ಸಮಾಜ ತಿದ್ದುವ ಕೆಲಸ ಪತ್ರಕರ್ತರಿಂದಾಗಲಿ: ಅಶೋಕ್ ಸಂಗಪ್ಪ ಆಲೂರ

ಪತ್ರಿಕಾ ಭವನ ಟ್ರಸ್ಟ್‌ನ ೨೪ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ವಿದ್ಯಾರ್ಥಿಗಳು, ಪತ್ರಿಕಾ ಭವನ ಟ್ರಸ್ಟ್‌ನ ಪ್ರಮುಖರು ಪಾಲ್ಗೊಂಡಿದ್ದರು.
ಪತ್ರಿಕಾ ಭವನ ಟ್ರಸ್ಟ್‌ನ ೨೪ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ವಿದ್ಯಾರ್ಥಿಗಳು, ಪತ್ರಿಕಾ ಭವನ ಟ್ರಸ್ಟ್‌ನ ಪ್ರಮುಖರು ಪಾಲ್ಗೊಂಡಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸಮಾಜ ತಿದ್ದುವ ಕೆಲಸ ಪತ್ರಕರ್ತರಿಂದಾಗಲಿ
  • ಪತ್ರಿಕಾ ಭವನ ಟ್ರಸ್ಟ್‌ನ ೨೪ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಅಶೋಕ್ ಸಂಗಪ್ಪ ಆಲೂರ
ಮಡಿಕೇರಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಿಕಾ ರಂಗ ಅತ್ಯಂತ ಮಹತ್ವದ ಜವಾಬ್ದಾರಿಯನ್ನು ಹೊಂದಿರುವ ಅಂಗವಾಗಿದ್ದು, ಸಾಮಾಜಿಕ ವ್ಯವಸ್ಥೆಯ ಓರೆಕೋರೆಗಳನ್ನು ತಿದ್ದಿ, ಜನರ ಆಶೋತ್ತರಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಪರ್ತಕರ್ತರು ಕೆಲಸ ಮಾಡಬೇಕು ಎಂದು ಚಿಕ್ಕ ಅಳುವಾರ ಕೊಡಗು ವಿಶ್ವ ವಿದ್ಯಾನಿಲಯದ ಉಪಕುಲಪತಿ ಅಶೋಕ್ ಸಂಗಪ್ಪ ಆಲೂರ ಅಭಿಪ್ರಾಯ ವ್ಯಕ್ತಪಡಿಸಿದರು.
ನಗರದ ಪತ್ರಿಕಾ ಭವನದಲ್ಲಿ ಆಯೋಜಿತ ಕೊಡಗು ಪತ್ರಿಕಾ ಭವನ ಟ್ರಸ್ಟ್‌ನ ೨೪ನೇ ವಾರ್ಷಿಕೋತ್ಸವ ಸಮಾರಂಭವನ್ನು ಜ್ಯೋತಿ ಬೆಳಗಿ ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜದ ಆಗುಹೋಗುಗಳನ್ನು ತಿಳಿಸಿ ಸಮಾಜವನ್ನು ಸರಿದಾರಿಗೆ ತರುವ ಕೆಲಸ ಪತ್ರಕರ್ತರಿಂದ ಆಗುತ್ತಿದೆ. ಗ್ರಾಮೀಣ ಭಾಗದ ಜನರ ಧ್ವನಿಯಾಗಿ ಕೆಲಸ ಮಾಡುವ ಹೆಚ್ಚಿನ ಜವಾಬ್ದಾರಿ ಪತ್ರಕರ್ತರ ಮೇಲಿದೆ. ಪತ್ರಕರ್ತರು ಜನರನ್ನು ಸನ್ಮಾರ್ಗದತ್ತ ಕೊಂಡೊಯ್ಯುವ ಚಿಂತನೆ ಹೊಂದಿರಬೇಕು ಎಂದರು.
ಆಧುನಿಕ ಡಿಜಿಟಲ್ ಯುದಲ್ಲಿ ಪತ್ರಕರ್ತರು ಹಲವು ಸವಾಲುಗಳನ್ನು ಎದುರಿಸಬೇಕಾಗಿದೆ. ಇವುಗಳನ್ನು ಮೆಟ್ಟಿನಿಂತು ತಾಂತ್ರಿಕವಾಗಿ ಮುಂದುವರೆಯುವಂತೆ ಆಗಬೇಕು. ಹೊಸ ಪೀಳಿಗೆಯ ಪತ್ರಕರ್ತರನ್ನು ಬೆಳೆಸುವಂತಾಗಬೇಕು. ಈ ದಿಸೆಯಲ್ಲಿ ಚಿಕ್ಕ ಅಳವಾರದಲ್ಲಿ ಸಮೂಹ ಸಂವಹನ ಪತ್ರಿಕೋದ್ಯಮ ಆರಂಭಿಸಲಾಗಿದೆಯೆಂದು ತಿಳಿಸಿದ ಅವರು, ಪತ್ರಿಕೋದ್ಯಮದ ವಿದ್ಯಾರ್ಥಿಗಳು ಹಾಗೂ ಪತ್ರಕರ್ತರ ಅನುಕೂಲಕ್ಕಾಗಿ ವಿಜ್ಞಾನ ಹಾಗೂ ತಂತ್ರಜ್ಞಾನ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರವನ್ನು ಆಯೋಜಿಸಲಾಗುತ್ತದೆಂದು ತಿಳಿಸಿದರು.
ಜಿಲ್ಲೆಯಲ್ಲಿ ಸುಂದರ ಸ್ವಚ್ಛ ಕೊಡಗು ಅಭಿಯಾನ ನಡೆಯುತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಇಲ್ಲಿನ ಸಂಸ್ಕೃತಿ, ಪರಿಸರದ ಶ್ರೀಮಂತಿಕೆಯನ್ನು ಉಳಿಸಿಕೊಂಡು ಹೋಗಬೇಕಾದ ಜವಾಬ್ದಾರಿ ಸಮಾಜದ ಮೇಲಿದೆ. ಅದನ್ನು ತಿಳಿಸುವ ಕೆಲಸವನ್ನು ಪತ್ರಕರ್ತರು ಮಾಡಬೇಕು. ಅಲ್ಲದೇ ಜನತೆ, ಸರ್ಕಾರ ಹಾಗೂ ಸಮುದಾಯದ ಅಭಿವೃದ್ಧಿಯ ನಡುವೆ ಪತ್ರಿಕಾ ಕ್ಷೇತ್ರ ಸಂಪರ್ಕ ಸೇತುವಾಗಿ ಕಾರ್ಯನಿರ್ವಹಿಸಬೇಕೆಂದು ಆಶಿಸಿದರು.
ಕೊಡಗು ಪತ್ರಿಕಾ ಭವನದ ಸಂಸ್ಥಾಪಕ ಮ್ಯಾನೇಜಿಂಗ್ ಟ್ರಸ್ಟಿಗಳಾದ ಟಿ.ಪಿ.ರಮೇಶ್ ಮಾತನಾಡಿ, ಕೊಡಗು ಪತ್ರಿಕಾ ಭವನ ಟ್ರಸ್ಟ್ ೨೪ನೇ ವಾರ್ಷಿಕೋತ್ಸವವನ್ನು ಆಚರಿಸಿಕೊಂಡು ಬೆಳ್ಳಿ ಹಬ್ಬದ ಆಚರಣೆಗೆ ಸಿದ್ಧತೆಯನ್ನು ನಡೆಸುತ್ತಿದೆ. ೨೦೦೧ರಲ್ಲಿ ಕೊಡಗು ಪತ್ರಿಕಾ ಭವನವನ್ನು ಸ್ಥಾಪಿಸುವ ಮೂಲಕ ಪತ್ರಕರ್ತರ ಕಾರ್ಯಚಟುವಟಿಕೆಗಳಿಗೆ ನೆರವಾಗುವ, ಸಮಾಜಕ್ಕೆ ಕೊಡುಗೆ ನೀಡುವ ಕಾರ್ಯವನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ. ಸಮಾಜ ಮುಖಿಯಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮುನ್ನಡೆಯುತ್ತಿರುವುದಾಗಿ ತಿಳಿಸಿದರು.
ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಹೆಚ್.ಟಿ.ಅನಿಲ್ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ದೃಶ್ಯ ಮಾಧ್ಯಮಗಳು ಟಿಆರ್‌ಪಿ ಪೈಪೋಟಿಯಿಂದಾಗಿ ಋಣಾತ್ಮಕ ವಿಚಾರಗಳಿಗೆ, ಸಮಾಜಕ್ಕೆ ಅನಗತ್ಯವಾದ ವೈಯಕ್ತಿಕ ನಿಂದನೆಯ ವಿಚಾರಗಳಿಗೆ ಹೆಚ್ಚಿನ ಒತ್ತು ನಿಡುತ್ತಿವೆ. ಇವುಗಳ ನಡುವೆಯೂ ಪತ್ರಿಕೆಗಳು ಸಮಾಜಕ್ಕೆ ಒಳಿತನ್ನು ಉಂಟುಮಾಡುವ ವಿಚಾರಗಳತ್ತ ಹೆಚ್ಚಿನ ಒತ್ತು ನಿಡುವ ಮೂಲಕ ಜೀವಂತವಾಗಿದೆ. ಪತ್ರಿಕೋದ್ಯಮ ಕ್ಷೇತ್ರಕ್ಕೆ ಯುವ ಪೀಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕೊಡಗು ವಿಶ್ವ ವಿದ್ಯಾನಿಲಯದ ಉಪಕುಲಪತಿ ಅಶೋಕ್ ಸಂಗಪ್ಪ ಆಲೂರ, ಪತ್ರಕರ್ತ ಐತಿಚಂಡ ರಮೇಶ್ ಉತ್ತಪ್ಪ, ಟ್ರಸ್ಟಿ ಹಾಗೂ ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಹೆಚ್.ಟಿ.ಅನಿಲ್ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು. ಕೊಡಗು ಪತ್ರಿಕಾ ಭವನದ ೨೪ನೇ ವಾರ್ಷಿಕೋತ್ಸವದ ಪ್ರಯುಕ್ತ ಪತ್ರಕರ್ತರು ಹಾಗೂ ಪತ್ರಕರ್ತರ ಕುಟುಂಬದವರಿಗೆ ನಡೆದ ಟೇಬಲ್ ಟೆನ್ನಿಸ್, ಕೇರಂ, ಚೆಸ್ ಪಂದ್ಯಾವಳಿಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಕೊಡಗು ಪತ್ರಿಕಾ ಭವನ ಟ್ರಸ್ಟ್‌ನ ಮ್ಯಾನೇಜಿಂಗ್ ಟ್ರಸ್ಟಿ ಎಂ.ಪಿ.ಕೇಶವ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಕಾರ್ಯಕ್ರಮದಲ್ಲಿ ಹಿರಿಯ ಟ್ರಸ್ಟಿಗಳಾದ ಜಿ.ಚಿದ್ವಿಲಾಸ್, ಕೊಡಗು ಪತ್ರಿಕಾ ಭವನ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಎಸ್.ಜಿ.ಉಮೇಶ್, ಕೋಶಾಧಿಕಾರಿ ಕೆ.ತಿಮ್ಮಪ್ಪ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net