ಸಿದ್ದೇಶ್ವರ ದೇಗುಲ ಆವರಣದಲ್ಲಿ ಸಮಾಧಿ!

ವೀರಾಜಪೇಟೆ ತಾಲೂಕಿನ ಮಾಲ್ದಾರೆ ಸಮೀಪದ ಇತಿಹಾಸ ಪ್ರಸಿದ್ಧ ಶ್ರೀ ಸಿದ್ದೇಶ್ವರ ದೇವಾಲಯ ಆವರಣದಲ್ಲಿ ಅನಧಿಕೃತವಾಗಿ ಸಮಾಧಿ ನಿರ್ಮಿಸಿದ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಹಿಂದೂಪರ ಸಂಘಟನೆ ಪ್ರತಿಭಟನೆ ನಡೆಸಿತು.
ವೀರಾಜಪೇಟೆ ತಾಲೂಕಿನ ಮಾಲ್ದಾರೆ ಸಮೀಪದ ಇತಿಹಾಸ ಪ್ರಸಿದ್ಧ ಶ್ರೀ ಸಿದ್ದೇಶ್ವರ ದೇವಾಲಯ ಆವರಣದಲ್ಲಿ ಅನಧಿಕೃತವಾಗಿ ಸಮಾಧಿ ನಿರ್ಮಿಸಿದ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಹಿಂದೂಪರ ಸಂಘಟನೆ ಪ್ರತಿಭಟನೆ ನಡೆಸಿತು.
Published on

ಪ್ರಮುಖ ಮುಖ್ಯಾಂಶಗಳು

  • ರಾತ್ರೋರಾತ್ರಿ ಗೋರಿ ನಿರ್ಮಿಸಿದ ಕಿಡಿಗೇಡಿಗಳು
  • ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ
ಸಿದ್ದಾಪುರ: ವೀರಾಜಪೇಟೆ ತಾಲೂಕಿನ ಮಾಲ್ದಾರೆ ಸಮೀಪದ ಇತಿಹಾಸ ಪ್ರಸಿದ್ಧ ಶ್ರೀ ಸಿದ್ದೇಶ್ವರ ದೇವಾಲಯ ಆವರಣದಲ್ಲಿ ಕಡಿಗೇಡಿಗಳು ಸಮಾಧಿ (ಗೋರಿ) ನಿರ್ಮಿಸಿ ದೇವಾಲಯ ಪ್ರಾವಿತ್ರೃಕ್ಕೆ ಧಕ್ಕೆ ತರುಲು ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿ ಸೋಮವಾರ ಹಿಂದೂಪರ ಸಂಘಟನೆಗಳು ಹಾಗೂ ಸ್ಥಳೀಯರು ಬೃಹತ್ ಪ್ರತಿಭಟನೆ ನಡೆಸಿದರು.
ದೇವಾಲಯದ ಕಮಾನು ಸಮೀಪ ಬೆಳಗ್ಗೆಯಿಂದಲೇ ವಿವಿಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಜಮಾಯಿಸಿ ಪ್ರತಿಭಟನೆ ನಡೆಸಿ, ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವ ಇಂತಹ ಘಟನೆಗಳು ಮರುಕಳಿಸದಂತೆ ತಪ್ಪಿತಸ್ಥರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.
ಪ್ರಕರಣ ದಾಖಲಿಸಿ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕೆಲಕಾಲ ಸಿದ್ದಾಪುರ-ಮೈಸೂರು ಮುಖ್ಯ ರಸ್ತೆಯಲ್ಲಿ ವಾಹನ ಸಂಚಾರ ತಡೆದು ಪ್ರತಿಭಟನೆ ನಡೆಸಿದರು. ಇದರಿಂದ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಹಿಂದೂಪರ ಸಂಘಟನೆ ಮುಖಂಡ ಚಕ್ಕೆರ ಮನು ಮಾತನಾಡಿ, ದೇವಾಲಯದ ಪಾವಿತ್ರೃಕ್ಕೆ ಧಕ್ಕೆ ತರುವ ಉದ್ದೇಶದಿಂದ ಕಿಡಿಗೇಡಿಗಳು ಈ ರೀತಿಯ ಕೃತ್ಯ ಎಸಗಿದ್ದಾರೆ. ಈ ಸಂಬಂಧ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರನ್ನು ಶೀಘ್ರ ಬಂಧಿಸಬೇಕು. ಅಲ್ಲದೆ ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷೃ ಅಥವಾ ಸಹಕಾರ ಇದೆಯೇ ಎಂಬುದರ ಬಗ್ಗೆಯೂ ತನಿಖೆ ನಡೆಸಬೇಕು. 24 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸದಿದ್ದರೆ ಕೊಡಗು ಹಾಗೂ ಪಿರಿಯಾಪಟ್ಟಣ ಭಾಗದಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಹಿಂದೂಪರ ಸಂಘಟನೆಯ ಮುಖಂಡ ರವಿ ಕುಶಾಲಪ್ಪ ಮಾತನಾಡಿ, ಜಿಲ್ಲೆಯ ವಿವಿಧ ದೇವಾಲಯಗಳ ಪಾವಿತ್ರೃಕ್ಕೆ ಧಕ್ಕೆ ತರುವ ಪ್ರಯತ್ನಗಳು ನಡೆಯುತ್ತಿವೆ. ಇಂತಹ ಕೃತ್ಯಗಳನ್ನು ಹಿಂದೂ ಸಮಾಜ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಮ್ಮತಿ, ಬಾಳಲೆ, ಸಿದ್ದಾಪುರ, ಚೆನ್ನಯ್ಯನಕೋಟೆ, ಪಾಲಿಬೆಟ್ಟ ಸೇರಿದಂತೆ ವಿವಿಧ ಭಾಗಗಳಿಂದ ಆಗಮಿಸಿದ್ದ ಹಿಂದೂಪರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು. ಘಟನೆಯನ್ನು ತೀವ್ರವಾಗಿ ಖಂಡಿಸಿದರು. ಈ ವೇಳೆ ಪ್ರತಿಭಟನಾಕಾರರು ಅರಣ್ಯ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು, ಇಲಾಖೆಯ ಕಾರ್ಯವೈಖರಿಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಕಲ್ಲು-ಮಣ್ಣು ತುಂಬಿದ್ದ ಗೋರಿ: ದೇವಳದ ಆವರಣದಲ್ಲಿ ನಿರ್ಮಿಸಿದ್ದ ಸಮಾಧಿ(ಗೋರಿ)ಯನ್ನು ಸೋಮವಾರ ಪೊಲೀಸರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಸ್ಥಳೀಯರು ತೆರವುಗೊಳಿಸಿದರು. ಸಮಾಧಿ ತೆರೆದಾಗ ಅದರೊಳಗೆ ಮೃತದೇಹ ಇರಲಿಲ್ಲ. ಕಲ್ಲು ಹಾಗೂ ಮಣ್ಣನ್ನು ತುಂಬಿಸಿ ಮೇಲ್ಭಾಗದಲ್ಲಿ ಹೂವಿನ ಹಾರವಿಡಲಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಸಿದ್ದಾಪುರ ಪೊಲೀಸರು ಆರೋಪಿಗಳ ಪತ್ತೆ ಬಲೆ ಬೀಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net