ಆರೋಗ್ಯವಂತ ಜೀವನ ರೂಪಿಸಿಕೊಳ್ಳಬೇಕು

ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಕ್ರೀಡಾ ದಿನ ಕಾರ್ಯಕ್ರಮದ
ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಕ್ರೀಡಾ ದಿನ ಕಾರ್ಯಕ್ರಮದ
Published on

ಯುವಜನರು ಬಿಡುವಿನ ವೇಳೆಯಲ್ಲಿ ಯಾವುದಾದರೊಂದು ಕ್ರೀಡೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ಆರೋಗ್ಯವಂತ ಜೀವನ ರೂಪಿಸಿಕೊಳ್ಳಬೇಕು ಎಂದು ಗೋಣಿಕೊಪ್ಪಲು ಕಾವೇರಿ ಕಾಲೇಜು ಪ್ರಾಂಶುಪಾಲ ಡಾ. ಎಂ.ಬಿ. ಕಾವೇರಿಯಪ್ಪ ಹೇಳಿದರು.

ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ಜನ್ಮದಿನದ ಅಂಗವಾಗಿ ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಕ್ರೀಡಾ ದಿನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಪ್ರತಿಮ ದೇಶ ಭಕ್ತರಾಗಿದ್ದ ಧ್ಯಾನ್‌ಚಂದ್, ಸ್ವಾತಂತ್ರ್ಯ ಪೂರ್ವದಲ್ಲೇ ಭಾರತಕ್ಕೆ ಮೂರು ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕವನ್ನು ಗೆದ್ದುತಂದು ಸಾಧನೆ ತೋರಿದ್ದರು. ಕ್ರೀಡಾ ಇತಿಹಾಸದಲ್ಲಿ ಭಾರತ ಮಿನುಗುವಂತೆ ಮಾಡಿದ್ದರು ಎಂದು ಸ್ಮರಿಸಿದರು.
ಯಾವುದೇ ಸೌಕರ್ಯ ಇಲ್ಲದ ಸಂದರ್ಭದಲ್ಲಿ ಧ್ಯಾನ್ ಚಂದ್ ಅವರು ಬೆಳದಿಂಗಳ ರಾತ್ರಿಯಲ್ಲಿ ಹಾಕಿ ಆಟವನ್ನು ಅಭ್ಯಾಸ ಮಾಡುತ್ತಿದ್ದರು. ಇದು ಯುವಜನರಿಗೆ ಮಾದರಿಯಾಗಬೇಕು ಎಂದರು. ದೈನಂದಿನ ಜೀವನದಲ್ಲಿ ದೈಹಿಕವಾಗಿ ಸಕ್ರಿಯವಾಗಿರುವಂತೆ ಪ್ರೇರೇಪಿಸುವುದೇ
ಕ್ರೀಡಾ ದಿನದ ಪ್ರಮುಖ ಗುರಿಯಾಗಿದೆ ಎಂದವರು ಹೇಳಿದರು. ದೈಹಿಕ ಶಿಕ್ಷಣ ನಿರ್ದೇಶಕ ಡಾ. ಚನ್ನಪ್ಪ ಮಾತನಾಡಿದರು.
ರಾಷ್ಟ್ರೀಯ ಹಾಕಿ ಆಟಗಾರ್ತಿ, ಪೊನ್ನಂಪೇಟೆ ಕ್ರೀಡಾ ವಸತಿ ನಿಲಯದ ಹಾಕಿ ತರಬೇತುದಾರರಾಗಿರುವ ಕಡಗದಾಳು ಮುಕ್ಕಾಟಿರ ಕಾವ್ಯಾ ದೇವಯ್ಯ ಅವರನ್ನು ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ವಿವಿಧ ಮನರಂಜನಾ ಕ್ರೀಡೆಗಳನ್ನು ಏರ್ಪಡಿಸಲಾಗಿತ್ತು. ಉಪಪ್ರಾಂಶುಪಾಲರಾದ ಪ್ರೊ. ಎಂ. ಎಸ್. ಭಾರತಿ, ಕಾವೇರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಪ್ರೊ. ಎಸ್. ಎಸ್. ಮಾದಯ್ಯ, ಐಕ್ಯೂಎಸಿ ಸಂಚಾಲಕಿ ಡಾ. ನಯನಾ ತಮ್ಮಯ್ಯ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕಿ ಕೆ.ಎ. ಕವಿತಾ, ದೈಹಿಕ ಶಿಕ್ಷಣ ನಿರ್ದೇಶಕ ಎಂ.ಟಿ. ಸಂತೋಷ್, ಹಾಕಿ ತರಬೇತುದಾರ ಮಿನ್ನಂಡ ಜೋಯಪ್ಪ, ಕ್ರೀಡಾ ಸಮಿತಿ ಸದಸ್ಯರು, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಇದ್ದರು. ಕಾರ್ಯಕ್ರಮಕ್ಕೂ ಮೊದಲು ಅಥಿತಿಗಳು ಮೇಜರ್ ಧ್ಯಾನ್ ಚಂದ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net