ಸಿದ್ದಾಪುರ ಸಮಯದಾಯ ಆರೋಗ್ಯ ಕೇಂದ್ರದಲ್ಲಿನ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಕರವೇ ಸ್ವಾಭಿಮಾನಿ ಬಣದ ವತಿಯಿಂದ ವೈದ್ಯಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಸುರೇಶ್ ನೆಲ್ಲಿಕಲ್, ಸಜಿಲ್ ಕುಮಾರ್, ನಂದಿನಿ, ಹರೀಶ್ ಇತರರು ಇದ್ದರು.
ಸಿದ್ದಾಪುರ: ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆ, ಔಷಧಿ ಪೂರೈಕೆ ವಿಳಂಬ ಹಾಗೂ ಪ್ರಯೋಗಾಲಯದ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಸ್ವಾಭಿಮಾನಿ ಬಣ) ವತಿಯಿಂದ ಶನಿವಾರ ಆಸ್ಪತ್ರೆ ವೈದ್ಯಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಕರವೇ ಸ್ವಾಭಿಮಾನಿ ಬಣದ ಜಿಲ್ಲಾ ಕಾರ್ಯದರ್ಶಿ ಸುರೇಶ್ ನೆಲ್ಲಿಕಲ್ ಮಾತನಾಡಿ, ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರವು ಸುತ್ತಮುತ್ತಲಿನ ಸುಮಾರು ಹತ್ತು ಗ್ರಾಮಗಳ ಬಡ ಹಾಗೂ ಕೂಲಿ ಕಾರ್ಮಿಕರಿಗೆ ಪ್ರಮುಖ ಆರೋಗ್ಯ ಸೇವಾ ಕೇಂದ್ರವಾಗಿದೆ. ಆದರೆ ಆಸ್ಪತ್ರೆಯಲ್ಲಿನ ಮೂಲಸೌಕರ್ಯಗಳ ಕೊರತೆ ಹಾಗೂ ಅವ್ಯವಸ್ಥೆಯಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದು, ಅನಿವಾರ್ಯವಾಗಿ ಸಾಲ ಮಾಡಿ ಖಾಸಗಿ ಆಸ್ಪತ್ರೆಗಳ ಮೊರೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.
ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ಕೊರತೆಯಿಂದ ರೋಗಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ. ವೈದ್ಯರು ಬರೆದುಕೊಡುವ ಕೆಲವು ಔಷಧಿಗಳನ್ನು ಹೊರಗಿನ ಮೆಡಿಕಲ್ ಅಂಗಡಿಗಳಿಂದ ಖರೀದಿಸಬೇಕಾಗುತ್ತಿದೆ. ವಿದ್ಯುತ್ ವ್ಯತ್ಯಯವಾದಾಗ ಪ್ರಯೋಗಾಲಯಗಳ ಕಾರ್ಯ ಸ್ಥಗಿತಗೊಳ್ಳುತ್ತಿದ್ದು, ಪ್ರತಿದಿನ ಸಾವಿರಾರು ಮಂದಿ ಚಿಕಿತ್ಸೆಗಾಗಿ ಭೇಟಿ ನೀಡುವ ಆಸ್ಪತ್ರೆಯಲ್ಲಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಆರೋಗ್ಯ ಇಲಾಖೆ ನಿರ್ಲಕ್ಷ್ಯ ತೋರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಮಸ್ಯೆಗಳನ್ನು ಶೀಘ್ರದಲ್ಲಿ ಪರಿಹರಿಸದಿದ್ದರೆ ಕರವೇ ಸ್ವಾಭಿಮಾನಿ ಬಣದ ವತಿಯಿಂದ ಉಗ್ರ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಮನವಿ ಸ್ವೀಕರಿಸಿದ ವೈದ್ಯಾಧಿಕಾರಿ ಡಾ. ರೇವಣ್ಣ ಪ್ರತಿಕ್ರಿಯಿಸಿ, ಆಸ್ಪತ್ರೆಯಲ್ಲಿದ್ದ ಹಲವು ಸಮಸ್ಯೆಗಳನ್ನು ಈಗಾಗಲೇ ಪರಿಹರಿಸಲಾಗಿದೆ. ಔಷಧಿಗಳ ಖರೀದಿ ಜೆಮ್ (ಜೆಇಎಂ) ಪೋರ್ಟಲ್ ಮೂಲಕ ನಡೆಯುತ್ತಿರುವುದರಿಂದ ಪೂರೈಕೆಯಲ್ಲಿ ವಿಳಂಬವಾಗುತ್ತಿದೆ. ಆಸ್ಪತ್ರೆಯಲ್ಲಿ ವೈದ್ಯರು ಲಭ್ಯವಿದ್ದು, ಪ್ರಯೋಗಾಲಯಗಳಿಗೆ ಹೊಸ ಯುಪಿಎಸ್ ಅಳವಡಿಕೆ ಹಾಗೂ ಎಕ್ಸ್-ರೇ ಯಂತ್ರಗಳ ಮೇಲ್ದರ್ಜೆಗೇರಿಸುವ ಕುರಿತು ಮೇಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು. ಆಸ್ಪತ್ರೆಯ ಉಳಿದ ಸಮಸ್ಯೆಗಳನ್ನೂ ಆದಷ್ಟು ಬೇಗ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕರವೇ ಸ್ವಾಭಿಮಾನಿ ಬಣದ ಜಿಲ್ಲಾ ಸಲಹೆಗಾರ ಸಜಿಲ್ ಕುಮಾರ್, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ನಂದಿನಿ, ನೆಲ್ಯಹುದಿಕೇರಿ ಘಟಕದ ಅಧ್ಯಕ್ಷ ಹರೀಶ್, ಕಾರ್ಯದರ್ಶಿ ನಂದ, ಪ್ರಮುಖರಾದ ಶಶಿ, ರಾಧಾಕೃಷ್ಣ, ಯಮುನ, ರವಿ, ಗಣೇಶ್, ಅಪ್ಪುಟ್ಟಿ ಇದ್ದರು.