

ಸೋಮವಾರಪೇಟೆ: ನಂದಿನಿ ಹಾಲು ಹಾಗೂ ಹಾಲಿನ ಉತ್ಪನ್ನಗಳು ಮತ್ತು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ಸೋಮವಾರಪೇಟೆ ಪಟ್ಟಣದ ಪುಟ್ಟಪ್ಪ ವೃತ್ತದಲ್ಲಿ ಜೆಡಿಎಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭ ಮಾತನಾಡಿದ ಜೆಡಿಎಸ್ ತಾಲೂಕು ಅಧ್ಯಕ್ಷ ನಾಗರಾಜು, ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಅಗತ್ಯ ವಸ್ತುಗಳ ಬೆಲೆಗಳನ್ನು ನಿರಂತರವಾಗಿ ಹೆಚ್ಚಿಸುತ್ತಿದೆ. ಇದರಿಂದ ರೈತರು, ಕೂಲಿ ಕಾರ್ಮಿಕರು ಹಾಗೂ ಜನಸಾಮಾನ್ಯರು ಜೀವನ ನಿರ್ವಹಣೆ ಮಾಡಲು ಸಂಕಷ್ಟ ಎದುರಿಸುವಂತಾಗಿದೆ ಎಂದು ಆರೋಪಿಸಿದರು.
ಸಕ್ಕರೆ, ಅಕ್ಕಿ, ವಿದ್ಯುತ್, ಹಾಲು, ಮೊಸರು, ಬೆಣ್ಣೆ, ತುಪ್ಪ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಅಬಕಾರಿ ಸುಂಕ ಮತ್ತು ಬಸ್ ಪ್ರಯಾಣ ದರ ಹೆಚ್ಚಳದಿಂದ ಜನಸಾಮಾನ್ಯರ ಬದುಕು ದುಸ್ತರವಾಗಿದೆ. ಅವೈಜ್ಞಾನಿಕ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಸರ್ಕಾರದ ಖಜಾನೆ ಖಾಲಿ ಮಾಡಲಾಗಿದ್ದು, ರೈತರ ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ ನೀಡದೆ, ಕೋಟ್ಯಂತರ ರೂಪಾಯಿಗಳನ್ನು ಜಾಹೀರಾತುಗಳಿಗೆ ವ್ಯಯಿಸಲಾಗುತ್ತಿದೆ ಎಂದು ದೂರಿದರು.
ಬರಗಾಲದ ಸಂದರ್ಭದಲ್ಲಿ ರೈತರಿಗೆ ಸೂಕ್ತ ಪರಿಹಾರ ನೀಡದೆ ಕೇವಲ ಭರವಸೆಗಳನ್ನು ನೀಡಲಾಗುತ್ತಿದೆ. ಅನಗತ್ಯ ರಾಜಕೀಯ ಚಟುವಟಿಕೆಯಲ್ಲಿ ಸರ್ಕಾರ ಕಾಲಹರಣ ಮಾಡುತ್ತಿರುವುದರಿಂದ ರಾಜ್ಯದ ಆರ್ಥಿಕ ಪ್ರಗತಿಗೆ ಹಿನ್ನಡೆಯಾಗಿದೆ ಎಂದು ಟೀಕಿಸಿದರು. ಪಂಚ ಗ್ಯಾರಂಟಿ ಯೋಜನೆಗಳನ್ನು ಮರುಪರಿಶೀಲಿಸಿ, ಪಶು ಆಹಾರಕ್ಕೆ ಸಬ್ಸಿಡಿ ನೀಡುವ ಮೂಲಕ ರೈತರಿಗೆ ನೆರವಾಗಬೇಕು ಎಂದು ಒತ್ತಾಯಿಸಿದರು.
ಜೆಡಿಎಸ್ ಮುಖಂಡ ಹೊಸಬಿಡು ಹೂವಯ್ಯ ಮಾತನಾಡಿ, ರಾಜ್ಯ ಸರ್ಕಾರ ಕೂಡಲೇ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು. ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಬೆಲೆ ಹಾಗೂ ಸಾರಿಗೆ ಸಂಸ್ಥೆಯ ಬಸ್ ಪ್ರಯಾಣ ದರವನ್ನು ಕಡಿಮೆ ಮಾಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯ ಬಳಿಕ ತಹಶೀಲ್ದಾರ್ ಕೃಷ್ಣಮೂರ್ತಿ ಅವರಿಗೆ ಮನವಿ ಸಲ್ಲಿಸಲಾಯಿತು. ಕೊಡಗು ಜಿಲ್ಲಾ ಜೆಡಿಎಸ್ ವಕ್ತಾರ ಆದರ್ಶ್ ತಮ್ಮಯ್ಯ, ಮುಖಂಡರಾದ ಜಯನಂದ, ಮಂದಣ್ಣ, ಪ್ರವೀಣ್, ಸ್ವಾಗತ್ ಕುಶಾಲಪ್ಪ, ಸಂದೀಪ್ ಕೂಗೂರು, ಆಲಿದ್ ಪಾಷ, ಪಿ.ಕೆ. ವಿಜೇಶ್, ಪುಟ್ಟರಾಜು, ಸುರೇಶ್ ಮಸಗೋಡು, ವಿನಯ್ ಕುಶಾಲಪ್ಪ ಸೇರಿದಂತೆ ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.