ನೀರಿನ ಸಮಸ್ಯೆ ಉಂಟಾಗದಂತೆ ಕ್ರಮ ವಹಿಸಿ

ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಅಧ್ಯಕ್ಷತೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತ ಕುಶಾಲನಗರ ತಾಲೂಕು ಟಾಸ್ಕ್ ಫೋರ್ಸ್ ಸಭೆ ನಡೆಯಿತು. ವಿ.ಪಿ. ಶಶಿಧರ್, ಪರಮೇಶ್‌ಕುಮಾರ್, ಅಬ್ದುಲ್ ನಭಿ, ಕಿರಣ್ ಜಿ. ಗೌರಯ್ಯ ಇದ್ದರು.
ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಅಧ್ಯಕ್ಷತೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತ ಕುಶಾಲನಗರ ತಾಲೂಕು ಟಾಸ್ಕ್ ಫೋರ್ಸ್ ಸಭೆ ನಡೆಯಿತು. ವಿ.ಪಿ. ಶಶಿಧರ್, ಪರಮೇಶ್‌ಕುಮಾರ್, ಅಬ್ದುಲ್ ನಭಿ, ಕಿರಣ್ ಜಿ. ಗೌರಯ್ಯ ಇದ್ದರು.
Published on
ಕುಶಾಲನಗರ : ಬೇಸಿಗೆಕಾಲ ಆರಂಭವಾಗಿರುವುದರಿಂದ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ಬುಧವಾರ ನಡೆದ ಕುಡಿಯುವ ನೀರಿನ ಸಮಸ್ಯೆ ಕುರಿತ ಟಾಸ್ಕ್ ಫೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದೀಗ ಬೇಸಿಕಾಲ ಶುರುವಾಗಿದ್ದು ಜೀವನದಿ ಕಾವೇರಿ ಮತ್ತು ಹಾರಂಗಿ ನದಿಗಳಲ್ಲಿ ದಿನದಿಂದ ದಿನಕ್ಕೆ ನೀರು ಕಡಿಮೆ ಆಗುತ್ತಿರುವುದು ಕಂಡು ಬಂದಿದೆ. ಹಾಗಾಗಿ ಈ ವ್ಯಾಪ್ತಿಯ ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು ಎಂದರು.
ಕೊಳವೆ ಬಾವಿ ರಿಪೇರಿ ಆದಾಗ ಮತ್ತು ವಿದ್ಯುತ್ ಕಡಿತಗೊಂಡಾಗ ಸ್ವಲ್ಪ ಸಮಸ್ಯೆ ಆಗಬಹುದು. ಇಂಥ ಸಂದರ್ಭಗಳಲ್ಲಿ ತುರ್ತಾಗಿ ನೀರಿನ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕು. ಪಂಚಾಯಿತಿ ವ್ಯಾಪ್ತಿಯಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಿ ಹಣ ಮಾಡುವ ದಂಧೆ ನಡೆಯುತ್ತಿದೆ. ಈ ರೀತಿಯಲ್ಲಿ ಹಣ ಮಾಡಲು ಅವಕಾಶ ಕೊಡಬಾರದು. ಇದರ ಬದಲು ಒಂದು ತಿಂಗಳೊಳಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಪಂಚಾಯಿತಿ ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದರು.
ಬೋರ್‌ವೆಲ್ ನಿಂದ ಸರಬರಾಜು:
ತಾಲೂಕಿನ ಪ್ರತಿ ಗ್ರಾಮ ಪಂಚಾಯತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಪಿಡಿಒ ಹಾಗೂ ಕಾರ್ಯದರ್ಶಿಗಳಿಂದ ಮಾಹಿತಿ ಪಡೆದುಕೊಂಡರು. ನೆಲ್ಲಿಹುದಿಕೇರಿ 2, 3ನೇ ಬ್ಲಾಕ್ ನಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಖಾಸಗಿ ವ್ಯಕ್ತಿಗಳ ಬೋರ್‌ವೆಲ್ ನಿಂದ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಪಂಚಾಯತಿ ಕಾರ್ಯದರ್ಶಿ ಪ್ರವೀಣ್ ತಿಳಿಸಿದರು. ಪಂಚಾಯತಿ ಬೋರ್‌ವೆಲ್ ಪಕ್ಕ 50 ಮೀಟರ್ ಅಂತರದಲ್ಲಿ ಹೇಗೆ ಖಾಸಗಿಯವರಿಗೆ ಬೋರ್‌ವೆಲ್ ಕೊರೆಸಲು ಅನುಮತಿ ಕೊಟ್ಟಿರಿ ಎಂದು ಈ ವೇಳೆ ಶಾಸಕರು ಪ್ರಶ್ನಿಸಿದರು. ನೀರಿನ ಸಮಸ್ಯೆ ಆಗದಂತೆ ಪಂಚಾಯತಿ ವ್ಯಾಪ್ತಿಯಲ್ಲಿ ಹೊಸದಾಗಿ ಬೋರ್‌ವೆಲ್ ಕೊರೆಸಲು ಕ್ರಮ ಕೈಗೊಳ್ಳಬೇಕು ಎಂದು ತಾಲೂಕು ಪಂಚಾಯಿತಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
*
ಜಲಜೀವನ್ ಮಿಷನ್ ವಿಫಲವಾಗಿದೆ
ಗ್ರಾಮೀಣ ನೀರು ಪೂರೈಕೆ ಇಲಾಖೆ ಮತ್ತು ಸೆಸ್ಕ್ ಎಂಜಿನಿಯರ್‌ಗಳ ಕಾರ್ಯವೈಖರಿ ಬಗ್ಗೆ ಶಾಸಕರು ಈ ಸಭೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ ಜಲಜೀವನ್ ಮಿಷನ್ ಸಂಪೂರ್ಣ ವಿಫಲವಾಗಿದೆ. ಆದರೆ ಹರ್ ಘರ್ ಜಲ್ ಎಂದುಕೊಂಡು ಎಂಪಿ ಹೇಳುತ್ತಿದ್ದಾರೆ. ಇಲ್ಲಿ ನೋಡಿದರೆ ಏನೂ ಆಗಿಲ್ಲ ಎಂದರು.
ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್ ಮಾತನಾಡಿ, ತಾಲೂಕಿನಲ್ಲಿ ಹೊಸದಾಗಿ 18 ಬೋರ್‌ವೆಲ್ ಬೇಕಾಗಿದೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕುಡಿಯುವ ನೀರಿನ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಬೇಕು. ಶನಿವಾರ, ಭಾನುವಾರ ಸೇರಿದಂತೆ ರಜಾದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುತ್ತದೆ. ಪಿಡಿಒ ಅವರ ಮೊಬೈಲ್‌ಗೆ ರಜೆ ಇಲ್ಲ. ಕರೆ ಬಂದ ತಕ್ಷಣ ಸ್ಪಂದಿಸಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕು. ಸಣ್ಣ ಪುಟ್ಟ ರಿಪೇರಿ ಕಾರ್ಯಗಳನ್ನು ತುರ್ತಾಗಿ ನಿರ್ವಹಿಸಬೇಕು. ಹೆಚ್ಚುವರಿಯಾಗಿ ಬೊರೆವೆಲ್ ಮೋಟಾರ್ ಖರೀದಿಸಿ ಇಟ್ಟುಕೊಳ್ಳಬೇಕು. ಸಮಸ್ಯೆ ಬಂದಾಗ ಪರದಾಟ ಆಗಬಾರದು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿದ್ಯುತ್ ಸಂಪರ್ಕ ಕಲ್ಪಿಸುತ್ತೇವೆ:
ಗ್ರಾಮೀಣ ಕುಡಿಯುವ ನೀರು ಯೋಜನೆ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ವೀರೇಂದ್ರ ಮಾತನಾಡಿ, ಪಂಚಾಯಿತಿ ವ್ಯಾಪ್ತಿಯಲ್ಲಿ ಹೊಸ ಬೋರ್‌ವೆಲ್ ಕೊರೆಸಲು ಕ್ರಮ ಕೈಗೊಳ್ಳುತ್ತೇವೆ ಎಂದರು. ಸೆಸ್ಕ್ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮಂಜುನಾಥ್ ಮಾತನಾಡಿ, ಎಲ್ಲಾ ಹೊಸ ಕೊಳವೆ ಬಾವಿಗಳಿಗೆ ಅಗತ್ಯ ವಿದ್ಯುತ್ ಸಂಪರ್ಕ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಹದ್ದುಬಸ್ತ್ ಮಾಡಿಕೊಳ್ಳಿ:
ತಾಲೂಕಿನ ಪಂಚಾಯಿತಿ ವ್ಯಾಪ್ತಿಯಲ್ಲಿ ಲಭ್ಯವಿರುವ ಪೈಸಾರಿ, ಸರ್ಕಾರಿ ಜಾಗವನ್ನು ಗುರುತಿಸಿ ಹದ್ದುಬಸ್ತ್ ಮಾಡಿಕೊಳ್ಳಲು ಪಿಡಿಒ ಅವರು ಕ್ರಮ ಕೈಗೊಳ್ಳಬೇಕು. ಸಿಎಂ ವಿವೇಚನ ನಿಧಿಯಲ್ಲಿ ಒಂದು ಎಕರೆಗೆ ಬಡಾವಣೆ ಅಭಿವೃದ್ಧಿಗೆ 35 ಲಕ್ಷ ರೂ. ಅನುದಾನ ನೀಡಲಾಗುತ್ತದೆ ಎಂದು ಶಾಸಕರು ಇದೇ ಸಂದರ್ಭ ಹೇಳಿದರು. ಗುಡ್ಡೆಹೊಸೂರಿನಲ್ಲಿ ಹತ್ತು ಎಕರೆ, ಕೂಡುಮಂಗಳೂರು ಹಾಗೂ ಕಂಬಿಬಾಣೆ 10.5 ಎಕರೆ ಸೇರಿದಂತೆ ಇತರ ಪಂಚಾಯತಿಯಲ್ಲಿರುವ ಜಾಗವನ್ನು ಗುರುತಿಸಿ ಬಡಾವಣೆಯಾಗಿ ಅಭಿವೃದ್ಧಿಪಡಿಸಿ ವಸತಿ ರಹಿತರಿಗೆ ನಿವೇಶನ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ತಹಸೀಲ್ದಾರ್ ಕಿರಣ್ ಜಿ. ಗೌರಯ್ಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ತಾಲೂಕು ಪಂಚಾಯತಿ ಆಡಳಿತಾಧಿಕಾರಿ ಅಬ್ದುಲ್ ನಭಿ, ಪುರಸಭೆ ಮುಖ್ಯಾಧಿಕಾರಿ ಟಿ.ಎಸ್. ಗಿರೀಶ್, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಕೋಟ್:
ಬೇಸಿಗೆಕಾಲ ಆರಂಭವಾಗಿದೆ. ನದಿಗಳಲ್ಲಿ ನೀರಿನ ಹರಿವು ಕಡಿಮೆ ಆಗುತ್ತಿರುವ ಲಕ್ಷಣಗಳು ಕಾಣುತ್ತಿದೆ. ಹಾಗಾಗಿ ತಾಲೂಕಿನಾದ್ಯಂತ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಕೊಳವೆ ಬಾವಿ ರಿಪೇರಿ ಆದಾಗ ಮತ್ತು ವಿದ್ಯುತ್ ಕಡಿತಗೊಂಡಾಗಲೂ ಸಮಸ್ಯೆ ಆಗದಂತೆ ತುರ್ತಾಗಿ ಸ್ಪಂದಿಸಬೇಕು. ನೀರಿನ ಸಮಸ್ಯೆ ಇದ್ದಲ್ಲಿ ಒಂದು ತಿಂಗಳೊಳಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು.
ಡಾ. ಮಂತರ್ ಗೌಡ
ಮಡಿಕೇರಿ ಶಾಸಕ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net