ಸೋಮವಾರಪೇಟೆ ತಾಲೂಕಿನ ಕೊಡ್ಲಿಪೇಟೆ ಎಸ್‌ಕೆಎಸ್ ಶಾಲೆಯಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಶಸ್ತಿ ವಿಜೇತ ಪತ್ರಕರ್ತರನ್ನು ಸನ್ಮಾನಿಸಲಾಯಿತು. ಮಹಾಂತ ಸ್ವಾಮೀಜಿ, ಸವಿತಾ ರೈ, ವಿಶ್ವ, ಮಹೇಶ್ ಇದ್ದರು.
Published on:
Copied
Follow Us
ಸೋಮವಾರಪೇಟೆ: ಸಮಾಜದ ಕುಂದು-ಕೊರತೆಗಳನ್ನು ಜನರ ಮುಂದಿಡುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಮಹತ್ತರ ಜವಾಬ್ದಾರಿಯನ್ನು ಪತ್ರಿಕೆಗಳು ನಿರ್ವಹಿಸುತ್ತಿವೆ ಎಂದು ಕೊಡ್ಲಿಪೇಟೆಯ ಶ್ರೀ ಶಿವಕುಮಾರ ಸ್ವಾಮೀಜಿ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯ ಅಧ್ಯಕ್ಷ ಶ್ರೀ ಮಹಾಂತ ಸ್ವಾಮೀಜಿ ಹೇಳಿದರು.
ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸೋಮವಾರಪೇಟೆ ತಾಲೂಕು ಘಟಕದ ವತಿಯಿಂದ ಗುರುವಾರ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
ನಾಲ್ಕು ದಿಕ್ಕುಗಳಲ್ಲಿ ನಡೆಯುವ ಘಟನೆಗಳು, ಸಮಾಜದ ಬೆಳವಣಿಗೆಗಳು ಹಾಗೂ ಸಾರ್ವಜನಿಕ ಹಿತದ ವಿಚಾರಗಳನ್ನು ಜನರಿಗೆ ತಲುಪಿಸುವಲ್ಲಿ ಪತ್ರಿಕೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದರು.
ವಿದ್ಯಾರ್ಥಿಗಳು ಪ್ರತಿದಿನ ಪತ್ರಿಕೆ ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಪತ್ರಿಕೆಗಳು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವುದರೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಸಹಕಾರಿಯಾಗುತ್ತವೆ ಎಂದು ತಿಳಿಸಿದರು.
ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕಿ ಸವಿತಾ ರೈ ಮಾತನಾಡಿ, ನಿಖರ ಹಾಗೂ ವಿಶ್ವಾಸಾರ್ಹ ಮಾಹಿತಿಯನ್ನು ಸಮಾಜಕ್ಕೆ ತಲುಪಿಸುವಲ್ಲಿ ಮಾಧ್ಯಮಗಳ ಪಾತ್ರ ಅನನ್ಯವಾಗಿದೆ. ಕೃತಕ ಬುದ್ಧಿಮತ್ತೆ (ಎಐ) ಬಳಕೆ ಹೆಚ್ಚಾದರೂ ಪತ್ರಿಕೆಯ ಮಹತ್ವ ಕಡಿಮೆಯಾಗಿಲ್ಲ. ವಿದ್ಯಾರ್ಥಿಗಳು ಗುರುಗಳ ಮಾರ್ಗದರ್ಶನದಲ್ಲಿ ಗುರಿ ಸಾಧನೆಯತ್ತ ಮುನ್ನಡೆಯಬೇಕು ಎಂದು ಹೇಳಿದರು.
ಹಿರಿಯ ಪತ್ರಕರ್ತ ಎಸ್.ಮಹೇಶ್ ಮಾತನಾಡಿ, ಪತ್ರಿಕೆಗಳು ಕೇವಲ ಸುದ್ದಿ ಮಾಧ್ಯಮವಲ್ಲ. ಇತಿಹಾಸದ ದಾಖಲೆಯಾಗಿಯೂ ಉಳಿಯುತ್ತವೆ. ಆದ್ದರಿಂದ ಸಾಮಾಜಿಕ ಜಾಲತಾಣಗಳಿಗಷ್ಟೇ ಸೀಮಿತವಾಗದೆ ವಿಶ್ವಾಸಾರ್ಹ ಪತ್ರಿಕೆಗಳನ್ನು ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಇದೇ ವೇಳೆ ಹಿರಿಯ ಪತ್ರಕರ್ತ ಎಸ್.ಮಹೇಶ್ ಹಾಗೂ ಜಿಲ್ಲಾ ಪ್ರಶಸ್ತಿ ಪುರಸ್ಕೃತರಾದ ಹಿರಿಕರ ರವಿ ಮತ್ತು ಲಕ್ಷ್ಮೀಕಾಂತ್ ಕೊಮಾರಪ್ಪ ಅವರನ್ನು ಸನ್ಮಾನಿಸಲಾಯಿತು.
ಸಂಘದ ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಮುಳ್ಳೂರು ಅಧ್ಯಕ್ಷತೆ ವಹಿಸಿದ್ದರು. ವಿಜಯ್ ಹಾನಗಲ್ ಪ್ರಾಸ್ತಾವಿಕವಾಗಿ ಮಾತನಾಡಿದ್ದು, ವಿದ್ಯಾರ್ಥಿನಿ ಹಿತಶ್ರೀ ಕಾರ್ಯಕ್ರಮ ನಿರೂಪಿಸಿದರು. ಸಂಘದ ಅಧ್ಯಕ್ಷ ವಿಶ್ವ ಕುಂಬೂರು, ಮುಖ್ಯಶಿಕ್ಷಕ ಅಭಿಲಾಶ್, ಕಾರ್ಯದರ್ಶಿ ದಿವಾಕರ್ ಸೇರಿದಂತೆ ಗಣ್ಯರು ಇದ್ದರು.