ಉತ್ತಮ ಸಮಾಜ ಕಟ್ಟುವ ಸಂಕಲ್ಪ ಮಾಡೋಣ

ಗೋಣಿಕೊಪ್ಪಲು ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಉಪನ್ಯಾಸಕರು ಪಾಲ್ಗೊಂಡಿದ್ದರು.
ಗೋಣಿಕೊಪ್ಪಲು ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಉಪನ್ಯಾಸಕರು ಪಾಲ್ಗೊಂಡಿದ್ದರು.
Published on

ಗೋಣಿಕೊಪ್ಪಲು:

ಗೋಣಿಕೊಪ್ಪಲು ಕಾವೇರಿ ಪದವಿ ಪೂರ್ವ ಕಾಲೇಜು ಎನ್.ಎಸ್.ಎಸ್ ಘಟಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಹಾಗೂ ವೀರಾಜಪೇಟೆ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಸಹಯೋಗದಲ್ಲಿ ಶನಿವಾರ ಕಾವೇರಿ ಕಾಲೇಜು ಸಭಾಂಗಣದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಉಡುಪಿ ಪ್ರಾದೇಶಿಕ ವಿಭಾಗದ ಜನ ಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯ ಮಾತನಾಡಿ, ಮದ್ಯ ವ್ಯಸನ, ಗುಟ್ಕಾ, ಧೂಮಪಾನಗಳಿಂದ ಯುವ ಜನತೆಯ ಜೀವನ ಹಾಳಾಗುತ್ತಿದೆ. ಸಹವಾಸ, ಆಕರ್ಷಣೆಯಿಂದ ಆರಂಭವಾಗುವ ದುಶ್ಚಟ ಒಮ್ಮೆ ಅಂಟಿದರೆ ಬದುಕು ವಿನಾಶದ ಹಾದಿಯಲ್ಲಿ ಸಾಗುತ್ತದೆ. ಇದರಿಂದ ವೈಯಕ್ತಿಕ ಜೀವನದ ಜತೆಗೆ ಸಮಾಜದ ಸ್ವಾಸ್ಥ್ಯವೂ ಹಾಳಾಗುತ್ತದೆ. ವಿದ್ಯಾರ್ಥಿ ಜೀವನದಿಂದಲೇ ಉತ್ತಮ ಹವ್ಯಾಸಗಳನ್ನು ರೂಢಿಸಿಕೊಂಡು ಉತ್ತಮ ಸಮಾಜ ಕಟ್ಟುವ ಸಂಕಲ್ಪ ಮಾಡಬೇಕು. ಅಮಲು ಪದಾರ್ಥಗಳ ಸೇವನೆಯಿಂದ ಆರೋಗ್ಯಕ್ಕೆ ಮಾತ್ರವಲ್ಲ, ಸಮಾಜಕ್ಕೂ ಹಾನಿಯಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿರಬೇಕು ಎಂದರು.
ಗೋಣಿಕೊಪ್ಪಲು ಗ್ರಾ.ಪಂ.ಮಾಜಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ ಮಾತನಾಡಿ, ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಜನಜಾಗೃತಿ ವೇದಿಕೆಯಿಂದ ಯುವಜನರು ಹಾಗೂ ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ಹಮ್ಮಿಕೊಳ್ಳಲಾದ ಪ್ರಮುಖ ಅಭಿಯಾನವಾಗಿದೆ. ಯುವ ಜನತೆ ಮಾದಕ ವಸ್ತುಗಳಿಂದ ದೂರವಿದ್ದು ಆರೋಗ್ಯವಂತ ಬದುಕು ಕಟ್ಟಿಕೊಳ್ಳಬೇಕು ಎಂದರು.
ಕಾವೇರಿ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ಪಿ.ಸಿ.ಬ್ರೈಟಕುಮಾರ್, ಗೋಣಿಕೊಪ್ಪ ಗ್ರಾ.ಪಂ.ಮಾಜಿ ಉಪಾಧ್ಯಕ್ಷೆ ಮಂಜುಳಾ, ವಲಯ ಮೇಲ್ವಿಚಾರಕಿ ಗೀತಾ, ಸೇವಾ ಪ್ರತಿನಿಧಿಗಳಾದ ವಿಮಲಾ, ಜಯಪ್ರಕಾಶ್, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕಿ ವಿಪ್ರ ನೀಲಮ್ಮ, ಎನ್.ಎಸ್.ಎಸ್.ಅಧಿಕಾರಿ ಚೇತನ್ ಚಿಣ್ಣಪ್ಪ, ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮುಕ್ತ ಜೀವನದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net