ಶೈಕ್ಷಣಿಕ ಅವಧಿಯಲ್ಲಿ ದುಶ್ಚಟಗಳಿಗೆ ಬಲಿಯಾಗಬಾರದು

ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಬುಧವಾರ ಆಯೋಜಿಸಲಾಗಿದ್ದ 2026-27ನೇ ಸಾಲಿನ ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ ಮತ್ತು ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸಿದರು. ವಿ.ಪಿ ಶಶಿಧರ್, ಡಾ. ರೇವತಿ ಪೂವಯ್ಯ, ಪ್ರೊ. ಪುಟ್ಟರಾಜು, ಡಾ. ಮಧುಶ್ರೀ ಮತ್ತಿತರರು ಇದ್ದರು.
ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಬುಧವಾರ ಆಯೋಜಿಸಲಾಗಿದ್ದ 2026-27ನೇ ಸಾಲಿನ ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ ಮತ್ತು ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸಿದರು. ವಿ.ಪಿ ಶಶಿಧರ್, ಡಾ. ರೇವತಿ ಪೂವಯ್ಯ, ಪ್ರೊ. ಪುಟ್ಟರಾಜು, ಡಾ. ಮಧುಶ್ರೀ ಮತ್ತಿತರರು ಇದ್ದರು.
Published on
ಕುಶಾಲನಗರ
ವಿದ್ಯಾರ್ಥಿಗಳು ತಮ್ಮ ಅಮೂಲ್ಯವಾದ ಶೈಕ್ಷಣಿಕ ಅವಧಿಯಲ್ಲಿ ದುಶ್ಚಟಗಳಿಗೆ ಬಲಿಯಾಗದೆ, ವೈಜ್ಞಾನಿಕ ಚಿಂತನೆಗಳನ್ನು ಮೈಗೂಡಿಸಿಕೊಂಡು ನಿರ್ದಿಷ್ಟ ಗುರಿಯೊಂದಿಗೆ ಅಧ್ಯಯನ ಮಾಡಿದಾಗ ಮಾತ್ರ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಹೇಳಿದರು. ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಬುಧವಾರ ಆಯೋಜಿಸಲಾಗಿದ್ದ 2026-27ನೇ ಸಾಲಿನ ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ ಮತ್ತು ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಕಾಲೇಜು ದಿನಗಳು ವಿದ್ಯಾರ್ಥಿ ಜೀವನದ ಅತ್ಯಂತ ಪ್ರಮುಖ ಘಟ್ಟ, ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಗಮನ ಹರಿಸಬೇಕು. ನೂತನವಾಗಿ ಆಯ್ಕೆಯಾಗಿರುವ ವಿದ್ಯಾರ್ಥಿ ಸಂಘದ ಪ್ರತಿನಿಧಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಕಾಲೇಜಿನ ಸರ್ವಾಂಗೀಣ ಅಭಿವೃದ್ಧಿಗೆ ಮತ್ತು ಮೂಲಸೌಕರ್ಯಗಳ ಪೂರೈಕೆಗೆ ಅಗತ್ಯವಿರುವ ಎಲ್ಲಾ ಸಹಕಾರವನ್ನು ನೀಡಲಾಗುವುದು ಎಂದು ಹೇಳಿದರು.
ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಮಾತನಾಡಿ, ಆಧುನಿಕ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಮೂಢನಂಬಿಕೆಗಳನ್ನು ತೊರೆದು ವೈಜ್ಞಾನಿಕ ಹಾಗೂ ತಾರ್ಕಿಕ ಮನೋಭಾವನೆಯನ್ನು ಬೆಳೆಸಿಕೊಳ್ಳುವುದು ಕಾಲದ ಅಗತ್ಯವಾಗಿದೆ ಎಂದರು.
ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಪ್ರಾಧ್ಯಾಪಕಿ ಹಾಗೂ ಸಂಪನ್ಮೂಲ ವ್ಯಕ್ತಿ ಡಾ. ರೇವತಿ ಪೂವಯ್ಯ ಕೊಡಗಿನ ಶ್ರೀಮಂತ ಸಾಂಸ್ಕೃತಿಕ ಹಿನ್ನೆಲೆ, ಪರಂಪರೆ ಮತ್ತು ಯುವಜನತೆಗೆ ಶಿಕ್ಷಣದ ಮಹತ್ವದ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ. ಪುಟ್ಟರಾಜು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಐಕ್ಯೂಎಸಿ ಸಂಚಾಲಕಿ ಡಾ. ಮಧುಶ್ರೀ, ಸಾಂಸ್ಕೃತಿಕ ಸಮಿತಿ ಸಂಚಾಲಕಿ ಕೆ.ಪಿ. ಕುಸುಮ, ದೈಹಿಕ ಶಿಕ್ಷಣ ನಿರ್ದೇಶಕಿÀ ಡಾ. ಪಿ.ಪಿ. ಜಯಂತಿ, ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿಗಳಾದ ಸಿ.ಹೆಚ್. ರವಿ ಹಾಗೂ ಬಿ. ನಮೀತ, ರೋವರ್ಸ್ ದಳದ ನಾಯಕ ಡಾ. ಬಿ.ಕೆ. ಕುಮಾರ್, ಯುವ ರೆಡ್ ಕ್ರಾಸ್ ಸಂಚಾಲಕ ಡಾ. ಎನ್.ಎನ್. ಕುಮಾರ್, ಕಾಲೇಜು ಅಧೀಕ್ಷಕ ಕೆ.ಪಿ. ಮೋಹನ್‌ಕುಮಾರ್ ಇದ್ದರು.
ವಿದ್ಯಾರ್ಥಿ ಒಕ್ಕೂಟದ ಪದಾಧಿಕಾರಿಗಳಾದ ಎಂ.ಆರ್. ಸಾಗರ್ (ಉಪಾಧ್ಯಕ್ಷ), ಎಸ್. ಸಂದೇಶ್ (ಕಾರ್ಯದರ್ಶಿ), ಕೆ.ಎಸ್. ಕೀರ್ತನಾ (ಮಹಿಳಾ ಕಾರ್ಯದರ್ಶಿ), ಡೆಲ್ವಿನ್ ಲೋಬೊ (ಸಾಂಸ್ಕೃತಿಕ ಕಾರ್ಯದರ್ಶಿ), ಎಸ್. ಮಾನ್ಯ (ಮಹಿಳಾ ಸಾಂಸ್ಕೃತಿಕ ಕಾರ್ಯದರ್ಶಿ), ಎಸ್.ಹರ್ಷ (ಕ್ರೀಡಾ ಕಾರ್ಯದರ್ಶಿ), ಹೆಚ್.ಹೆಚ್. ಕೃತಿಕಾ (ಮಹಿಳಾ ಕ್ರೀಡಾ ಕಾರ್ಯದರ್ಶಿ), ಜಿ.ಎಲ್. ರಂಗಸ್ವಾಮಿ (ಜಂಟಿ ಕಾರ್ಯದರ್ಶಿ) ಹಾಗೂ ಎಸ್. ಅನನ್ಯ (ಮಹಿಳಾ ಜಂಟಿ ಕಾರ್ಯದರ್ಶಿ) ಸೇರಿದಂತೆ ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net