ಸೋಮವಾರಪೇಟೆ ತಾಲೂಕಿನ ವಿವಿಧ ಅಂಗನವಾಡಿಗಳಿಗೆ ಆಯ್ಕೆಯಾಗಿರುವ ಅಂಗನವಾಡಿ ಶಿಕ್ಷಕಿಯರು ಮತ್ತು ಸಹಾಯಕಿಯರಿಗೆ ಶಾಸಕ ಡಾ.ಮಂತರ್‌ಗೌಡ ಕಾರ್ಯಾದೇಶ ಪತ್ರ ವಿತರಿಸಿದರು. ಶ್ರೀದೇವಿ ಇದ್ದರು.
Published on:
Copied
Follow Us
ಸೋಮವಾರಪೇಟೆ : ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಆರೈಕೆ ಮಾಡುವಾಗ ಯಾವುದೇ ರೀತಿಯ ತಾರತಮ್ಯ ಮಾಡಬಾರದು. ಎಲ್ಲ ಮಕ್ಕಳನ್ನೂ ತಮ್ಮ ಮಕ್ಕಳಂತೆ ಪ್ರೀತಿ ಹಾಗೂ ಕಾಳಜಿಯಿಂದ ನೋಡಿಕೊಳ್ಳಬೇಕು ಎಂದು ಶಾಸಕ ಡಾ.ಮಂತರ್‌ಗೌಡ ಸಲಹೆ ನೀಡಿದರು.
ತಾಲೂಕಿನ ವಿವಿಧ ಅಂಗನವಾಡಿಗಳಿಗೆ ಆಯ್ಕೆಯಾಗಿರುವ ಮೂವರು ಶಿಕ್ಷಕರು ಹಾಗೂ 13 ಸಹಾಯಕಿಯರಿಗೆ ಶಾಸಕ ಡಾ. ಮಂತರ್‌ಗೌಡ ಅವರು ಸೋಮವಾರ ತಮ್ಮ ಕಚೇರಿಯಲ್ಲಿ ಕಾರ್ಯಾದೇಶ ಪತ್ರ ವಿತರಿಸಿ ಮಾತನಾಡಿ, ಸರ್ಕಾರದ ವತಿಯಿಂದ ಮಕ್ಕಳಿಗೆ ನೀಡಲಾಗುತ್ತಿರುವ ಪೌಷ್ಠಿಕ ಆಹಾರವನ್ನು ಸಮರ್ಪಕವಾಗಿ ವಿತರಿಸಿ, ಅದರ ಪ್ರಯೋಜನ ಮಕ್ಕಳಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಸಂಖ್ಯೆಯನ್ನು ಹೆಚ್ಚಾಗಿ ತೋರಿಸಿ ಸರ್ಕಾರಕ್ಕೆ ವಂಚನೆ ಮಾಡುವ ಯಾವುದೇ ಪ್ರಯತ್ನ ನಡೆಯಬಾರದು. ಈ ರೀತಿಯ ಅಕ್ರಮಗಳಿಗೆ ಶಿಕ್ಷಕರು ಅಥವಾ ಸಿಬ್ಬಂದಿ ಕೈಹಾಕಿದರೆ ಉದ್ಯೋಗವನ್ನೇ ಕಳೆದುಕೊಳ್ಳಬೇಕಾಗುತ್ತದೆ ಎಂದು ಇದೇ ವೇಳೆ ಎಚ್ಚರಿಕೆ ನೀಡಿದರು.
ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಸಂಖ್ಯೆಗೆ ಸಂಬಂಧಿಸಿದಂತೆ ಈಗಾಗಲೇ ಕೆಲ ಆರೋಪಗಳು ಕೇಳಿಬಂದಿವೆ. ಮುಂದೆ ಇಂತಹ ತಪ್ಪುಗಳು ಮರುಕಳಿಸಿದರೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಅಂಗನವಾಡಿ ಶಿಕ್ಷಕರು ನೇರ ಹೊಣೆಗಾರರಾಗಬೇಕಾಗುತ್ತದೆ. ಆದ್ದರಿಂದ ಸರ್ಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಮಕ್ಕಳಿಗೆ ಉತ್ತಮ ಸೇವೆ ನೀಡಬೇಕು ಎಂದು ಸೂಚಿಸಿದರು.
ಅಂಗನವಾಡಿ ಕಟ್ಟಡಗಳ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡಬೇಕು. ಕಟ್ಟಡದಲ್ಲಿ ಬಿರುಕು, ಛಾವಣಿ ಸೋರಿಕೆ ಸೇರಿದಂತೆ ಯಾವುದೇ ರೀತಿಯ ಸಮಸ್ಯೆ ಕಂಡುಬಂದಲ್ಲಿ ನಿರ್ಲಕ್ಷ್ಯ ವಹಿಸದೆ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಬೇಕು. ಮಕ್ಕಳ ಸುರಕ್ಷತೆಗೆ ಧಕ್ಕೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಂಗನವಾಡಿ ಶಿಕ್ಷಕರಿಗೆ ಸೂಚಿಸಿದರು.
ಹೊಸದಾಗಿ ಆಯ್ಕೆಯಾಗಿರುವ ಶಿಕ್ಷಕರು ಮತ್ತು ಸಹಾಯಕಿಯರು ತಮ್ಮ ಜವಾಬ್ದಾರಿಯನ್ನು ಅರಿತು ಕರ್ತವ್ಯ ನಿರ್ವಹಿಸುವ ಮೂಲಕ ಮಕ್ಕಳ ಸಮಗ್ರ ಬೆಳವಣಿಗೆಗೆ ಶ್ರಮಿಸಬೇಕು ಎಂದು ಮಂತರ್‌ಗೌಡ ಕರೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಭಿವೃದ್ಧಿ ಇಲಾಖೆಯ ಯೋಜನಾಧಿಕಾರಿ ಶ್ರೀದೇವಿ ಮುದೋಳ ಇದ್ದರು