ಗ್ಯಾರಂಟಿ ಯೋಜನೆ ತಲುಪಿಸಲು ಜವಾಬ್ದಾರಿಯಿಂದ ಕೆಲಸ ಮಾಡಿ

ಸೋಮವಾರಪೇಟೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸಭೆಯಲ್ಲಿ ಅಧಿಕಾರಿಗಳು  ಇಲಾಖೆ ಪ್ರಗತಿ ಮಾಹಿತಿ ನೀಡಿದರು.
ಸೋಮವಾರಪೇಟೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸಭೆಯಲ್ಲಿ ಅಧಿಕಾರಿಗಳು ಇಲಾಖೆ ಪ್ರಗತಿ ಮಾಹಿತಿ ನೀಡಿದರು.
Published on

ಪ್ರಮುಖ ಮುಖ್ಯಾಂಶಗಳು

  • ಅಧಿಕಾರಿಗಳಿಗೆ ಅನುಷ್ಠಾನ ಸಮಿತಿ ಅಧ್ಯಕ್ಷ ಜಿ.ಎಂ.ಕಾಂತರಾಜ್ ಸಲಹೆ
ಸೋಮವಾರಪೇಟೆ: ಗ್ಯಾರಂಟಿ ಯೋಜನೆಯ ಎಲ್ಲ ಪ್ರಯೋಜನಗಳು ಫಲಾನುಭವಿಗಳಿಗೆ ದೊರೆಯಬೇಕಾದರೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಅರಿತು ಕೆಲಸ ಮಾಡಬೇಕಾಗಿದೆ ಎಂದು ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಜಿ.ಎಂ.ಕಾಂತರಾಜ್ ಹೇಳಿದರು.
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಸೋಮವಾರಪೇಟೆ ತಾಲೂಕು ಗ್ಯಾರಂಟಿ ಯೋಜನೆ ಸಮಿತಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಅಧಿಕಾರಿಗಳು ಯೋಜನೆಗಳ ಕುರಿತು ಸಮರ್ಪಕ ಮಾಹಿತಿ ನೀಡಬೇಕು. ಯುವನಿಧಿ ಯೋಜನೆಗೆ ಸಂಬಂಧಿಸಿದಂತೆ ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಖುದ್ದಾಗಿ ಕಾಲೇಜುಗಳಿಗೆ ತೆರಳಿ ವಿದ್ಯಾರ್ಥಿಗಳಿಗೆ ಯೋಜನೆಯ ಕುರಿತು ಮನವರಿಕೆ ಮಾಡಬೇಕು ಎಂದು ತಿಳಿಸಿದರು.
ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದ ಪ್ರಗತಿಯನ್ನು ಶೀಘ್ರದಲ್ಲಿಯೇ ಕಳುಹಿಸಿಕೊಡಬೇಕೆಂದು ಸೂಚನೆ ನೀಡಿದರು. ತಾಲೂಕಿನಲ್ಲಿ ಎಪಿಎಲ್ ಆಗಿ ಪರಿವರ್ತನೆಯಾದ 1032 ಪಡಿತರ ಚೀಟಿಗಳ ಪೈಕಿ 267 ಅರ್ಜಿದಾರರು ಬಿಪಿಎಲ್ ಪಡಿತರ ಚೀಟಿ ಪಡೆಯಲು ಅರ್ಹರೆಂದು ಸಲ್ಲಿಸಿರುವ ಅರ್ಜಿಯನ್ನು ಸ್ವೀಕರಿಸಲಾಗಿದ್ದು, ಇದರ ಪೈಕಿ ಈಗಾಗಲೇ 192 ಅರ್ಜಿಗಳ ಸ್ಥಳ ಪರಿಶೀಲನೆ ನಡೆಸಲಾಗಿದೆ. ಅರ್ಹರೆಂದು ಕಂಡು ಬಂದ ಪ್ರಕರಣಗಳನ್ನು ಮರುಸ್ಥಾಪಿಸುವ ಸಂಬಂಧ ಇಲಾಖೆಯ ಜಿಲ್ಲಾ ಅಧಿಕಾರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಆಹಾರ ನಿರೀಕ್ಷಕಿ ಯಶಸ್ವಿನಿ ಸಭೆಗೆ ತಿಳಿಸಿದರು.
ಲೈನ್‌ಮನೆ ಮತ್ತು ತೋಟದ ಮನೆಗಳನ್ನು ಹೊಂದಿರುವ ವಿದ್ಯುತ್ ಗ್ರಾಹಕರು ವರ್ಷದಲ್ಲಿ ಕೇವಲ ಮೂರು ಅಥವಾ ನಾಲ್ಕು ತಿಂಗಳು ಮಾತ್ರ ವಾಸ ಮಾಡುತ್ತಿರುವುದರಿಂದ ಅಂತಹ ಮನೆಗಳಿಗೆ ಗೃಹಜ್ಯೋತಿ ಯೋಜನೆಯಡಿ ನೋಂದಾಯಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಸೆಸ್ಕ್ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಸಭೆಗೆ ತಿಳಿಸಿದರು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಘಟಕ ವ್ಯವಸ್ಥಾಪಕರು ಇಂದಿನ ಸಭೆಗೆ ಹಾಜರಾಗದೆ ಇರುವ ಕುರಿತು ಸಮಿತಿ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು. ವಾಹನ ಚಾಲಕರು ಮತ್ತು ನಿರ್ವಾಹಕರು ಪ್ರಯಾಣಿಕರೊಂದಿಗೆ ಸಭ್ಯತೆಯಿಂದ ವರ್ತಿಸಲು ಜಾಗೃತಿ ಕಾರ್ಯಕ್ರಮದ ಅವಶ್ಯಕತೆ ಇದೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ್‌ಕುಮಾರ್ ಅಧ್ಯಕ್ಷರಿಗೆ ಮನವಿ ಮಾಡಿದರು.
ಗೃಹಲಕ್ಷ್ಮಿ ಯೋಜನೆಯ ಮೊತ್ತವು ಫಲಾನುಭವಿಗಳ ಖಾತೆಗೆ ನವಂಬರ್ 2025ರವರೆಗೆ ಪಾವತಿಯಾಗಿದ್ದು, ಡಿಸೆಂಬರ್‌ನಿಂದ 2026ರ ಫೆಬ್ರವರಿಯವರೆಗೆ ಬಾಕಿ ಇರುವ ಕಂತುಗಳ ಹಣ ಪಾವತಿ ಪ್ರಕ್ರಿಯೆಯಲ್ಲಿದೆ ಎಂದು ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿ ಶ್ರೀದೇವಿ ಸಭೆಗೆ ತಿಳಿಸಿದರು.
ಸಭೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್, ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರು ಹಾಗೂ ಇಲಾಖಾಧಿಕಾರಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net