ಕಸ್ತೂರಿ ರಂಗನ್ ವರದಿ ಅವೈಜ್ಞಾನಿಕವಾಗಿದೆ ಎಂದು ಎಲ್ಲ ಗ್ರಾಮ ಪಂಚಾಯಿತಿಗಳ ಮೂಲಕ ಆಕ್ಷೇಪ ಸಲ್ಲಿಸಲು ಮಡಿಕೇರಿ ಬಿಜೆಪಿ ಗ್ರಾಮಾಂತರ ಮಂಡಲ ಮಾಸಿಕ ಸಭೆಯಲ್ಲಿ ನಿರ್ಧರಿಸಲಾಯಿತು.
ಮಡಿಕೇರಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ನಾಗೇಶ್ ಕುಂದಲ್ ಪಾಡಿ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕರೆದಿದ್ದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ಜಿಲ್ಲಾಧಿಕಾರಿ ತಕ್ಷಣ ಕಂದಾಯ ಮತ್ತು ಅರಣ್ಯ ಇಲಾಖೆಯಿಂದ ಜಂಟಿ ಸರ್ವೇ ಮಾಡಿಸಲು ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಮಿತಿ ರಚಿಸಬೇಕು. ಎಷ್ಟು ಸ್ವಾಭಾವಿಕ ಅರಣ್ಯ ಮತ್ತು ಎಷ್ಟು ಕೃಷಿ ಭೂಮಿ ಇದೆ ಎಂಬ ವರದಿಯನ್ನು ಸರ್ಕಾರಕ್ಕೆ ನೀಡಬೇಕು. ವರದಿ ತಯಾರಿಸುವಾಗ ಸ್ಥಳೀಯ ಗ್ರಾಮ ಪಂಚಾಯಿತಿಗಳ ಅಥವಾ ಜನರ ಅಭಿಪ್ರಾಯ ಪಡೆದುಕೊಳ್ಳಬೇಕು. ಯಾವುದೇ ಕಾರಣಕೂ ಪ್ರಜಾಪ್ರಭುತ್ವದ ವಿಕೇಂದ್ರೀಕರಣ ರೀತಿಗೆ ವಿರುದ್ಧವಾಗಿರಬಾರದು ಎಂಬ ಮಾತುಗಳು ಸಭೆಯಲ್ಲಿ ಕೇಳಿ ಬಂದವು.
ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಸ್ತೆಗಳು, ಸರ್ಕಾರಿ ಕಟ್ಟಡಗಳಿಗೆ ಮತ್ತು ಕೃಷಿಗೆ ಹಾನಿಯಾಗಿದೆ. ತಕ್ಷಣ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ವರದಿ ಸಂಗ್ರಹಿಸಿ ಸರ್ಕಾರಕ್ಕೆ ಸಲ್ಲಿಸಬೇಕು. ಎನ್‌ಡಿಆರ್‌ಎಫ್ ಅನುದಾನ ಪಡೆಯಲು ಪ್ರಯತ್ನಿಸಬೇಕು. ಯಾವುದೇ ಕಾರಣಕ್ಕೂ ಸರ್ಕಾರದ ಮಾರ್ಗಸೂಚಿ ಉಲ್ಲಂಘನೆ ಆಗದಂತೆ ಜಿಲ್ಲಾಧಿಕಾರಿಗಳು ಗಮನಹರಿಸಬೇಕು ಎಂದು ಒತ್ತಾಯಿಸಿದರು.
ಜಲ ಜೀವನ ಮಿಷನ್ ಯೋಜನೆ ಕಾಮಗಾರಿ ಕಳಪೆಯಾಗಿದೆ. ಎಲ್ಲ ಗ್ರಾಮಗಳಲ್ಲಿ ತಾಪಂ ಕಾರ್ಯ ನಿರ್ವಹಣಾಧಿಕಾರಿ ಮತ್ತು ತಾಪಂ ಆಡಳಿತ ಅಧಿಕಾರಿಗಳು ಜಂಟಿ ಸರ್ವೇ ನಡೆಸಬೇಕು ಎಂದರು.
ಮಾಜಿ ಶಾಸಕ ಕೆ.ಜಿ.ಬೋಪಯ್ಯ, ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಉಪಾಧ್ಯಕ್ಷ ಕೆ.ಎಸ್.ಸತೀಶ್, ಜಿಲ್ಲಾ ಕಾರ್ಯದರ್ಶಿ ಉಮಾ ಪ್ರಭು, ಮಂಡಲ ಕಾರ್ಯದರ್ಶಿ ಡೀನ್ ಬೋಪಣ್ಣ , ಧನುಷ್, ಗ್ರಾಮಾಂತರ ಮಂಡಲ ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರ ಮತ್ತು ಶಕ್ತಿ ಕೇಂದ್ರದ ಪ್ರಮುಖರು ಹಾಜರಿದ್ದರು.