29,011 ಮಕ್ಕಳಿಗೆ ಲಸಿಕೆ ನೀಡುವ ಗುರಿ

ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಡಾ.ಮಂತರ್‌ಗೌಡ ಮಗುವಿಗೆ ಪೋಲಿಯೋ ಹನಿ ಹಾಕುವ ಮೂಲಕ ಚಾಲನೆ ನೀಡಿದರು. ವೀಣಾ, ಸುಂದರ್, ಇಂದೂಧರ್ ಇದ್ದರು.
ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಡಾ.ಮಂತರ್‌ಗೌಡ ಮಗುವಿಗೆ ಪೋಲಿಯೋ ಹನಿ ಹಾಕುವ ಮೂಲಕ ಚಾಲನೆ ನೀಡಿದರು. ವೀಣಾ, ಸುಂದರ್, ಇಂದೂಧರ್ ಇದ್ದರು.
Published on
ಸೋಮವಾರಪೇಟೆ: ಕೊಡಗು ಜಿಲ್ಲಾ ಆರೋಗ್ಯ ಇಲಾಖೆ, ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆ ಹಾಗೂ ರೋಟರಿ ಸಂಸ್ಥೆಯ ಸಹಯೋಗದಲ್ಲಿ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಭಾನುವಾರ ಏರ್ಪಡಿಸಿದ್ದ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಶಾಸಕ ಡಾ.ಮಂತರ್ ಗೌಡ ಮಗುವಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು.
ಡಾ.ಮಂತರ್ ಗೌಡ ಮಾತನಾಡಿ, ಕಳೆದ 2025ರಲ್ಲಿ ಜಿಲ್ಲೆಯಲ್ಲಿ 39,689 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ನೀಡಲಾಗಿದ್ದು, ಈ ಬಾರಿ 29,011 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು. ಈಗಾಗಲೇ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಿದ್ದರೂ ಪ್ರತಿಯೊಂದು ಪಲ್ಸ್ ಪೋಲಿಯೋ ಅಭಿಯಾನದಲ್ಲಿ ಐದು ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಎರಡು ಹನಿ ಲಸಿಕೆ ನೀಡಬೇಕು ಎಂದು ಕರೆ ನೀಡಿದರು.
ಲಸಿಕೆಯಿಂದ ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚುವುದರ ಜತೆಗೆ ಪೋಲಿಯೋ ಸೋಂಕು ಹರಡುವ ಅಪಾಯವನ್ನು ತಡೆಯಲು ಸಹಕಾರಿಯಾಗುತ್ತದೆ ಎಂದು ಹೇಳಿದರು. ದೇಶವನ್ನು ಪೋಲಿಯೋಮುಕ್ತವಾಗಿಡುವ ಉದ್ದೇಶದಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾದ್ಯಂತ ವಿವಿಧ ಕೇಂದ್ರಗಳಲ್ಲಿ ಐದು ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹನಿಗಳನ್ನು ನೀಡಲಾಗುತ್ತಿದೆ ಎಂದರು.
ಪಾಲಕರು ತಮ್ಮ ಮಕ್ಕಳನ್ನು ತಪ್ಪದೆ ಲಸಿಕಾ ಕೇಂದ್ರಗಳಿಗೆ ಕರೆತಂದು ಲಸಿಕೆ ಹಾಕಿಸಬೇಕು. ಲಸಿಕೆಯಿಂದ ತಪ್ಪಿಸಿಕೊಂಡ ಮಕ್ಕಳಿಗೆ ಮನೆ ಮನೆಗೆ ತೆರಳಿ ಲಸಿಕೆ ನೀಡಲಾಗುವುದು. ಹಾಡಿಗಳು, ಅಲೆಮಾರಿ ಹಾಗೂ ಪ್ರವಾಸಿ ಕುಟುಂಬಗಳ ಮಕ್ಕಳಿಗೂ ಲಸಿಕೆ ತಲುಪಿಸುವ ಮೂಲಕ ಶೇ.100ರಷ್ಟು ಗುರಿ ಸಾಧಿಸಬೇಕು ಎಂದು ಸೂಚಿಸಿದರು.
ಆರೋಗ್ಯ ಇಲಾಖೆಯ ಉಪ ನಿರ್ದೇಶಕರು ಹಾಗೂ ಪಲ್ಸ್ ಪೋಲಿಯೋ ಯೋಜನೆಯ ಕೊಡಗು ಜಿಲ್ಲಾ ಉಸ್ತುವಾರಿ ಡಾ.ಎಂ.ಸಿ.ರವಿ ಮಾತನಾಡಿ, ದೇಶದಲ್ಲಿ ಪೋಲಿಯೋ ಪಿಡುಗನ್ನು ತಡೆಗಟ್ಟಲು ಯಶಸ್ವಿಯಾಗಿದ್ದರೂ ಮುಂಜಾಗ್ರತಾ ಕ್ರಮವಾಗಿ ಲಸಿಕೆ ಅಭಿಯಾನ ಮುಂದುವರಿಸಲಾಗುತ್ತಿದೆ ಎಂದರು. ಪ್ರತಿಯೊಬ್ಬ ಪಾಲಕರು ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ಭಾರತದ ಕನಸನ್ನು ಸಾಕಾರಗೊಳಿಸಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಆರೋಗ್ಯಾಧಿಕಾರಿ ಸತೀಶ್‌ಕುಮಾರ್, ತಾಲೂಕು ಆರೋಗ್ಯಾಧಿಕಾರಿ ಇಂದೂಧರ್, ಆಸ್ಪತ್ರೆ ವೈದ್ಯಾಧಿಕಾರಿ ಜಮೀರ್, ರೋಟರಿ ಸಂಸ್ಥೆ ಅಧ್ಯಕ್ಷೆ ವೀಣಾ ಮನೋಹರ್ ಹಾಗೂ ನಿಯೋಜಿತ ಅಧ್ಯಕ್ಷ ಬಿ.ಎಸ್. ಸುಂದರ್ ಇದ್ದರು.
ಬೆಳಗ್ಗೆಯಿಂದಲೇ ಪಾಲಕರು ತಮ್ಮ ಮಕ್ಕಳನ್ನು ಸಮೀಪದ ಆರೋಗ್ಯ ಕೇಂದ್ರಗಳು, ಅಂಗನವಾಡಿ ಕೇಂದ್ರಗಳು ಹಾಗೂ ಶಾಲೆಗಳಲ್ಲಿ ಸ್ಥಾಪಿಸಲಾದ ಲಸಿಕಾ ಕೇಂದ್ರಗಳಿಗೆ ಕರೆತಂದು ಲಸಿಕೆ ಹಾಕಿಸಿದರು.
ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸ್ವಯಂಸೇವಕರು ಲಸಿಕಾ ಕಾರ್ಯದಲ್ಲಿ ಭಾಗವಹಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net