ಇದು ರಸ್ತೆಯೋ, ಕೆಸರು ಗದ್ದೆಯೋ..?

ಸೋಮವಾರಪೇಟೆ ಸಮೀಪದ ಯರಪಾರೆ ಗ್ರಾಮದ ರಸ್ತೆ ಹೊಂಡಮಯವಾಗಿರುವುದು.
ಸೋಮವಾರಪೇಟೆ ಸಮೀಪದ ಯರಪಾರೆ ಗ್ರಾಮದ ರಸ್ತೆ ಹೊಂಡಮಯವಾಗಿರುವುದು.
Published on

ಪ್ರಮುಖ ಮುಖ್ಯಾಂಶಗಳು

  • ಕಾಡಂಚಿನ ಯರಪಾರೆಯಲ್ಲಿ ಗುಂಡಿ ಗಂಡಾಂತನ
  • ದುರಸ್ತಿ ಕಾರ್ಯಕ್ಕೆ ಅಧಿಕಾರಿಗಳ ನಿರ್ಲಕ್ಷ್ಯ

ಸೋಮವಾರಪೇಟೆ :

ತಾಲೂಕಿನ ಗಣಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಂಚಿನ ಯರಪಾರೆ ಗ್ರಾಮದಲ್ಲಿ ರಸ್ತೆಗಳು ಗುಂಡಿಮಯವಾಗಿರುವುದರಿಂದ ಗ್ರಾಮಸ್ಥರು ಪರದಾಡುವಂತಾಗಿದೆ.

ಹಲವು ವರ್ಷಗಳಿಂದ ನಿರಂತರವಾಗಿ ಮನವಿ ಸಲ್ಲಿಸುತ್ತಿದ್ದರೂ ಪರಿಹಾರ ದೊರಕದ ಹಿನ್ನೆಲೆಯಲ್ಲಿ ಗ್ರಾಮಸ್ಥರು ವಿಭಿನ್ನ ರೀತಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಹದಗೆಟ್ಟ ರಸ್ತೆಯಲ್ಲೇ ಗ್ರಾಮಸ್ಥರು ಬಾಳೆಗಿಡ ನೆಟ್ಟು ಪ್ರತಿಭಟನೆ ನಡೆಸಿದ್ದರು.
ಸೋಮವಾರಪೇಟೆ, ಬಾಣಾವಾರ, ಶನಿವಾರಸಂತೆ ರಾಜ್ಯ ಹೆದ್ದಾರಿಯಿಂದ ಯರಪಾರೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆ ಸೇರಿದಂತೆ ನಾಗಾವಾಲ ಹಾಗೂ ಬಾಣಾವಾರ ಸಂಗಯ್ಯನಪುರ ಮಾರ್ಗದ ರಸ್ತೆಗಳು ಸಂಪೂರ್ಣವಾಗಿ ಹಾಳಾಗಿವೆ. ಮಳೆಗಾಲದಲ್ಲಿ ಈ ರಸ್ತೆಗಳು ಕೆಸರುಮಯವಾಗಿ ಪರಿವರ್ತನೆಯಾಗುತ್ತಿದ್ದು, ವಾಹನ ಸಂಚಾರವೇ ಅಸಾಧ್ಯವಾಗುವ ಸ್ಥಿತಿ ನಿರ್ಮಾಣವಾಗಿದೆ. ಕೆಲವೆಡೆ ದೊಡ್ಡ ದೊಡ್ಡ ಗುಂಡಿಗಳು ಉಂಟಾಗಿ ದ್ವಿಚಕ್ರ ವಾಹನ ಸವಾರರು ಅಪಘಾತಕ್ಕೀಡಾಗುವ ಭೀತಿ ಎದುರಿಸುತ್ತಿದ್ದಾರೆ.

ರಸ್ತೆಯ ದುಸ್ಥಿತಿಯಿಂದಾಗಿ ಶಾಲಾ ವಾಹನಗಳು ಗ್ರಾಮಕ್ಕೆ ಪ್ರವೇಶಿಸುವುದನ್ನು ನಿಲ್ಲಿಸಿವೆ. ಇದರಿಂದ ವಿದ್ಯಾರ್ಥಿಗಳು ಪ್ರತಿದಿನವೂ ಮುಖ್ಯರಸ್ತೆಯವರೆಗೆ ನಡೆದು ಹೋಗಬೇಕಾದ ಅನಿವಾರ್ಯತೆ ಎದುರಿಸುತ್ತಿದ್ದಾರೆ. ಮಳೆಗಾಲದಲ್ಲಿ ಈ ಪ್ರಯಾಣ ಮತ್ತಷ್ಟು ಕಷ್ಟಕರವಾಗಿದ್ದು, ಮಕ್ಕಳ ಶಿಕ್ಷಣಕ್ಕೂ ಅಡ್ಡಿಯಾಗುತ್ತಿದೆ ಎಂದು ಪಾಲಕರು ಆತಂಕ ವ್ಯಕ್ತಪಡಿಸಿದ್ದಾರೆ. ಜತೆಗೆ ಬಾಡಿಗೆ ವಾಹನ ಚಾಲಕರು ಹೆಚ್ಚುವರಿ ಬಾಡಿಗೆ ವಿಧಿಸುತ್ತಿರುವುದರಿಂದ ಗ್ರಾಮಸ್ಥರ ಆರ್ಥಿಕ ಹೊರೆ ಹೆಚ್ಚಾಗಿದೆ.

ಕೃಷಿ ಪ್ರಧಾನ ಗ್ರಾಮವಾಗಿರುವ ಯರಪಾರೆ ಪ್ರದೇಶದಲ್ಲಿ ರೈತರು ತಮ್ಮ ಉತ್ಪನ್ನಗಳನ್ನು ಮಾರುಕಟ್ಟೆಗೆ ಸಾಗಿಸಲು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕಾಫಿ, ಅಡಿಕೆ, ಭತ್ತ, ಜೋಳ, ರಾಗಿ, ಶುಂಠಿ ಹಾಗೂ ಸುವರ್ಣಗಡ್ಡೆ ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆಯಲಾಗುತ್ತಿದ್ದು, ರಸ್ತೆ ಸಮಸ್ಯೆಯಿಂದ ಸಾಗಣೆ ವೆಚ್ಚ ಹೆಚ್ಚಾಗಿ ಲಾಭ ಕಡಿಮೆಯಾಗುತ್ತಿದೆ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ.

ಮಾಲಂಬಿ ಹಾಗೂ ಜೇನುಕಲ್ಲುಬೆಟ್ಟ ಮೀಸಲು ಅರಣ್ಯಗಳಿಂದ ಸುತ್ತುವರಿದಿರುವ ಈ ಗ್ರಾಮದಲ್ಲಿ ವನ್ಯಜೀವಿಗಳ ಹಾವಳಿಯೂ ಹೆಚ್ಚಾಗಿದೆ. ಕಾಡುಪ್ರಾಣಿಗಳು ಬೆಳೆಗಳನ್ನು ನಾಶಪಡಿಸುತ್ತಿರುವುದರಿಂದ ರೈತರು ರಾತ್ರಿ ವೇಳೆ ಜಾಗರಣೆ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆ ಸಮಸ್ಯೆಯ ಜತೆಗೆ ವನ್ಯಜೀವಿ ಹಾವಳಿ ಕೂಡ ಗ್ರಾಮಸ್ಥರ ಬದುಕನ್ನು ಸಂಕಷ್ಟಕ್ಕೆ ತಳ್ಳಿದೆ.

ಗ್ರಾಮದಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆಯ ಕೊರತೆಯೂ ಇದೆ. ಮಳೆ ನೀರು ಸರಿಯಾಗಿ ಹರಿಯದೆ ರಸ್ತೆಯಲ್ಲೇ ನಿಂತು ಮತ್ತಷ್ಟು ಹಾನಿ ಉಂಟು ಮಾಡುತ್ತಿದೆ. ಕೆಲ ಭಾಗಗಳಲ್ಲಿ ಸಣ್ಣ ಮಟ್ಟದ ರಸ್ತೆ ಕಾಮಗಾರಿ ನಡೆದಿದ್ದರೂ, ಸಂಪೂರ್ಣ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಕೇವಲ ಎರಡು ಕಿಲೋಮೀಟರ್ ರಸ್ತೆ ಅಭಿವೃದ್ಧಿಪಡಿಸಿದರೆ ಬಹುತೇಕ ಸಮಸ್ಯೆಗಳು ಪರಿಹಾರವಾಗಬಹುದು ಎಂದು ರೈತರು ಅಭಿಪ್ರಾಯಪಟ್ಟಿದ್ದಾರೆ.
ಹಲವು ಬಾರಿ ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಕ್ಷಣವೇ ಅಗತ್ಯ ಅನುದಾನ ಬಿಡುಗಡೆ ಮಾಡಿ ರಸ್ತೆ ದುರಸ್ತಿ ಕಾರ್ಯ ಆರಂಭಿಸಬೇಕೆಂದು ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ. ಇಲ್ಲವಾದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಎಚ್ಚರಿಕೆಯನ್ನು ಗ್ರಾಮಸ್ಥರು ನೀಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net