ಮಡಿಕೇರಿ: ನಗರದ ತಹಶೀಲ್ದಾರ್ ಕಚೇರಿಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಬುಧವಾರ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.
ಭೂ ಸುರಕ್ಷಾ ಯೋಜನೆ, ಇ-ಪೌತಿ ಖಾತೆ, ದುರಸ್ತಿ ಪ್ರಕರಣ ಇತ್ಯರ್ಥ, ಕೆರೆಗಳ ಸಂರಕ್ಷಣೆ ಮತ್ತಿತರ ಬಗ್ಗೆ ಮಾಹಿತಿ ಪಡೆದು, ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಆಗಬೇಕಿರುವ ಕೆಲಸಗಳನ್ನು ಬೇಗ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ತಾಕೀತು ಮಾಡಿದರು.
ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಚುರುಕಿನಿಂದ ಕೆಲಸ ಮಾಡಿದ್ದಲ್ಲಿ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ದೊರೆಯಲಿದೆ. ಆ ನಿಟ್ಟಿನಲ್ಲಿ ನಿಯಮಾನುಸಾರ ತ್ವರಿತವಾಗಿ ಕಡತಗಳನ್ನು ವಿಲೇವಾರಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಮಾತನಾಡಿ, ಸಾರ್ವಜನಿಕರು ಕಂದಾಯ ಇಲಾಖೆಯಲ್ಲಿ ಆಗಬೇಕಿರುವ ಕೆಲಸಗಳ ಬಗ್ಗೆ ಹೆಚ್ಚು ಗಮನಿಸುತ್ತಾರೆ. ಆದ್ದರಿಂದ ಸಾರ್ವಜನಿಕರಿಗೆ ಸ್ಪಂದಿಸುವಲ್ಲಿ ಕರ್ತವ್ಯ ನಿರ್ವಹಿಸಬೇಕು ಎಂದು ಸಲಹೆ ಮಾಡಿದರು.
ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ತಹಶೀಲ್ದಾರ್ ಶ್ರೀಧರ, ಕಂದಾಯ ಇಲಾಖೆ ಅಧಿಕಾರಿಗಳು ಇತರರು ಇದ್ದರು.