ಅಕ್ಷಯ ಚಾರಿಟೇಬಲ್ ಟ್ರಸ್ಟ್ ಮತ್ತು ಸಂಜೀವಿನಿ ಒಕ್ಕೂಟ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಸಿದ್ದಾಪುರ ಗುಹ್ಯ ಅಗಸ್ಥೇಶ್ವರ ಸಹಕಾರ ಸಭಾಂಗಣದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಜಿಪಂ ಸಾಮಾಜಿಕ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಮೂಕೊಂಡ ವಿಜು ಸುಬ್ರಮಣಿ, ಸಂಜೀವಿನಿ ಒಕ್ಕೂಟದ ಅಧ್ಯಕ್ಷ ತುಳಸಿ ಗಣಪತಿ ಇತರರು ಇದ್ದರು.
ಸಿದ್ದಾಪುರ : ತುರ್ತು ಸಂದರ್ಭಗಳಲ್ಲಿ ಅತ್ಯವಶ್ಯವಾಗಿರುವ ರಕ್ತದಾನಕ್ಕೆ ಬೆಲೆ ಕಟ್ಟಲಾಗದು. ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಇದು ಅಗತ್ಯವಾಗಿದ್ದು, ಯುವ ಸಮೂಹ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡಬೇಕೆಂದು ಜಿಲ್ಲಾ ಪಂಚಾಯಿತಿ ಸಾಮಾಜಿಕ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಮೂಕೊಂಡ ವಿಜು ಸುಬ್ರಮಣಿ ಕರೆ ನೀಡಿದರು.
ಅಕ್ಷಯ ಚಾರಿಟೇಬಲ್ ಟ್ರಸ್ಟ್ ಮತ್ತು ಸಂಜೀವಿನಿ ಒಕ್ಕೂಟ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಸಿದ್ದಾಪುರ ಗುಹ್ಯ ಅಗಸ್ಥೇಶ್ವರ ಸಹಕಾರ ಸಭಾಂಗಣದಲ್ಲಿ ನಡೆದ ರಕ್ತದಾನ ಶಿಬಿರ ಕಾರ್ಯಾಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲೆಯ ಎಲ್ಲ್ಲ ಕಡೆಗಳಲ್ಲೂ ಇಂತಹ ಶಿಬಿರಗಳನ್ನ ಆಯೋಜಿಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಬೇಕಿದೆ. ಅಲ್ಲದೇ ದೃಷ್ಟಿ ಕಳೆದುಕೊಂಡವರಿಗೆ ನೆರವಾಗಲು ನೇತ್ರದಾನ ಹಾಗೂ ಅಂಗಾಂಗ ದಾನಕ್ಕೂ ಮುಂದಾಗಬೇಕೆಂದರು.
ಸಂಜೀವಿನಿ ಒಕ್ಕೂಟದ ಅಧ್ಯಕ್ಷ ತುಳಸಿ ಗಣಪತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಳೆದ ಹಲವಾರು ವರ್ಷಗಳಿಂದಲೂ ಒಕ್ಕೂಟ ಹಲವಾರು ಸಾಮಾಜಿಕ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿದೆ. ಮಹಿಳೆಯರನ್ನ್ನು ಒಗ್ಗೂಡಿಸಿ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳುವುದರ ಮೂಲಕ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಶ್ರಮಿಸಿದೆ ಎಂದರು.
ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರೆಡ್ ಕ್ರಾಸ್ ಸಂಸ್ಥೆ, ಸಿದ್ದಾಪುರ ಪಂಚಾಯಿತಿ, ಎಚ್‌ಡಿಎಫ್‌ಸಿ ಬ್ಯಾಂಕ್, ಟಿಂಬರ್ ಮಚೆರ್ಂಟ್ಸ್ ಅಸೋಸಿಯೇಷನ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಹಾಜರಿದ್ದರು.
ಈ ಸಂದರ್ಭ ಸಂಜೀವಿನಿ ಒಕ್ಕೂಟದ ಸಂಪನ್ಮೂಲ ವ್ಯಕ್ತಿ ಯಮುನ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆಶಾ, ರೆಡ್ ಕ್ರಾಸ್ ಸಂಸ್ಥೆಯ ಬಿ.ಎನ್. ಪ್ರಕಾಶ್, ಕಾರ್ಮಿಕ ಮುಖಂಡ ರಮೇಶ್ ಸೇರಿದಂತೆ ರಕ್ತನಿಧಿ ಘಟಕದ ವೈದ್ಯರು, ಸ್ಥಳೀಯ ವೈದ್ಯಾಧಿಕಾರಿಗಳು ಮತ್ತಿತರರು ಹಾಜರಿದ್ದರು.