ಕೇಂದ್ರಕ್ಕೆ ಆನೆ-ಮಾನವ ಸಂಘರ್ಷ

ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದ್ರ ಯಾದವ್ ಅವರಿಗೆ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆನೆ-ಮಾನವ ಸಂಘರ್ಷಕ್ಕೆ ಪರಿಹಾರ ಕಲ್ಪಿಸುವ ಸಂಬAಧ ಮನವಿ ಮಾಡಿದರು.
ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದ್ರ ಯಾದವ್ ಅವರಿಗೆ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆನೆ-ಮಾನವ ಸಂಘರ್ಷಕ್ಕೆ ಪರಿಹಾರ ಕಲ್ಪಿಸುವ ಸಂಬAಧ ಮನವಿ ಮಾಡಿದರು.
Published on
ಮಡಿಕೇರಿ:
ಜಿಲ್ಲೆಯಲ್ಲಿ ಆನೆ-ಮಾನವ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಕಾಡಂಚಿನ ಗ್ರಾಮಗಳಲ್ಲಿ ಜನರು ವಾಸ ಮಾಡಲು ಆಗದ ಸ್ಥಿತಿ ತಲುಪಿದೆ. ಕೆಲವು ಆನೆಗಳು ಕಾಫಿತೋಟಗಳನ್ನೇ ತಮ್ಮ ಅಡ್ಡೆಯನ್ನಾಗಿ ಮಾಡಿಕೊಂಡಿದ್ದು, ಕಾರ್ಮಿಕರು, ಮಾಲೀಕರು ಜೀವ ಕೈಯಲ್ಲಿ ಹಿಡಿದುಕೊಂಡು ತೋಟಗಳನ್ನು ಪ್ರವೇಶಿಸುವಂತಾಗಿದೆ.
ಈ ಸಂಬAಧ ಕೊಡಗಿನಲ್ಲಿ ಆನೆ-ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಕೋರಿ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವರ ಮೊರೆ ಹೋಗಿದ್ದಾರೆ. ಮತ್ತೊಂದು ಕಡೆ ಬೆಂಗಳೂರು ಕೊಡವ ಸಮಾಜ ನಿಯೋಗ ಕರ್ನಾಟಕದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಭೇಟಿ ಮಾಡಿ ಪರಿಸ್ಥಿತಿಯ ಗಂಭೀರತೆಯನ್ನು ತಿಳಿಸುವ ಪ್ರಯತ್ನ ಮಾಡಿದೆ.
ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿದ ಯದುವೀರ್ ಕೊಡಗಿನಲ್ಲಿ ಹೆಚ್ಚುತ್ತಿರುವ ಆನೆ-ಮಾನವ ಸಂಘರ್ಷಕ್ಕೆ ತುರ್ತು ಕ್ರಮದ ಅಗತ್ಯತೆ ಬಗ್ಗೆ ಗಮನ ಸೆಳೆದಿದ್ದಾರೆ. ಕೊಡಗು ಜಿಲ್ಲೆಯ ವಿವಿಧ ಭಾಗಗಳಲ್ಲಿ ಆನೆಗಳು ಕೃಷಿ ಭೂಮಿಗಳು ಮತ್ತು ಜನವಸತಿ ಪ್ರದೇಶಗಳಿಗೆ ನುಗ್ಗುತ್ತಿರುವ ಘಟನೆಗಳು ನಿರಂತರವಾಗಿ ಹೆಚ್ಚುತ್ತಿದ್ದು, ಇದು ಜಿಲ್ಲೆಯ ಜನರ ಪ್ರಮುಖ ಸಮಸ್ಯೆಯಾಗಿ ಪರಿಣಮಿಸಿದೆ.
ಆನೆಗಳ ದಾಳಿಯಿಂದ ಮಾನವ ಜೀವಹಾನಿ, ಗಾಯಗಳು, ಬೆಳೆ ನಷ್ಟ, ಆಸ್ತಿ ಹಾನಿ ಮತ್ತು ಸಾರ್ವಜನಿಕರಲ್ಲಿ ಭಯದ ವಾತಾವರಣ ನಿರ್ಮಾಣವಾಗುತ್ತಿದೆ. ವಿಶೇಷವಾಗಿ ಅರಣ್ಯ ಅಂಚಿನ ಗ್ರಾಮಗಳಲ್ಲಿ ವಾಸಿಸುವ ರೈತರು, ತೋಟ ಮಾಲೀಕರು ಮತ್ತು ಕಾರ್ಮಿಕರು ಈ ಸಮಸ್ಯೆಯಿಂದ ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಆನೆ-ಮಾನವ ಸಂಘರ್ಷ ಕಡಿಮೆಗೊಳಿಸಲು ಸಮಗ್ರ ಹಾಗೂ ದೀರ್ಘಕಾಲೀನ ಕಾರ್ಯತಂತ್ರವನ್ನು ರೂಪಿಸಲು ಕೇಂದ್ರ ಸರ್ಕಾರದ ನೆರವು ಅಗತ್ಯವಿದೆ ಎಂದು ಸಚಿವರಿಗೆ ಮನವರಿಕೆ ಮಾಡಿದ್ದಾರೆ.
ಆನೆ ಬಾರದಂತೆ ತಡೆಗೋಡೆಗಳ ಬಲವರ್ಧನೆ, ಸೌರ ಬೇಲಿ ವ್ಯವಸ್ಥೆ, ಆನೆಗಳ ಚಲನವಲನದ ವೈಜ್ಞಾನಿಕ ಮೇಲ್ವಿಚಾರಣೆ, ಮುನ್ನೆಚ್ಚರಿಕೆ ವ್ಯವಸ್ಥೆ, ಅರಣ್ಯ ವಾಸಸ್ಥಳಗಳ ಸುಧಾರಣೆ, ತ್ವರಿತ ಪ್ರತಿಕ್ರಿಯಾ ತಂಡಗಳ ರಚನೆ ಹಾಗೂ ಪೀಡಿತ ಕುಟುಂಬಗಳಿಗೆ ಮತ್ತು ರೈತರಿಗೆ ಸೂಕ್ತ ಪರಿಹಾರ ನೀಡುವ ವ್ಯವಸ್ಥೆಯನ್ನು ಬಲಪಡಿಸುವಂತೆ ಕೋರಿರುವ ಯದುವೀರ್ ವನ್ಯಜೀವಿ ಸಂರಕ್ಷಣೆ ಅತ್ಯಂತ ಮುಖ್ಯವಾದರೂ, ಅರಣ್ಯ ಅಂಚಿನ ಪ್ರದೇಶಗಳಲ್ಲಿ ವಾಸಿಸುವ ಜನರ ಜೀವ ಮತ್ತು ಜೀವನೋಪಾಯದ ರಕ್ಷಣೆಯೂ ಅಷ್ಟೇ ಮಹತ್ವದ್ದಾಗಿದೆ ಎಂದು ಸಚಿವರ ಎದುರು ಪ್ರತಿಪಾದಿಸಿದ್ದಾರೆ.
ಮತ್ತೊಂದು ಕಡೆ ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷ ಚಿರಿಯಪಂಡ ಸುರೇಶ್ ನಂಜಪ್ಪ ನೇತೃತ್ವದಲ್ಲಿ ಆಡಳಿತ ಮಂಡಳಿ ಮತ್ತು ಕಾನೂನು ಸಮಿತಿ ಸದಸ್ಯರನ್ನೊಳಗೊಂಡ ನಿಯೋಗ ಅರಣ್ಯ ಭವನಕ್ಕೆ ಭೇಟಿ ನೀಡಿ ಕರ್ನಾಟಕದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಅರಣ್ಯ ಪಡೆ ಮುಖ್ಯಸ್ಥರು) ಡಾ. ಮೀನಾಕ್ಷಿ ನೇಗಿ ಅವರನ್ನು ಭೇಟಿ ಮಾಡಿ, ಕೊಡಗಿನಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಮಾನವ-ವನ್ಯಜೀವಿ ಸಂಘರ್ಷದ ಕುರಿತು ಚರ್ಚೆ ನಡೆಸಿತು.
ಕೊಡಗಿನ ಪ್ರಸ್ತುತ ಸ್ಥಿತಿಯನ್ನು ಅರಣ್ಯ ಇಲಾಖೆ ಹಿರಿಯ ಅಧಿಕಾರಿ ಗಮನಕ್ಕೆ ತಂದ ಬೆಂಗಳೂರು ಕೊಡವ ಸಮಾಜದ ನಿಯೋಗ ಹೆಚ್ಚುತ್ತಿರುವ ಮಾನವ-ವನ್ಯಜೀವಿ ಸಂಘರ್ಷ ಹಾಗೂ ಇದರಿಂದಾಗಿ ಅಮೂಲ್ಯವಾದ ಮಾನವ ಜೀವಗಳು ಬಲಿಯಾಗುತ್ತಿರುವುದಕ್ಕೆ ತೀವ್ರ ಕಳವಳ ವ್ಯಕ್ತಪಡಿಸಿತು. ಸ್ಥಳೀಯ ಸಮುದಾಯ ಮತ್ತು ಅರಣ್ಯ ಇಲಾಖೆಯ ಜಂಟಿ ಸಹಭಾಗಿತ್ವದೊಂದಿಗೆ ಕೈಗೊಳ್ಳಬಹುದಾದ ಸಂಭಾವ್ಯ ಕ್ರಮಗಳ ಕುರಿತು ಸಭೆಯಲ್ಲಿ ಸುದೀರ್ಘ ಹಾಗೂ ರಚನಾತ್ಮಕ ಚರ್ಚೆ ನಡೆಯಿತು.
ಆನೆಗಳು ಜನವಸತಿ ಪ್ರದೇಶ ಹಾಗೂ ಕೃಷಿ ಭೂಮಿಗೆ ನುಗ್ಗದಂತೆ ತಡೆಯಲು, ಸೂಕ್ಷ್ಮ ಪ್ರದೇಶಗಳಲ್ಲಿ ರೈಲ್ವೆ ಬ್ಯಾರಿಕೇಡ್ ಬೇಲಿಗಳನ್ನು ಅಳವಡಿಸುವ ಮೂಲಕ ಅರಣ್ಯ ಗಡಿಗಳನ್ನು ಬಲಪಡಿಸುವ ತುರ್ತು ಅಗತ್ಯವಿದೆ. ನಾಗರಹೊಳೆ ಅಭಯಾರಣ್ಯದಲ್ಲಿ ಸಫಾರಿ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸುವ ಸಾಧ್ಯತೆಯನ್ನು ಪರಿಶೀಲಿಸಬೇಕು. ವನ್ಯಜೀವಿಗಳು ಗ್ರಾಮ ಹಾಗೂ ಕಾಫಿ ತೋಟಗಳತ್ತ ಮುಖ ಮಾಡಲು ಇರುವ ಮೂಲ ಕಾರಣಗಳನ್ನು ಪತ್ತೆಹಚ್ಚಲು ಸಮಗ್ರ ಅಧ್ಯಯನ ನಡೆಸಬೇಕು ಎಂದು ಮನವಿ ಮಾಡಲಾಯಿತು.
ಜನವಸತಿ ಪ್ರದೇಶಗಳಿಗೆ ಪದೇ ಪದೇ ಲಗ್ಗೆ ಇಟ್ಟು ತೊಂದರೆ ನೀಡುವ ವನ್ಯಜೀವಿಗಳನ್ನು ಗುರುತಿಸಿ, ಸೆರೆಹಿಡಿದು ಬೇರೆಡೆಗೆ ಸ್ಥಳಾಂತರಿಸಬೇಕು.
ಕಾಫಿ ತೋಟಗಳನ್ನೇ ತಮ್ಮ ಕಾಯಂ ನೆಲೆಯಾಗಿಸಿಕೊಂಡು, ನಿರಂತರವಾಗಿ ಸಂಘರ್ಷಕ್ಕೆ ಕಾರಣವಾಗುತ್ತಿರುವ ಇಡೀ ಆನೆ ಹಿಂಡುಗಳನ್ನು ಸ್ಥಳಾಂತರಿಸುವ ಸಾಧ್ಯತೆಗಳ ಬಗ್ಗೆಯೂ ಚರ್ಚಿಸಲಾಯಿತು.
ವೈಜ್ಞಾನಿಕವಾಗಿ ಮತ್ತು ಕಾನೂನಾತ್ಮಕವಾಗಿ ಎಲ್ಲೆಲ್ಲಿ ಸಾಧ್ಯವೋ ಅಲ್ಲೆಲ್ಲಾ ವನ್ಯಜೀವಿಗಳ ಸಂತತಿ ನಿರ್ವಹಣಾ ಕ್ರಮಗಳನ್ನು ಕೈಗೊಳ್ಳಬೇಕು.
ಅರಣ್ಯದೊಳಗೆ ಮೇವಿನ ಜಾತಿಯ ಗಿಡಗಳು, ಬಿದಿರು, ಹಲಸು ಸೇರಿದಂತೆ ಇನ್ನಿತರ ಸೂಕ್ತ ಸಸ್ಯಗಳನ್ನು ನೆಟ್ಟು ಪೋಷಿಸುವ ಮೂಲಕ ವನ್ಯಜೀವಿಗಳಿಗೆ ನೈಸರ್ಗಿಕ ಆಹಾರದ ಲಭ್ಯತೆಯನ್ನು ಹೆಚ್ಚಿಸಬೇಕು. ಹಲವು ಅರಣ್ಯ ಪ್ರದೇಶಗಳಲ್ಲಿ ವನ್ಯಜೀವಿಗಳ ಆವಾಸಸ್ಥಾನದ ಗುಣಮಟ್ಟ ಮತ್ತು ಆಹಾರದ ಲಭ್ಯತೆಯ ಮೇಲೆ ತೀವ್ರ ಪರಿಣಾಮ ಬೀರಿರುವ ಆಕ್ರಮಣಕಾರಿ ಲಂಟಾನಾ ಕಳೆಯನ್ನು ತುರ್ತಾಗಿ ನಿಯಂತ್ರಿಸುವ ಅಗತ್ಯವಿದೆ ಎಂದು ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಯಿತು.
ಕೊಡಗಿನಲ್ಲಿ ಆನೆ-ಮಾನವ ಸಂಘರ್ಷ ಬಿಗಡಾಯಿಸಿದ್ದು, ಇದರ ನಿಯಂತ್ರಣ ಅರಣ್ಯ ಇಲಾಖೆ ಪಾಲಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಉನ್ನತ ಮಟ್ಟದಲ್ಲಿ ನಿರ್ಧಾರಗಳು ಆಗಬೇಕಿದ್ದು, ಸದ್ಯದ ಈ ಎರಡು ಬೆಳವಣಿಗೆಗಳು ಸ್ಥಳೀಯರಲ್ಲಿ ದೊಡ್ಡ ಮಟ್ಟದ ನಿರೀಕ್ಷೆ ಮೂಡಿಸಿದೆ.
"

ಕೊಡಗಿನ ಆನೆ-ಮಾನವ ಸಂಘರ್ಷಕ್ಕೆ ಪರಿಹಾರ ಸೇರಿದಂತೆ ಜನರ ಸುರಕ್ಷತೆ, ಪರಿಸರ ಸಂರಕ್ಷಣೆ ಹಾಗೂ ಸುಸ್ಥಿರ ಅಭಿವೃದ್ಧಿಯನ್ನು ಸಮನ್ವಯಗೊಳಿಸುವ ನಿಟ್ಟಿನಲ್ಲಿ ನಿರಂತರವಾಗಿ ಪ್ರಯತ್ನಿಸಲಾಗುತ್ತಿದೆ. ಕೇಂದ್ರ ಸಚಿವ ಭೂಪೇಂದ್ರ ಯಾದವ್ ನಮ್ಮ ಮನವಿಗಳನ್ನು ಸಕಾರಾತ್ಮಕವಾಗಿ ಪರಿಗಣಿಸಿದ್ದಾರೆ. ಸಂಬAಧಿತ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

— ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮೈಸೂರು-ಕೊಡಗು ಸಂಸದ


ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net