ಸೆಸ್ಕ್ ಸಿಬ್ಬಂದಿ ನಿಯೋಜನೆಗೆ ಮನವಿ

ಅರಮಣಮಾಡ ಸತೀಶ್ ದೇವಯ್ಯ
ಅರಮಣಮಾಡ ಸತೀಶ್ ದೇವಯ್ಯ
Published on
ಪೊನ್ನಂಪೇಟೆ:
ನಿರಂತರ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ಬಾಳೆಲೆ ಸೆಸ್ಕ್ ಉಪವಲಯ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯಗಳು ಹೆಚ್ಚಾಗುತ್ತಿದ್ದು, ತಕ್ಷಣವೇ ಹೆಚ್ಚುವರಿ ಸಿಬ್ಬಂದಿ ನಿಯೋಜಿಸುವಂತೆ ನಿಟ್ಟೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಅರಮಣಮಾಡ ಸತೀಶ್ ದೇವಯ್ಯ ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಬಾಳೆಲೆ ಸೆಸ್ಕ್ ಉಪವಲಯ ವ್ಯಾಪ್ತಿಯ ನಿಟ್ಟೂರು, ಕೊಟ್ಟಗೇರಿ ಹಾಗೂ ಜಾಗೆಲೆ ಗ್ರಾಮಗಳಲ್ಲಿ ಲೈನ್‌ಮ್ಯಾನ್ ಮತ್ತು ಗ್ಯಾಂಗ್‌ಮ್ಯಾನ್ ಹುದ್ದೆಗಳು ಖಾಲಿ ಇರುವುದರಿಂದ ಮಳೆಯಿಂದ ಉಂಟಾಗುತ್ತಿರುವ ವಿದ್ಯುತ್ ಸಮಸ್ಯೆಗಳಿಗೆ ಸಕಾಲದಲ್ಲಿ ಸ್ಪಂದಿಸಲು ಸಾಧ್ಯವಾಗುತ್ತಿಲ್ಲ. ಕಳೆದ ನಾಲ್ಕೈದು ದಿನಗಳಿಂದ ವಿದ್ಯುತ್ ಸರಬರಾಜು ಅಸ್ತವ್ಯಸ್ತಗೊಂಡಿದ್ದು, ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ಕೊಡಗು ಜಿಲ್ಲೆಗೆ ಬೇರೆ ಜಿಲ್ಲೆಗಳಿಂದ ತಾತ್ಕಾಲಿಕವಾಗಿ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ, ಮಳೆಯಿಂದ ಹಾನಿಗೊಳಗಾದ ವಿದ್ಯುತ್ ಕಂಬಗಳು ಮತ್ತು ತಂತಿಗಳ ದುರಸ್ತಿ ಕಾರ್ಯವನ್ನು ತ್ವರಿತಗೊಳಿಸಲು ವಿಶೇಷ ಟಾಸ್ಕ್ ಫೋರ್ಸ್ ರಚಿಸಬೇಕು.
ನಿಟ್ಟೂರು, ಕಾರ್ಮಾಡು, ಮಲ್ಲೂರು, ಕೊಟ್ಟಗೇರಿ ಹಾಗೂ ವಡ್ಡರಮಾಡು ಭಾಗಗಳಲ್ಲಿ ಖಾಲಿ ಇರುವ ಲೈನ್‌ಮ್ಯಾನ್ ಮತ್ತು ಗ್ಯಾಂಗ್‌ಮ್ಯಾನ್ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು. ಪ್ರಸ್ತುತ ಒಬ್ಬ ಸಿಬ್ಬಂದಿ ಮೂಲಕವೇ ವಿಶಾಲ ಪ್ರದೇಶದ ನಿರ್ವಹಣೆ ನಡೆಯುತ್ತಿರುವುದರಿಂದ ತುರ್ತು ಸಂದರ್ಭಗಳಲ್ಲಿ ಸಮರ್ಪಕ ಸೇವೆ ಒದಗಿಸಲು ಸಾಧ್ಯವಾಗುತ್ತಿಲ್ಲ. ಈ ಭಾಗದಲ್ಲಿ ಗಿರಿಜನ ಹಾಡಿಗಳ ಸಂಖ್ಯೆ ಹೆಚ್ಚಿದ್ದು, ಕುಡಿಯುವ ನೀರಿನ ಪೂರೈಕೆ ವಿದ್ಯುತ್ ಚಾಲಿತ ಪಂಪ್‌ಸೆಟ್‌ಗಳನ್ನು ಅವಲಂಬಿಸಿದೆ. ವಿದ್ಯುತ್ ವ್ಯತ್ಯಯದಿಂದ ಪಂಪ್‌ಗಳು ಕಾರ್ಯನಿರ್ವಹಿಸದಿದ್ದರೆ ಶುದ್ಧ ಕುಡಿಯುವ ನೀರಿನ ಕೊರತೆ ಉಂಟಾಗಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net