

ಸೋಮವಾರಪೇಟೆ: ಸಮೀಪದ ಶಾಂತಳ್ಳಿ ಹೋಬಳಿಯ ನಗರಳ್ಳಿ ಗ್ರಾಮದ ಐತಿಹಾಸಿಕ ಕೂತಿನಾಡು ಸುಗ್ಗಿ ಉತ್ಸವ ಅಪಾರ ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ಸೋಮವಾರ ಶ್ರದ್ಧಾಭಕ್ತಿಯಿಂದ ನೆರವೇರಿತು.
ಕೂತಿನಾಡಿಗೆ ಸೇರಿದ 18 ಗ್ರಾಮಗಳ ನಿವಾಸಿಗಳು ನಗರಳ್ಳಿ ಸುಗ್ಗಿಕಟ್ಟೆಯಲ್ಲಿ ಸೇರಿ ಗ್ರಾಮ ದೇವತೆ ಸಬ್ಬಮ್ಮ ದೇವಿಗೆ ಸಾಂಪ್ರದಾಯಿಕ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು.
ಗ್ರಾಮದೇವತೆ ಸಬ್ಬಮ್ಮ ದೇವಿಗೆ 15ದಿನಗಳ ಕಾಲ ವಿಶೇಷ ಪೂಜೆ ಸಲ್ಲಿಸಿ, ಗ್ರಾಮ ಸುಭೀಕ್ಷೆಗೆ ಪೂಜೆ ಹಾಗೂ ಮಳೆ, ಬೆಳೆ ಸಮೃದ್ಧಿಗಾಗಿ ಪ್ರಾರ್ಥನೆ ಮಾಡುವುದೇ ಸುಗ್ಗಿ ಉತ್ಸವದ ವಿಶೇಷ.
ಸೋಮವಾರ ಬೆಳಗ್ಗೆ ಸುಗ್ಗಿಬನದ ಸಮೀಪವಿರುವ ಬಿಲ್ಲ ರಂಗದಲ್ಲಿ ಪೂರ್ವಜರ ಜೀವನ ಪದ್ಧ್ದತಿಯನ್ನು ಬಿಂಬಿಸುವ ನೃತ್ಯ ಪ್ರಾಕಾರ, ಸಾಂಪ್ರದಾಯಿಕ ಕಡವೆ ಬೇಟೆಯಾಡುವ ಪ್ರಸಂಗ, ಕಡವೆಯ ಪಾತ್ರಧಾರಿಯನ್ನು ಅಟ್ಟಿಸಿಕೊಂಡು ಹೋಗುವ ಬೇಟೆಗಾರರ ತಂಡದ ಸದಸ್ಯರಿಗೆ ಕಡವೆ ಒದೆಯುವ ದೃಶ್ಯ ಮನಮೋಹಕವಾಗಿತ್ತು. ಸಾಂಪ್ರದಾಯಿಕ ಬಿಳಿ ಕುಪ್ಪಸ ದಟ್ಟಿಯನ್ನು ಧರಿಸಿದ್ದ ಗ್ರಾಮದ ಹಿರಿಯರು, ಬಿಲ್ಲರಂಗದಲ್ಲಿ ಪ್ರದರ್ಶನ ಹಾಕುತ್ತ, ಮಲೆನಾಡು ಸುಗ್ಗಿ ಇತಿಹಾಸವನ್ನು ನೆರದಿದ್ದವರಿಗೆ ತಿಳಿಸುತ್ತಿದ್ದರು.
ಸುಗ್ಗಿ ಉತ್ಸವದ ಕೊನೆ ದಿನ ಸೋಮವಾರ ಸುಗ್ಗಿ ದೇವರ ಬನದಲ್ಲಿ ಅಳವಡಿಸಲಾಗಿರುವ ಬೃಹತ್ ಕಲ್ಲಿನ ಕಂಬದಲ್ಲಿ 4 ದೇವರ ಒಡೆಕಾರರನ್ನು ಬೆತ್ತದ ಉಯ್ಯಲೆಯಲ್ಲಿ ತೂಗುವ ಮೂಲಕ ಸುಗ್ಗಿ ಉತ್ಸವಕ್ಕೆ ತೆರೆ ಬಿದ್ದಿತು.
ಸುಗ್ಗಿ ಕುಣಿತ, ಸುಗ್ಗಿಹಾಡುವುದು, ಬಿಲ್ಲು ತೂಗುವುದು ಸೇರಿದಂತೆ ವಿವಿಧ ಜಾನಪದ ನೃತ್ಯಗಳು ನಡೆದವು. 18 ಗ್ರಾಮಗಳ ನವ ದಂಪತಿಗಳು ಮದುವೆ ಕಾಣಿಕೆಯನ್ನು ಸಲ್ಲಿಸಿದರು. ಹರಕೆ ತೀರಿಸುವುದು ಮತ್ತು ಹರಕೆ ಮಾಡಿಕೊಳ್ಳುವ ಕಾರ್ಯಗಳು ನಡೆದವು. ಕೂತಿ ನಾಡು ವ್ಯಾಪ್ತಿಗೆ ಒಳಪಡುವ ಗ್ರಾಮಗಳಾದ ಕೂತಿ, ಯಡದಂಟೆ, ಕುಂದಳ್ಳಿ, ನಗರಳ್ಳಿ, ಹೆಮ್ಮನಗದ್ದೆ, ಕನ್ನಳ್ಳಿ, ಬೀಕಳ್ಳಿ, ಬೆಟ್ಟದಳ್ಳಿ, ಜಕ್ಕನಳ್ಳಿ, ಬೆಟ್ಟದಕೊಪ್ಪ, ಹಳ್ಳಿಯೂರು, ಕೊತ್ತನಳ್ಳಿ, ಇನಕನಹಳ್ಳಿ, ಬೆಂಕಳ್ಳಿ, ಕುಡಿಗಾಣ, ನಾಡ್ನಳ್ಳಿ, ತಡ್ಡಿಕೊಪ್ಪ, ಓಡಳ್ಳಿ ಗ್ರಾಮಗಳ ಮುಖ್ಯಸ್ಥರು ಗ್ರಾಮದೇವತೆಗೆ ಪಟ್ಟ ಒಪ್ಪಿಸಿ, ಸಾಮೂಹಿಕ ಪೂಜೆ ನೆರವೇರಿಸಿದರು. ನಂತರ ಉತ್ತಮ ಮಳೆ ಬೆಳೆಗಾಗಿ ಪ್ರಾರ್ಥಿಸಿದರು.
ಸುಗ್ಗಿ ಕಟ್ಟೆಯ ಮುಖ್ಯ ರಂಗದಲ್ಲಿ ಈಡುಗಾಯಿ ಒಡೆಯಲಾಯಿತು. ಭಕ್ತರಿಗೆ ಅನ್ನಸಂತರ್ಪಣೆ ನೆರವೇರಿಸಲಾಯಿತು. ಸವಿನ್, ವಸಂತ್, ಇಂದ್ರೇಶ್, ಸಿಶಾಂತ್, ಶಶಿಕುಮಾರ್ ದೇವರ ಒಡೆಕಾರರಾಗಿ ಕಾರ್ಯನಿರ್ವಹಿಸಿದರು. ರಮೇಶ್, ಪ್ರಸನ್ನ, ಪ್ರಕಾಶ್ ದೇವರ ಸೇವೆ ಮಾಡಿದರು. ಉತ್ಸವದಲ್ಲಿ ಶಾಶಕ ಡಾ.ಮಂತರ್‌ಗೌಡ, ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್, ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್.ಮುತ್ತಣ್ಣ ಭಾಗವಹಿಸಿ ಗ್ರಾಮಸ್ಥರ ಸನ್ಮಾನ ಸ್ವೀಕರಿಸಿದರು. ಕೂತಿನಾಡು ಶ್ರೀ ಸಬ್ಬಮ್ಮ ದೇವರ ಸಮಿತಿ ಅಧ್ಯಕ್ಷ ಕೆ.ಬಿ.ಜಗದೀಶ್, ಉಪಾಧ್ಯಕ್ಷ ಸಿ.ಎಸ್.ಬೋಪಯ್ಯ, ಕಾರ್ಯದರ್ಶಿ ಕೆ.ಯು. ಜಗದೀಶ್, ಖಜಾಂಚಿ ಎನ್.ಬಿ.ಸುರೇಶ್ ಮತ್ತು ಗ್ರಾಮದ ಹಿರಿಯರು ಸುಗ್ಗಿಯ ಉಸ್ತುವಾರಿ ವಹಿಸಿದ್ದರು.
ಕೂತಿ ನಾಡು ಸುಗ್ಗಿಯ ವಿಶೇಷ: ಮಳೆಗಾಲ ಪ್ರಾರಂಭವಾಗಿ ಗ್ರಾಮೀಣ ಭಾಗದ ಜನರು ಕೃಷಿ ಕಾರ್ಯಗಳಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಳ್ಳುವ ಮೊದಲು ಕೃಷಿ ಕಾರ್ಯಗಳಿಗೆ ಯಾವುದೇ ತೊಂದರೆಯಾಗಬಾರದು, ಉತ್ತಮ ಮಳೆಯಾಗಿ ಗ್ರಾಮ ಸುಭೀಕ್ಷೆಯಿಂದಿರಬೇಕು, ಗ್ರಾಮದ ಕಲ್ಯಾಣಕ್ಕಾಗಿ ಗ್ರಾಮದೇವರಿಗೆ ಸಾಮೂಹಿಕವಾಗಿ ವಿಶೇಷ ಪ್ರಾರ್ಥನೆ ಸಲ್ಲಿಸುವುದಕ್ಕೆ ಸುಗ್ಗಿ ಉತ್ಸವಗಳನ್ನು ಹಿಂದಿನಿಂದಲೂ ನಡೆಸಿಕೊಂಡು ಬರಲಾಗುತ್ತಿದೆ.
ಇತಿಹಾಸ
ಸುಮಾರು 400 ವರ್ಷಗಳ ಇತಿಹಾಸವಿರುವ ಸುಗ್ಗಿ ಉತ್ಸವವನ್ನು ಈಗಲೂ ಕ್ರಮಬದ್ಧವಾಗಿ ಆಚರಿಸಿಕೊಂಡು ಬರುತ್ತಿರುವುದು ವಿಶೇಷವಾಗಿದೆ. ಗ್ರಾಮದ ನಿವಾಸಿಗಳು, ಮಹಿಳೆಯರು, ಮಕ್ಕಳು, ಹಿರಿಯರು ಉತ್ಸವದಲ್ಲಿ ಭಾಗವಹಿಸಿ ಗ್ರಾಮದೇವತೆಗೆ ಇಷ್ಟಾರ್ಥಗಳ ನೆರವೇರಿಕೆಗೆ ಪ್ರಾರ್ಥಿಸಿದರು. ಅದರಲ್ಲೂ ಕುಟುಂಬ ಸಮೇತ ತವರಿನ ಸುಗ್ಗಿಯಲ್ಲಿ ಭಾಗವಹಿಸುವುದು, ಗ್ರಾಮದ ಹೆಣ್ಣುಮಕ್ಕಳಿಗೆ ವಿಶೇಷ ದಿನ.