ಸೌಲಭ್ಯ ವಂಚಿತ ನಿವಾಸಿಗಳು ಹಕ್ಕುಪತ್ರ ವಿತರಣೆಗೆ ಕ್ರಮಕೈಗೊಳ್ಳುವಂತೆ ವಿನಂತಿಸಿ ಕುಶಾಲನಗರ ತಾಲೂಕು ತಹಸೀಲ್ದಾರ್ ಕಿರಣ್ ಜಿ. ಗೌರಯ್ಯ ಅವರ ಮೂಲಕ ಜಿಲ್ಲಾಧಿಕಾರಿ ಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಭೀಮಘರ್ಜನೆ ಸಂಘಟನೆಯ ಜಿಲ್ಲಾಧ್ಯಕ್ಷ ಎಲ್.ಎಂ.ನಾಗರಾಜು ಇನ್ನಿತರರಿದ್ದರು.
ಕುಶಾಲನಗರ: ಸಮೀಪದ ಕೂಡುಮಗಳೂರು ಗ್ರಾ.ಪಂ. ವ್ಯಾಪ್ತಿಯ ಸುಂದರನಗರ ಕಲ್ಲುಕೋರೆ ರಸ್ತೆ ಪಕ್ಕದಲ್ಲಿ ಮನೆ ಕಟ್ಟಿಕೊಂಡಿರುವ ಹಲವು ಕುಟುಂಬಗಳಿಗೆ ಇದುವರೆಗೂ ಹಕ್ಕುಪತ್ರ ದೊರಕದ ಕಾರಣ ಸೌಲಭ್ಯ ವಂಚಿತ ನಿವಾಸಿಗಳು ಪ್ರತಿಭಟನೆ ನಡೆಸಿದರು.
ಭೀಮಘರ್ಜನೆ ಸಂಘಟನೆಯ ಜಿಲ್ಲಾಧ್ಯಕ್ಷ ಎಲ್.ಎಂ.ನಾಗರಾಜು ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಇವರು
ಕುಶಾಲನಗರದ ಪ್ರವಾಸಿ ಮಂದಿರ ಬಳಿಯಿಂದ ಮೆರವಣಿಗೆಯಲ್ಲಿ ಘೋಷಣೆಗಳನ್ನು ಕೂಗುತ್ತಾ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತಕ್ಕೆ ತೆರಳಿದರು. ಬಳಿಕ ತಹಸೀಲ್ದಾರ್ ಕಚೇರಿಯ ಮುಂಭಾಗದಲ್ಲಿ ಕೆಲಕಾಲ ಪ್ರತಿಭಟನೆ ನಡೆಸಿದರು. ಕೂಡಲೆ ಹಕ್ಕುಪತ್ರ ವಿತರಣೆಗೆ ಕ್ರಮಕೈಗೊಳ್ಳುವಂತೆ ವಿನಂತಿಸಿ ತಹಸೀಲ್ದಾರ್ ಕಿರಣ್ ಜಿ. ಗೌರಯ್ಯ ಅವರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಸುದ್ದಿಗಾರರೊಂದಿಗೆ ಮಾತನಾಡಿದ ಭೀಮಘರ್ಜನೆ ಸಂಘಟನೆಯ ಜಿಲ್ಲಾಧ್ಯಕ್ಷ ಎಲ್.ಎಂ.ನಾಗರಾಜು, ಸುಂದರನಗರದ 50 ಕ್ಕೂ ಅಧಿಕ ಕುಟುಂಬಗಳು ಹಕ್ಕುಪತ್ರದಿಂದ ವಂಚಿತರಾಗಿದ್ದಾರೆ. ಕೂಡಲೆ ಫಲಾನುಭವಿಗಳಿಗೆ ಹಕ್ಕುಪತ್ರ ಒದಗಿಸಬೇಕಿದೆಯೆಂದು ಆಗ್ರಹಿಸಿದರು. ತಪ್ಪಿದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ಚುನಾವಣೆ ಸಂದರ್ಭ ಮಾತ್ರ ಆಶ್ವಾಸನೆ ನೀಡುವವರು ನಂತರದ ದಿನಗಳಲ್ಲಿ ನಮ್ಮ ಬೇಡಿಕೆ ಈಡೇರಿಸುವಲ್ಲಿ ಆಸಕ್ತಿ ತೋರುತ್ತಿಲ್ಲ. ಮೂಲಸೌಕರ್ಯಗಳಿಂದ ವಂಚಿತರಾಗಿ, ಅರಣ್ಯ ಇಲಾಖೆಯವರ ಭಯದಲ್ಲಿ ಬದುಕು ಸಾಗಿಸುವ ಸ್ಥಿತಿ ಎದುರಾಗಿದೆ ಎಂದು ಜಾಗದಲ್ಲಿನ ನಿವಾಸಿಗಳಾದ ಮಂಜುಳಾ ಮತ್ತು ಶಶಿಕಲಾ ಅಳಲು ತೋಡಿಕೊಂಡರು.