ಗ್ರಾಮೀಣ ಭಾಗದ ಜನರ ಮನಸ್ಸು ಗೆಲ್ಲಿ

ಕೊಡ್ಲಿಪೇಟೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ಶಿಬಿರವನ್ನು ಗಣ್ಯರು ಉದ್ಘಾಟಿಸಿದರು. ಚಂದ್ರಮೌಳಿ, ವಸಂತ್, ಮಮತಾ ಇತರರು ಇದ್ದರು.
ಕೊಡ್ಲಿಪೇಟೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ಶಿಬಿರವನ್ನು ಗಣ್ಯರು ಉದ್ಘಾಟಿಸಿದರು. ಚಂದ್ರಮೌಳಿ, ವಸಂತ್, ಮಮತಾ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಕೊಡ್ಲಿಪೇಟೆ ವಿದ್ಯಾಸಂಸ್ಥೆ ಅಧ್ಯಕ್ಷ ಎಚ್.ಎಸ್ ಚಂದ್ರಮೌಳಿ ಕಿವಿಮಾತು
  • ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ಶಿಬಿರ
ಶನಿವಾರಸಂತೆ: ಗ್ರಾಮೀಣ ಪ್ರದೇಶಗಳಲ್ಲಿ ಜಾಗೃತಿ ಮೂಡಿಸುವುದರ ಜತೆಗೆ ಜನರ ಮನಸ್ಸು ಗೆಲ್ಲುವ ಮೂಲಕ ಸಮಾಜಕ್ಕೆ ಮಾದರಿಯಾಗಿ ಎಂದು ಕೊಡ್ಲಿಪೇಟೆ ವಿದ್ಯಾಸಂಸ್ಥೆ ಅಧ್ಯಕ್ಷ ಎಚ್.ಎಸ್ ಚಂದ್ರಮೌಳಿ ಕಿವಿಮಾತು ಹೇಳಿದರು.
ಕೊಡ್ಲಿಪೇಟೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕೊಡ್ಲಿಪೇಟೆ ಹಲಸಿನಮರ ಗೌರಮ್ಮ ಶಾಂತಮಲ್ಲಪ್ಪ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಬುಧವಾರ ಆಯೋಜಿಸಿರುವ ವಾರ್ಷಿಕ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ನಡೆ-ನುಡಿಗಳನ್ನು ತಿದ್ದಿಕೊಳ್ಳಲು ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರ ಉತ್ತಮ ವೇದಿಕೆಯಾಗಿದೆ. ಶಿಬಿರಾರ್ಥಿಗಳು ವಿವಿಧ ಶ್ರಮದಾನ ಕಾರ್ಯ ಮಾಡುವುದರ ಜತೆಗೆ ಸಾಮಾಜಿಕ ಪಿಡುಗುಗಳ ಬಗ್ಗೆ ಗ್ರಾಮಸ್ಥರಿಗೆ ಅರಿವು ಮೂಡಿಸಬೇಕು ಎಂದರು.
ವಿದ್ಯಾಸಂಸ್ಥೆ ನಿರ್ದೇಶಕ ಬಿ.ಕೆ.ಯತೀಶ್ ಮಾತನಾಡಿ, ಗಾಂಧೀಜಿ ಅವರ ಗ್ರಾಮ ಉದ್ಧಾರ, ಸ್ವಚ್ಛತೆ, ಜನ ಜಾಗೃತಿ, ವ್ಯಕ್ತಿತ್ವ ವಿಕಸನ ಮುಂತಾದ ಪರಿಕಲ್ಪನೆಯಂತೆ ಪದವಿ ಕಾಲೇಜು ಮಟ್ಟದಲ್ಲಿ 1969ರಲ್ಲಿ ಸ್ಥಾಪಿತವಾದ ರಾಷ್ಟ್ರೀಯ ಸೇವಾ ಯೋಜನೆಗೆ 57 ವರ್ಷಗಳು ತುಂಬಿದೆ. ಪಠ್ಯೇತರ ಚಟುವಟಿಕೆಗಳಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಒಂದಾಗಿದ್ದು, ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಕಾಲೇಜು ಪ್ರಾಂಶುಪಾಲ ಎಂ.ಆರ್.ನಿರಂಜನ್ ಮಾತನಾಡಿ, ವಿದ್ಯಾರ್ಥಿಗಳ ಸಮಸ್ಯೆ ನಿವಾರಣೆಗೆ ಹಾಗೂ ವಿಚಾರಗಳ ಅನುಭವಗಳಿಗೆ ರಾಷ್ಟ್ರೀಯ ಸೇವಾ ಯೋಜನೆ ಶಿಬಿರ ದಾರಿದೀಪವಾಗಿದೆ. ವಿದ್ಯಾರ್ಥಿಗಳ ಮನಪರಿವರ್ತನೆ ಆಗಲು, ಸಮಾನತೆ, ಸಹಬಾಳ್ವೆ ಮುಂತಾದ ವಿಚಾರಗಳನ್ನು ತಿಳಿದುಕೊಳ್ಳಲು ಶಿಬಿರ ಸಹಕಾರಿಯಾಗುತ್ತದೆ. ಈ ನಿಟ್ಟಿನಲ್ಲಿ ಶಿಬಿರಾರ್ಥಿಗಳು ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ವಸಂತ್, ಉಪಾಧ್ಯಕ್ಷೆ ಮಮತಾ ರಮೇಶ್, ಮುಖ್ಯ ಶಿಕ್ಷಕ ಅಬ್ದುಲ್ ರಬ್, ಪದವಿ ಪೂರ್ವ ಕಾಲೇಜ್ ಪ್ರಾಂಶುಪಾಲ ಸೋಮಶೇಖರ್, ಸುಶೀಲಾ , ಶಿಬಿರಾಧಿಕಾರಿ ಕೆ.ಎಚ್.ಯೋಗೇಂದ್ರ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net