ಧ್ವನಿವರ್ಧಕ ಬಳಕೆ ವಿರುದ್ಧ ಎಚ್ಚರಿಕೆ

 ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್
ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್
Published on
ಮಡಿಕೇರಿ:
ಕೊಡಗು ಜಿಲ್ಲೆಯಾದ್ಯಂತ ಸಾರ್ವಜನಿಕ ಶಾಂತಿ, ಸುವ್ಯವಸ್ಥೆ ಹಾಗೂ ಸಾರ್ವಜನಿಕರ ಹಿತಾಸಕ್ತಿಯನ್ನು ಕಾಪಾಡುವ ದೃಷ್ಟಿಯಿಂದ ಧ್ವನಿವರ್ಧಕಗಳ ಬಳಕೆಯನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ. ಸೋಮಶೇಖರ್ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ನಡೆಯುವ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ನಿಯಮಬಾಹಿರವಾಗಿ ಹಾಗೂ ಶಬ್ದ ಮಾಲಿನ್ಯ ಉಂಟುಮಾಡುವ ರೀತಿಯಲ್ಲಿ ಧ್ವನಿವರ್ಧಕಗಳನ್ನು ಬಳಸುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಬಗ್ಗೆ ಜಿಲ್ಲಾ ಪೊಲೀಸ್ ಅಧೀಕ್ಷಕರು ಸಲ್ಲಿಸಿದ ವರದಿಯನ್ವಯ ಈ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.
ಪರಿಸರ ಸಂರಕ್ಷಣಾ ಕಾಯ್ದೆ-1986, ಶಬ್ದ ಮಾಲಿನ್ಯ (ನಿಯಂತ್ರಣ ಮತ್ತು ಕಂಟ್ರೋಲ್) ನಿಯಮಗಳು-2000, ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 35 ಹಾಗೂ ಬಿಎನ್‌ಎಸ್‌ಎಸ್ 2023ರ ಕಲಂ 163ರ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಬಳಸಿ ಈ ಆದೇಶ ಜಾರಿಗೊಳಿಸಲಾಗಿದೆ. ಸುಪ್ರೀಂ ಕೋರ್ಟ್ ತೀರ್ಪು ಹಾಗೂ ಸರ್ಕಾರದ ಸುತ್ತೋಲೆಯಂತೆ ನಿಗದಿತ ಡೆಸಿಬಲ್ ಮಿತಿಗಿಂತ ಹೆಚ್ಚು ಶಬ್ದ ಹೊರಡಿಸುವ ಧ್ವನಿವರ್ಧಕಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ರಾತ್ರಿ 10 ಗಂಟೆಯಿAದ ಬೆಳಗ್ಗೆ 6 ಗಂಟೆಯ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ. ಹಗಲಿನ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಬಳಸಲು ಇಚ್ಛಿಸುವ ಸಾರ್ವಜನಿಕರು, ಆಯೋಜಕರು ಅಥವಾ ಸಂಘ-ಸAಸ್ಥೆಗಳು ಸಂಬAಧಪಟ್ಟ ಸಕ್ಷಮ ಪ್ರಾಧಿಕಾರದಿಂದ ಕಡ್ಡಾಯವಾಗಿ ಲಿಖಿತ ಪೂರ್ವಾನುಮತಿ ಪಡೆಯಬೇಕು. ಈ ಆದೇಶವನ್ನು ಉಲ್ಲಂಘಿಸಿ ಶಬ್ದ ಮಾಲಿನ್ಯ ಉಂಟುಮಾಡುವ ಉಪಕರಣಗಳನ್ನು ಬಳಸಿದ್ದಲ್ಲಿ, ಅಂತಹ ಧ್ವನಿವರ್ಧಕಗಳನ್ನು ತಕ್ಷಣವೇ ಮುಟ್ಟುಗೋಲು ಹಾಕಿಕೊಂಡು ಸಂಬAಧಪಟ್ಟವರ ವಿರುದ್ಧ ಕಾನೂನು ರೀತ್ಯ ಕಠಿಣ ಕ್ರಮ ಜರುಗಿಸಲು ಪೊಲೀಸ್ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಜಿಲ್ಲಾಧಿಕಾರಿಗಳು ಸ್ಪಷ್ಟ ಸೂಚನೆ ನೀಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net