ಎಲ್ಲ ಶಾಸಕರ ಕ್ಷೇತ್ರಗಳಿಗೂ ಹೆಚ್ಚಿನ ಅನುದಾನ ನೀಡುತ್ತಿದೆ. ತಾಲೂಕಿನಲ್ಲಿ ಏತ ನೀರಾವರಿ ಯೋಜನೆ ಸೇರಿದಂತೆ ರಸ್ತೆ, ಕುಡಿಯುವ ನೀರು, ಸಮುದಾಯ ಭವನ, ಗ್ರಾಮೀಣಾಭಿವೃದ್ಧಿ ಸೇರಿದಂತೆ ಅನೇಕ ಅಭಿವೃದ್ಧಿ ಕೆಲಸಗಳಿಗೆ ಕಳೆದ ಎರಡೂವರೆ ವರ್ಷಗಳಲ್ಲಿ ಹೆಚ್ಚಿನ ಅನುದಾನ ಬಿಡುಗಡೆ ಮಾಡಿದೆ. ನಮಗೆ ರಾಜಕಾರಣದ ಅವಶ್ಯಕತೆ ಇಲ್ಲ. ತಾಲೂಕಿನ ಅಭಿವೃದ್ಧಿಯಷ್ಟೇ ಮುಖ್ಯ. ಕಳೆದ ಚುನಾವಣೆಯಲ್ಲಿ ಅಲ್ಪ ಮತಗಳಿಂದ ಸೋತಿದ್ದೇನೆ. ಸೋಲನ್ನೇ ಸವಾಲಾಗಿ ಸ್ವೀಕರಿಸಿ ಕ್ಷೇತ್ರದ ಜನರ ಕಷ್ಟ ಸುಖಗಳಿಗೆ ಸದಾ ಸ್ಪಂದಿಸುತ್ತಿದ್ದೇನೆ. ತಾಲೂಕಿನ ಅಭಿವೃದ್ಧಿಯೇ ನನ್ನ ಗುರಿಯಾಗಿದೆ ಎಂದು ತಿಳಿಸಿದರು.
ಮುಖಂಡರಾದ ಎಸ್. ಪ್ರಕಾಶ್, ಬಾಣನಕೆರೆ ಅಶೋಕ್, ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ವೇಣು, ನಟರಾಜ್ ಯಾದವ್, ಶಿಕ್ಷಕ ನಂಜುಂಡಿ, ಪ್ರದೀಪ್, ಅಚ್ಚು, ಹೊಯ್ಸಳ ಕ್ರಿಕೆಟರ್ಸ್ ಸದಸ್ಯರು ಹಾಗೂ ಆಟಗಾರರು ಇದ್ದರು.