ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಮಡಿಕೇರಿ ತಾಲೂಕು ಘಟಕ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಮಹಿಳಾ ವಿಚಾರ ಗೋಷ್ಠಿಯಲ್ಲಿ ವಿವಿಧ ರಂಗದಲ್ಲಿ ಸಾಧನೆ ಮಾಡಿದವರನ್ನು ಗೌರವಿಸಲಾಯಿತು. ಪದ್ಮಶ್ರೀ ಪುರಸ್ಕೃತ ರಾಣಿ ಮಾಚಯ್ಯ, ನಗರಸಭೆ ಅಧ್ಯಕ್ಷೆ ಪಿ. ಕಲಾವತಿ, ಯೋಜನಾಧಿಕಾರಿ ಪುರುಷೋತ್ತಮ, ತಾಳೂರು ಉಷಾಕಾಶಿ ಇತರರು ಹಾಜರಿದ್ದರು.
ನಾಪೋಕ್ಲು: ಮಹಿಳೆಯರು ಸಮಾಜಮುಖಿ ಕಾರ್ಯಕ್ರಮದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ನಗರಸಭೆ ಅಧ್ಯಕ್ಷೆ ಪಿ. ಕಲಾವತಿ ಹೇಳಿದರು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಮಡಿಕೇರಿ ತಾಲೂಕು ಘಟಕ ಜ್ಞಾನ ವಿಕಾಸ ಕಾರ್ಯಕ್ರಮದ ಪ್ರಯುಕ್ತ ಮೈತ್ರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಮಹಿಳಾ ವಿಚಾರ ಗೋಷ್ಠಿ ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆಯರ ಅಭಿವೃದ್ಧಿಗೆ ಇಂತಹ ವಿಚಾರ ಗೋಷ್ಠಿಗಳು ಅತ್ಯಗತ್ಯ ಎಂದು ಹೇಳಿದರು.
ವಕೀಲೆ ಮೀನಾ ಕುಮಾರಿ ಮಾತನಾಡಿ, ನೊಂದ ಮಹಿಳೆಗೆ ಕಾನೂನಿನಲ್ಲಿ ನ್ಯಾಯ ದೊರಕಲಿದೆ. ಈ ಬಗ್ಗೆ ನೊಂದವರು ಚಿಂತೆ ಮಾಡುವುದು ಬೇಡ. ಬಾಲ್ಯ ವಿವಾಹ ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದೆ. ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡಿಸಲೇಬೇಕು ಎಂದ ಅವರು ಮಹಿಳಾ ಸಹಾಯವಾಣಿಯ ಕುರಿತು ಮಾಹಿತಿ ನೀಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಡಿಕೇರಿ ತಾಲೂಕಿನ ಯೋಜನಾಧಿಕಾರಿ ಪುರುಷೋತ್ತಮ ಮಾತನಾಡಿ, ಪ್ರತಿಯೊಂದು ಕ್ಷೇತ್ರದಲ್ಲಿಯೂ ಮಹಿಳೆಯರ ಸರ್ವತೋಮುಖ ಬೆಳವಣಿಗೆ ಆಗಬೇಕು. ಕುಟುಂಬ ನಿರ್ವಹಣೆ ಮಾಡುವ ಮಹಿಳೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನಡೆಸಲಾಗುವ ಎಲ್ಲ ಕಾರ್ಯಕ್ರಮಗಳಲ್ಲೂ ತೊಡಗಿಸಿಕೊಳ್ಳಬೇಕು. ಬಹುತೇಕ ಮಹಿಳೆಯರು ತಮ್ಮ ಕಾಲ ಮೇಲೆ ತಾವೇ ನಿಂತು ಜೀವನವನ್ನು ಸಾಗಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಮಹಿಳಾ ಸಮೂಹಕ್ಕೆ ಜಾಗೃತಿ ಮೂಡಿಸಬೇಕಿದೆ ಎಂದರು.
ತಾಳೂರು ಉಷಾಕಾಶಿ ಮಾತನಾಡಿ, ಮಕ್ಕಳಲ್ಲಿ ಸಂಸ್ಕೃತಿ ಸಂಸ್ಕಾರವನ್ನು ಬೆಳೆಸುವಲ್ಲಿ ಮಹಿಳೆಯರ ಪಾತ್ರ ಬಹಳ ದೊಡ್ಡದು. ಹಿಂದಿನ ಕಾಲದಲ್ಲಿ ಅವಿಭಕ್ತ ಕುಟುಂಬಗಳು ಇದ್ದವು. ಅಲ್ಲಿ ಹಿರಿಯರಿಂದ ಜೀವನ ಶೈಲಿ ವಿಧಾನಗಳು ಮಕ್ಕಳಿಗೆ ತಿಳಿಯುತ್ತಿದ್ದವು. ಜೀವನ ದಲ್ಲಿ ಜ್ಞಾನ ಕ್ಕಿಂತ ಮಿಗಿಲಾದದ್ದು ಯಾವುದೂ ಇಲ್ಲ ಎಂದರು.
ಈ ಸಂದರ್ಭ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗೌರವಿಸಲಾಯಿತು.
ವಿವಿಧ ಸ್ಪರ್ಧೆ: ಕಾರ್ಯಕ್ರಮದ ಅಂಗವಾಗಿ ಹೂಗುಚ್ಛ , ರಂಗೋಲಿ ,ಛದ್ಮವೇಷ ಸ್ಪರ್ಧೆ ಏರ್ಪಡಿಸಲಾಗಿತ್ತು. ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಪದ್ಮಶ್ರೀ ಪುರಸ್ಕೃತ ರಾಣಿ ಮಾಚಯ್ಯ ಅಧ್ಯಕ್ಷತೆ ವಹಿಸಿದ್ದರು. ಸೇವಾ ಪ್ರತಿನಿಧಿ ಚಿತ್ರಾ, ಹರಿಣಿ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಮಾಲಿನಿ ಇದ್ದರು.