ಕಸ್ತೂರಿರಂಗನ್ ವರದಿ ವಿರುದ್ಧ ಸ್ಥಳೀಯರ ಆಕ್ರೋಶ

ಕೆದಮುಳ್ಳೂರು ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆ ಸಿಬ್ಬಂದಿ ಹಾಗೂ ಗ್ರಾಮಸ್ಥರು ಹಾಜರಿದ್ದರು.
ಕೆದಮುಳ್ಳೂರು ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆ ಸಿಬ್ಬಂದಿ ಹಾಗೂ ಗ್ರಾಮಸ್ಥರು ಹಾಜರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಕೆದಮುಳ್ಳೂರು ಗ್ರಾಮ ಪಂಚಾಯಿತಿಯ 2026-27ನೇ ಸಾಲಿನ ಗ್ರಾಮಸಭೆ
  • ಪಂಚಾಯಿತಿ ಸಭಾಂಗಣ
ವಿರಾಜಪೇಟೆ: ಹೊರವಲಯದ ಕೆದಮುಳ್ಳೂರು ಗ್ರಾಮ ಪಂಚಾಯಿತಿಯ 2026-27ನೇ ಸಾಲಿನ ಗ್ರಾಮಸಭೆ ಹಾಗೂ ಕಸ್ತೂರಿರಂಗನ್ ವರದಿ ಕುರಿತು ಆಕ್ಷೇಪಣೆ ಸಲ್ಲಿಸುವ ಸಭೆಯನ್ನು ಇಲ್ಲಿನ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.
ಕಸ್ತೂರಿರಂಗನ್ ವರದಿಗೆ ಆಕ್ಷೇಪಣೆ ವ್ಯಕ್ತಪಡಿಸಿ ಮಾತನಾಡಿದ ಗ್ರಾಮಸ್ಥ ಚೋಟು ಬಿದ್ದಪ್ಪ, ನಾವು ಈ ಭಾಗದ ಮೂಲ ನಿವಾಸಿಗಳಾಗಿದ್ದು, ನಮ್ಮ ಬದುಕಿನೊಂದಿಗೆ ಪರಿಸರ ಸಂರಕ್ಷಣೆಯೂ ಬೆಸೆದುಕೊಂಡಿದೆ. ನಮ್ಮಿಂದ ಈವರೆಗೆ ಪರಿಸರಕ್ಕೆ ಯಾವುದೇ ಹಾನಿಯಾಗಿಲ್ಲ. ಕಸ್ತೂರಿರಂಗನ್ ವರದಿ ಜಾರಿಯಾದರೆ ಮುಂದಿನ ದಿನಗಳಲ್ಲಿ ಸ್ಥಳೀಯರು ಹಾಗೂ ರೈತರಿಗೆ ತೊಂದರೆಯಾಗುವ ಸಾಧ್ಯತೆ ಇದೆ ಎಂದರು.
ಗ್ರಾಮ ಪಂಚಾಯಿತಿ ನಿಕಟಪೂರ್ವ ಸದಸ್ಯ ಪರಮೇಶ್ವರ ಮಾತನಾಡಿ, ಕಸ್ತೂರಿರಂಗನ್ ವರದಿ ರೈತ ವಿರೋಧಿಯಾಗಿದೆ. ಇದಕ್ಕೆ ಸ್ಥಳೀಯರ ಸಂಪೂರ್ಣ ವಿರೋಧವಿದೆ. ಜಿಲ್ಲೆಯ ಪರಿಸ್ಥಿತಿಗೆ ಅನುಗುಣವಾಗಿ ಕೇರಳ ಮಾದರಿಯನ್ನು ಪರಿಗಣಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.
ಕೆಡಿಪಿ ಸದಸ್ಯ ಮಾಳೇಟ್ಟಿರ ಪ್ರಶಾಂತ್ ಉತ್ತಪ್ಪ ಮಾತನಾಡಿ, ಕಸ್ತೂರಿರಂಗನ್ ವರದಿ ಕೊಡಗಿನ ರೈತರಿಗೆ ಮಾರಕವಾಗುವ ಸಾಧ್ಯತೆ ಇದೆ. ರೈತರು ತಮ್ಮ ತೋಟಗಳಿಗೆ ತೆರಳುವುದು, ಕೋವಿ ಹಕ್ಕು ಸೇರಿದಂತೆ ಹಲವು ವಿಚಾರಗಳಲ್ಲಿ ಸ್ಥಳೀಯರಿಗೆ ತೊಂದರೆಯಾಗಬಹುದು ಎಂದು ಆತಂಕ ವ್ಯಕ್ತಪಡಿಸಿದರು.
ಕರ್ನಾಟಕ ಸೇರಿದಂತೆ ಆರು ರಾಜ್ಯಗಳಲ್ಲಿ ಕಸ್ತೂರಿರಂಗನ್ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕರಡು ಅಧಿಸೂಚನೆಗಳು ಪ್ರಕಟವಾಗುತ್ತಿದೆ. ಜಿಲ್ಲೆಯ ಹಲವು ಗ್ರಾಮಗಳು ಸೂಕ್ಷ್ಮ ವಲಯ ವ್ಯಾಪ್ತಿಗೆ ಬರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ವರದಿಯ ಸಾಧಕ-ಬಾಧಕಗಳನ್ನು ಅರಿತು ಆಕ್ಷೇಪಣೆಗಳನ್ನು ಅಧಿಕೃತವಾಗಿ ಸಲ್ಲಿಸಬೇಕು ಎಂದರು.
ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪಿ.ವಿ.ಜಾನ್ಸನ್ ಮಾತನಾಡಿ, ಭೌಗೋಳಿಕವಾಗಿ ಚಿಕ್ಕ ಜಿಲ್ಲೆಯಾಗಿರುವ ಕೊಡಗಿನಲ್ಲಿ ಕಸ್ತೂರಿರಂಗನ್ ವರದಿ ಜಾರಿಯಾದರೆ ರೈತರು ಹಾಗೂ ಸ್ಥಳೀಯರು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ ಎಂದರು.
ಗ್ರಾಮಸಭೆಯ ನೋಡಲ್ ಅಧಿಕಾರಿ ಡಾ.ರಾಕೇಶ್ ಮಾತನಾಡಿ, ಕಸ್ತೂರಿರಂಗನ್ ವರದಿಯಂತೆ ಪ್ರದೇಶವೊಂದು ಸೂಕ್ಷ್ಮ ವಲಯವಾಗಿ ಗುರುತಾದರೆ ವರದಿಯಲ್ಲಿ ಸೂಚಿಸಿರುವ ನಿಯಮಗಳನ್ನು ಆಧರಿಸಿ ಕಾರ್ಯ ನಿರ್ವಹಿಸಲಾಗುತ್ತದೆ. ಆದರೆ ಅನುಷ್ಠಾನದ ಸಂದರ್ಭದಲ್ಲಿ ಸ್ಥಳೀಯವಾಗಿ ಯಾವ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದು ಮುಂದಿನ ಪ್ರಕ್ರಿಯೆಯಲ್ಲಿ ಸ್ಪಷ್ಟವಾಗಲಿದೆ. ಆದ್ದರಿಂದ ವರದಿಯ ಕುರಿತು ಸಂಪೂರ್ಣ ಮಾಹಿತಿ ಪಡೆದುಕೊಂಡು ಮಾತನಾಡುವುದು ಅಗತ್ಯ ಎಂದರು.
ಕೊಡಗಿನ ಪರಿಸರವನ್ನು ಉಳಿಸುವುದರ ಜತೆಗೆ ಸ್ಥಳೀಯರ ಜೀವನೋಪಾಯಕ್ಕೂ ತೊಂದರೆಯಾಗದಂತೆ ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಅವರು ಹೇಳಿದರು.
ಸೆಸ್ಕ್ ಇಂಜಿನಿಯರ್ ಸೋಮೇಶ್ ಮಾತನಾಡಿ, ತಾಲೂಕಿನಲ್ಲಿ ನಡೆಯುತ್ತಿರುವ ವಿದ್ಯುತ್ ಉನ್ನತೀಕರಣ ಕಾಮಗಾರಿಗಳಿಂದ ತಾತ್ಕಾಲಿಕವಾಗಿ ಸಮಸ್ಯೆ ಉಂಟಾಗಿದ್ದು ಮುಂದಿನ ದಿನಗಳಲ್ಲಿ ಸಮಸ್ಯೆ ಬಗೆಹರಿಯಲಿದೆ ಎಂದರು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಣಿ ಮಾತನಾಡಿ, ಅರ್ಹರು ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ಪಂಚಾಯಿತಿ ಸಿಬ್ಬಂದಿ ಕಮಲಾಕ್ಷಿ ಕಳೆದ ಸಾಲಿನ ಗ್ರಾಮಸಭೆಯ ವರದಿ ಮಂಡಿಸಿದರು. ಸಭೆಯಲ್ಲಿ ಅರಣ್ಯ, ಕಂದಾಯ, ಅಬಕಾರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಪಂಚಾಯಿತಿ ಸಿಬ್ಬಂದಿ, ನಿಕಟಪೂರ್ವ ಸದಸ್ಯರು ಹಾಜರಿದ್ದರು .
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net