ಸಿಎಫ್‌ಟಿಆರ್‌ಐ ಜತೆ ಕೊಡಗು ವಿ.ವಿ.ಒಡಂಬಡಿಕೆ

ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಅಶೋಕ ಸಂ. ಆಲೂರ ಹಾಗೂ ಮೈಸೂರಿನ ಸಿಎಫ್‌ಟಿಆರ್‌ಐ ಸಂಸ್ಥೆಯ ನಿರ್ದೇಶಕರಾದ ಡಾ.ಪಿ. ಗಿರಿಧರ್ ಒಪ್ಪಂದಕ್ಕೆ ಸಹಿ ಹಾಕಿದರು.
ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಅಶೋಕ ಸಂ. ಆಲೂರ ಹಾಗೂ ಮೈಸೂರಿನ ಸಿಎಫ್‌ಟಿಆರ್‌ಐ ಸಂಸ್ಥೆಯ ನಿರ್ದೇಶಕರಾದ ಡಾ.ಪಿ. ಗಿರಿಧರ್ ಒಪ್ಪಂದಕ್ಕೆ ಸಹಿ ಹಾಕಿದರು.
Published on
ಕುಶಾಲನಗರ: ಮೈಸೂರಿನಲ್ಲಿರುವ ಕೇಂದ್ರ ಸರ್ಕಾರದ ವೈಜ್ಞಾನಿಕ ಹಾಗೂ ಔದ್ಯಮಿಕ ಸಂಶೋಧನಾ ಪರಿಷತ್ ಅಡಿಯಲ್ಲಿರುವ ಕೇಂದ್ರಿಯ ಆಹಾರ ತಂತ್ರಜ್ಞಾನ ಸಂಶೋಧನಾ ಸಂಸ್ಥೆ (ಸಿಎಫ್‌ಟಿಆರ್‌ಐ) ಜತೆಗೆ ಕೊಡಗು ವಿಶ್ವವಿದ್ಯಾಲಯವು 2025ರ ಡಿ.30 ರಂದು ಹಲವು ವಿಷಯಗಳ ಕುರಿತು ಪರಸ್ಪರ ಒಡಂಬಡಿಕೆ ಮಾಡಿಕೊಂಡಿದೆ.
ಮೂಲತಃ ಆಹಾರ ತಂತ್ರಜ್ಞಾನ ಕ್ಷೇತ್ರದಲ್ಲಿ ರಾಷ್ಟಮಟ್ಟದ ಸಂಶೋಧನಾ ಕೇಂದ್ರವಾಗಿ ಕಾರ್ಯನಿರ್ವಹಿಸುತ್ತಿರುವ ಈ ಉನ್ನತ ಸಂಸ್ಥೆಯ ಜತೆಗೆ ಮುಂದಿನ ದಿನಗಳಲ್ಲಿ ಕೊಡಗು ವಿ.ವಿ. ಸಂಶೋಧನೆ, ಬೋಧನೆ, ಕೌಶಲ್ಯಾಭಿವೃದ್ಧಿ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರ, ತಂತ್ರಜ್ಞಾನ ವಿನಿಮಯ ಮಾಡಿಕೊಂಡು ಕೊಡಗು ವಿಶ್ವವಿದ್ಯಾಲಯದ ಅಧ್ಯಾಪಕ ವೃಂದಕ್ಕೆ ಮತ್ತು ವಿದ್ಯಾರ್ಥಿಗಳಿಗೆ ಪೂರಕವಾಗಿರುವ ಹಲವಾರು ರೀತಿಯ ಕಾರ್ಯ ಚಟುವಟಿಕೆಗಳನ್ನು ಕೈಗೊಳ್ಳುವ ಮುಖ್ಯ ಉದ್ದೇಶದಿಂದ ಕೊಡಗು ವಿ.ವಿ. ಕುಲಪತಿ ಪ್ರೊ. ಅಶೋಕ ಸಂ. ಆಲೂರ ಹಾಗೂ ಮೈಸೂರಿನ ಸಿಎಫ್‌ಟಿಆರ್‌ಐ ಸಂಸ್ಥೆಯ ನಿರ್ದೇಶಕ ಡಾ.ಪಿ. ಗಿರಿಧರ್ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.
ಈ ಒಪ್ಪಂದದಿಂದ ಕೊಡಗು ವಿಶ್ವವಿದ್ಯಾಲಯ ವ್ಯಾಪ್ತಿಯ ವಿದ್ಯಾರ್ಥಿ ಸಮುದಾಯವು ಆಹಾರ ತಂತ್ರಜ್ಞಾನ, ಕೈಗಾರಿಕೆ, ಆಹಾರ ಸಂಸ್ಕರಣೆ ಕ್ಷೇತ್ರದಲ್ಲಿ ಉನ್ನತ ಜ್ಞಾನ ಸಂಪಾದಿಸಲು ಅನುಕೂಲವಾಗುತ್ತದೆ. ಹಾಗೆಯೇ ಆಹಾರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ವಿವಿಧ ಆಯಾಮಗಳಲ್ಲಿ ನೂತನ ಸಂಶೋಧನೆಗೆ ಹೊಸ ದಿಕ್ಕು, ಹೊಸ ಆವಿಷ್ಕಾರದ ಜೊತೆಗೆ ಉದ್ಯೋಗಾವಕಾಶಗಳನ್ನು ಕಂಡುಕ್ಕೊಳ್ಳಲು ಸಾಧ್ಯವಾಗುವುದೆಂದು ಕುಲಪತಿಗಳಾದ ಪ್ರೊ. ಅಶೋಕ ಸಂ. ಆಲೂರ ತಿಳಿಸಿದ್ದಾರೆ.
ಕೊಡಗು ವಿ.ವಿ.ಇದುವರೆಗೆ ಮಾಡಿಕೊಂಡಿರುವ ಒಪ್ಪಂದಗಳೆಂದರೆ ಕರ್ನಾಟಕದ ಪ್ರತಿಷ್ಠಿತ ಇನ್ಫೋಸಿಸ್ ಸಂಸ್ಥೆ ಮತ್ತು ಕರ್ನಾಟಕ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲಾಭಿವೃದ್ಧಿ ನಿಗಮ, ಬೆಂಗಳೂರಿನ ಫೋರ್ಕ್ ಟೆಕ್ನಾಲಜಿಸ್ ಸಹಯೋಗದೊಂದಿಗೆ ಕೊಡಗು ವಿ.ವಿ. ಅಧ್ಯಾಪಕರಿಗೆ ಕೌಶಲಾಭಿವೃದ್ಧಿ ಕಾರ್ಯಾಗಾರಗಳನ್ನು ಆಯೋಜಿಸಿದೆ.
ಅಷ್ಟೇ ಅಲ್ಲದೇ ಧಾರವಾಡದ ಬಹು ಶಾಸ್ತ್ರೀಯ ವಿಕಾಸ ಸಂಶೋಧನಾ ಕೇಂದ್ರ, ಭಾರತ ಸರ್ಕಾರದ ಅಡಿಯಲ್ಲಿ ಕೆಲಸ ಮಾಡುತ್ತಿರುವ ಹೈದರಾಬಾದಿನ ರಾಷ್ಟ್ರೀಯ ಕೃಷಿ ವಿಸ್ತರಣೆ ಮತ್ತು ನಿರ್ವಹಣೆ ಸಂಸ್ಥೆ ಹಾಗೂ ಪ್ರಾಜೆಕ್ಟ್ ಕಾವೇರಿ ಎಂಬ ಹೆಸರಿನಲ್ಲಿ ಕೊಡಗು ಅಂಚೆ ಇಲಾಖೆಯ ಜೊತೆಗಿನ ಒಡಂಬಡಿಕೆ, ತಮಿಳುನಾಡಿನ ತಂಜಾವೂರಿನಲ್ಲಿರುವ ಭಾರತ ಸರ್ಕಾರದ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವಾಲಯದ ರಾಷ್ಟ್ರೀಯ ಆಹಾರ ತಂತ್ರಜ್ಞಾನ ಉದ್ಯಮಶೀಲತೆ ಮತ್ತು ನಿರ್ವಹಣೆ ಸಂಸ್ಥೆ, ಐಸಿಎಆರ್-ಐಐಎಸ್‌ಆರ್, ಕೋಜಿಕೋಡ್ ಹಾಗೂ ಐ.ಬಿ.ಎಂ., ಅನುದೀಪ್ ಫೌಂಡೇಶನ್, ಬೆಂಗಳೂರು ಮೊದಲಾದ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳ ಜತೆಗೆ ಕೊಡಗು ವಿ.ವಿ. ಈಗಾಗಲೇ ಪರಸ್ಪರ ಒಡಂಬಡಿಕೆ ಮಾಡಿಕೊಂಡಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net