

ಮಡಿಕೇರಿ: ಕೊಡಗಿನಲ್ಲಿ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಸರ್ವೇಕ್ಷಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಸಭೆಯಲ್ಲಿ ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸೊಳ್ಳೆಗಳಿಂದ ಹರಡುವ ರೋಗಗಳ ನಿಯಂತ್ರಣ, ನಾಯಿ ಕಡಿತ ಪ್ರಕರಣಗಳು, ಜೈವಿಕ ವೈದ್ಯಕೀಯ ತ್ಯಾಜ್ಯ ನಿರ್ವಹಣೆ, ಆಸ್ಪತ್ರೆಗಳ ಗುಣಮಟ್ಟ ಸುಧಾರಣೆ, ತಂಬಾಕು ನಿಯಂತ್ರಣ, ಎಚ್‌ಐವಿ ತಡೆಗಟ್ಟುವಿಕೆ ಹಾಗೂ ಎಚ್‌ಪಿವಿ ಲಸಿಕಾ ಅಭಿಯಾನದ ಪ್ರಗತಿ ಕುರಿತು ಮಾಹಿತಿ ಪಡೆದರು.
ಈ ಸಂದರ್ಭ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಜ್ವರದ ಪ್ರಕರಣಗಳಲ್ಲಿ ೨,೫೦೨ ರಕ್ತದ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಈ ಅವಧಿಯಲ್ಲಿ ೪೨ ಡೆಂಗ್ಯೂ ಪ್ರಕರಣಗಳು ದೃಢಪಟ್ಟಿವೆ. ಮುಂಗಾರು ಮಳೆಯ ಸಂದರ್ಭದಲ್ಲಿ ಡೆಂಗ್ಯೂ, ಮಲೇರಿಯಾ ಹಾಗೂ ಇತರ ಸೊಳ್ಳೆಜನಿತ ರೋಗಗಳ ಹರಡುವಿಕೆ ತಡೆಯಲು ಮನೆ-ಮನೆ ಸಮೀಕ್ಷೆ, ಸೊಳ್ಳೆಗಳ ಲಾರ್ವಾ ನಾಶಪಡಿಸುವ ಕಾರ್ಯಾಚರಣೆ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಮಾತನಾಡಿ, ಹಾಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವಂತಾಗಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಮಾತನಾಡಿ, ಸೆಪ್ಟೆಂಬರ್ ೨೦೨೬ರ ಅಂತ್ಯದವರೆಗೆ ಜಿಲ್ಲೆಯಲ್ಲಿ ಒಟ್ಟು ೯೯೯ ನಾಯಿ ಕಡಿತ ಪ್ರಕರಣಗಳು ವರದಿಯಾಗಿವೆ ಎಂದರು.
ಜಿಲ್ಲಾಧಿಕಾರಿ ಮಾತನಾಡಿ, ನಾಯಿ ಹಾಗೂ ಇತರ ಪ್ರಾಣಿಗಳ ಕಡಿತಕ್ಕೆ ಒಳಗಾದವರಿಗೆ ಸಕಾಲದಲ್ಲಿ ಚಿಕಿತ್ಸೆ ಒದಗಿಸಲು ಅಗತ್ಯವಿರುವ ಆಂಟಿ ರೇಬೀಸ್ ಲಸಿಕೆ ಮತ್ತು ಇಮ್ಯುನೊಗ್ಲೋಬ್ಯುಲಿನ್ ದಾಸ್ತಾನು ಸಮರ್ಪಕವಾಗಿ ಲಭ್ಯವಿರುವಂತೆ ನೋಡಿಕೊಳ್ಳಲು ಸೂಚಿಸಿದರು.
ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿ ಸ್ವಚ್ಛತೆ, ನೈರ್ಮಲ್ಯ, ಸೋಂಕು ನಿಯಂತ್ರಣ ಮತ್ತು ತ್ಯಾಜ್ಯ ನಿರ್ವಹಣೆ ಸುಧಾರಿಸುವಲ್ಲಿ ಕಾಯಕಲ್ಪ ಯೋಜನೆಯ ಪ್ರಗತಿ ಪರಿಶೀಲಿಸಿದ ಜಿಲ್ಲಾಧಿಕಾರಿ ಅವರು, ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಉತ್ತಮ ಹಾಗೂ ಸುರಕ್ಷಿತ ವಾತಾವರಣ ಕಲ್ಪಿಸುವುದು, ವೈದ್ಯಕೀಯ ತ್ಯಾಜ್ಯವನ್ನು ನಿಗದಿತ ನಿಯಮಗಳ ಪ್ರಕಾರ ವಿಂಗಡಿಸಿ ವಿಲೇವಾರಿ ಮಾಡುವುದು ಮತ್ತು ರಾಷ್ಟ್ರೀಯ ಗುಣಮಟ್ಟದ ಆರೋಗ್ಯ ಸೇವೆಗಳ ಮಾನದಂಡಗಳನ್ನು ಪಾಲಿಸಬೇಕು. ಜೈವಿಕ ವೈದ್ಯಕೀಯ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಹಾಗೂ ಸಬಲೀಕರಣ ಸಮಿತಿಯ ಮೂಲಕ ನಿಯಮಗಳ ಅನುಷ್ಠಾನವನ್ನು ಪರಿಣಾಮಕಾರಿಯಾಗಿ ಕೈಗೊಳ್ಳಲು ಸೂಚಿಸಿದರು.
ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಪ್ರಗತಿಯನ್ನೂ ಸಭೆಯಲ್ಲಿ ಪರಿಶೀಲಿಸಲಾಯಿತು. ಏಪ್ರಿಲ್‌ನಿಂದ ಸೆಪ್ಟೆಂಬರ್ ೨೦೨೬ ರ ವರೆಗೆ ಜಿಲ್ಲೆಯಲ್ಲಿ ಕೋಟ್ಪಾ ಕಾಯ್ದೆಯಡಿ ೬೪ ದಾಳಿ ನಡೆಸಿ, ನಿಯಮ ಉಲ್ಲಂಘಿಸಿದವರಿಂದ ಒಟ್ಟು ರೂ.೧,೦೯,೭೦೦ ದಂಡ ಸಂಗ್ರಹಿಸಲಾಗಿದೆ ಎಂದು ಡಾ.ಸತೀಶ್ ಕುಮಾರ್ ತಿಳಿಸಿದರು.
ಜಿಲ್ಲೆಯ ೫೯೩ ಶಾಲೆಗಳ ಪೈಕಿ ೩೨೭ ಶಾಲೆಗಳು ಹಾಗೂ ೬೫ ಕಾಲೇಜುಗಳ ಪೈಕಿ ೧೫ ಕಾಲೇಜುಗಳನ್ನು ತಂಬಾಕು ಮುಕ್ತ ಶಿಕ್ಷಣ ಸಂಸ್ಥೆಗಳ ತಂತ್ರಾಂಶದಲ್ಲಿ ನೋಂದಾಯಿಸಲಾಗಿದೆ. ತಂಬಾಕು ಮಾರಾಟಕ್ಕೆ ಪರವಾನಗಿ ಕಡ್ಡಾಯಗೊಳಿಸುವುದು ಹಾಗೂ ಬಾರ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ತಂಬಾಕು ನಿಷೇೀಧಿತ ಪ್ರದೇಶ ಎಂಬ ಫಲಕಗಳನ್ನು ಅಳವಡಿಸುವ ಕುರಿತು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಎಚ್‌ಐವಿ ಸೋಂಕಿನ ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ಮಿಷನ್ ಏಡ್ಸ್ ಸುರಕ್ಷಾ ಅಭಿಯಾನದಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಸೋಂಕಿನ ಪರೀಕ್ಷೆ, ಚಿಕಿತ್ಸೆ ಹಾಗೂ ಸಮಾಲೋಚನೆ ಸೇವೆಗಳನ್ನು ಬಲಪಡಿಸುವ ಕುರಿತು ಚರ್ಚಿಸಲಾಯಿತು.
ಈ ಸಂದರ್ಭ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಮಾತನಾಡಿ, ೨೦೨೬ ರ ಡಿ.೧ ರೊಳಗೆ ರಾಜ್ಯದ ಎಲ್ಲ ಜಿಲ್ಲೆಗಳನ್ನು ಸುರಕ್ಷಿತ+ ಜಿಲ್ಲೆಗಳನ್ನಾಗಿ ರೂಪಿಸುವ ಗುರಿಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲಿಯೂ ಕಾರ್ಯಕ್ರಮ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ತಿಳಿಸಿದರು.
ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ಉದ್ದೇಶದ ಎಚ್‌ಪಿವಿ ಲಸಿಕಾ ಅಭಿಯಾನದಲ್ಲಿ ಅ.೬ ರ ವರೆಗೆ ಕೊಡಗು ಜಿಲ್ಲೆಯಲ್ಲಿ ಶೇ.೭೦.೭೯ ರಷ್ಟು ಗುರಿ ಸಾಧಿಸಲಾಗಿದೆ. ಒಟ್ಟು ೫,೨೭೬ರ ಗುರಿಯಲ್ಲಿ ೩,೭೩೫ ಮಂದಿ ಲಸಿಕೆ ಪಡೆದಿದ್ದಾರೆ. ತಾಲೂಕುವಾರು ಪ್ರಗತಿಯಲ್ಲಿ ಸೋಮವಾರಪೇಟೆ ಶೇ. ೭೪.೮೮ ರಷ್ಟು ಸಾಧನೆಯೊಂದಿಗೆ ಮುಂಚೂಣಿಯಲ್ಲಿದೆ ಎಂದು ಜಿಲ್ಲಾ ಕುಟುಂಬ ಮತ್ತು ಕಲ್ಯಾಣಾಧಿಕಾರಿ ಮಾಹಿತಿ ನೀಡಿದರು. ಜಿಲ್ಲಾಧಿಕಾರಿ ಅವರು ಮಾತನಾಡಿ, ಈ ಬಗ್ಗೆ ವಿದ್ಯಾರ್ಥಿನಿಯರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವಂತೆ ಸಲಹೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಶ್ರೀನಿವಾಸ್, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಸನತ್ ಕುಮಾರ್, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ನಂಜುಂಡಯ್ಯ, ಡಾ.ಅನಿಲ್ ಧವನ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಚ್.ಕೆ.ಶಾಂತಿ, ಸಮಗ್ರ ಗಿರಿಜನ ಯೋಜನಾ ಅಭಿವೃದ್ಧಿ ಅಧಿಕಾರಿ, ತಾಲ್ಲೂಕು ಅಧಿಕಾರಿಗಳು ಇದ್ದರು.