

ಕೊಪ್ಪಳ: ಸಂವಿಧಾನ ಸಂರಕ್ಷಣಾ ವೇದಿಕೆಯಿಂದ ಡಾ.ಅಂಬೇಡ್ಕರ್ ಜಯಂತಿ ಅಂಗವಾಗಿ ಏ.24 ರಂದು ಕುಷ್ಟಗಿಯ ಎಂ.ಐ.ಕಚೇರಿ ಮುಂಭಾಗ ಸಂವಿಧಾನ ಸಂರಕ್ಷಣಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಅಮರೇಗೌಡ ಪಾಟೀಲ್ ಬಯ್ಯಪುರ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಇದೊಂದು ಪಕ್ಷಾತೀತ ಕಾರ್ಯಕ್ರಮ. ಮಾಜಿ ಸಿಎಂ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಮಾಜಿ ಸಚಿವ ಎಚ್.ಸಿ.ಮಹಾದೇವಪ್ಪ, ಮೈಸೂರಿನ ಉರಿಲಿಂಗ ಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ, ಚಿತ್ರದುರ್ಗದ ಮಾದಾರ ಚನ್ನಯ್ಯ ಸ್ವಾಮೀಜಿ ಸೇರಿ ಅನೇಕರು ಭಾಗವಹಿಸಲಿದ್ದಾರೆ. ಕೊಪ್ಪಳ-ರಾಯಚೂರು ಹಾಗೂ ಅಕ್ಕ-ಪಕ್ಕದ ಜಿಲ್ಲೆಗಳ ಸುಮಾರು 25-30 ಸಾವಿರ ಜನರು ಭಾಗಿಯಾಗುವ ನಿರೀಕ್ಷೆ ಇದೆ ಎಂದು ತಿಳಿಸಿದರು.
ಕೆಲ ರಾಜಕಾರಣಿಗಳು ಸಂವಿಧಾನದ ಬದಲಾವಣೆ ಮಾಡುವ ಬಗ್ಗೆ ಮಾತನಾಡುತ್ತಿದ್ದಾರೆ. ಇಂಥ ಬೆಳವಣಿಗೆಗಳಿಂದ ಜನರು ತಮ್ಮ ತಮ್ಮ ಸಮುದಾಯಕ್ಕೆ ಏನಾಗುತ್ತದೆ ಎಂಬ ಆತಂಕಕ್ಕೆ ಒಳಗಾಗಿದ್ದಾರೆ. ಆದ್ದರಿಂದ ಸಂವಿಧಾನ ಸಂರಕ್ಷಣಾ ಸಮಾವೇಶ ನಡೆಸುವ ಅಗತ್ಯವಿದೆ. ಕಾಲ ಕಾಲಕ್ಕೆ ಸಂವಿಧಾನ ತಿದ್ದುಪಡಿಯಾಗಲಿ. ಆದರೆ, ಬದಲಾವಣೆ ಬೇಡ. ಮೀಸಲಾತಿ ತೆಗೆಯುವ ವಾತಾವರಣ ದೇಶದಲ್ಲಿ ಸೃಷ್ಟಿಯಾಗಿಲ್ಲ. ನಮ್ಮಲ್ಲಿ ಇನ್ನೂ ಅಸ್ಪೃಶ್ಯತೆ ನಿವಾರಣೆ ಯಾಗಿಲ್ಲ. ಕೆಳಹಂತದ ಜನರನ್ನು ಮೇಲೆತ್ತಲು ಸಂವಿಧಾನದಿಂದ ಮಾತ್ರ ಸಾಧ್ಯ. ಆದ್ದರಿಂದ ಸಂವಿಧಾನದ ಬದಲಾವಣೆ ಅಗತ್ಯವಿಲ್ಲ ಎಂದರು. ತಾಪಂ ಮಾಜಿ ಅಧ್ಯಕ್ಷ ಬಾಲಚಂದ್ರನ್, ರವಿ ಕುರಗೋಡ ಇದ್ದರು.
ಕ್ಷೇತ್ರ ಬಿಟ್ಟು ಕೊಡಲು ಸಿದ್ಧ
ವಿಪಕ್ಷ ನಾಯಕ ಸಿದ್ದರಾಮಯ್ಯ 2023ರ ವಿಧಾನಸಭಾ ಚುನಾವಣೆಯಲ್ಲಿ ಕೊಪ್ಪಳದಿಂದ ಸ್ಪರ್ಧಿಸಲು ಬಯಸಿದರೆ ಕ್ಷೇತ್ರ ಬಿಟ್ಟುಕೊಡಲು ಸಿದ್ಧನಿರುವೆ ಎಂದು ರಾಘವೇಂದ್ರ ಹಿಟ್ನಾಳ್ ಹೇಳಿದರು. ಸಿದ್ದರಾಮಯ್ಯ ರಾಜ್ಯದ ಯಾವ ಕ್ಷೇತ್ರದಲ್ಲಿ ನಿಂತರೂ ಗೆಲ್ಲುತ್ತಾರೆ. ಅವರೊಬ್ಬ ಮಾಸ್ ಲೀಡರ್. ಕಾರ್ಯಕರ್ತರು ಭಾರಿ ಮತಗಳ ಅಂತರದಿಂದ ಗೆಲ್ಲಿಸಲಿದ್ದಾರೆ. ಈ ಹಿಂದೆ ಕೊಪ್ಪಳ ಲೋಕಸಭೆಗೆ ಸ್ಪರ್ಧಿಸಿ ಅಲ್ಪಮತಗಳ ಅಂತರದಿಂದ ಪರಾಭವಗೊಂಡಿದ್ದರು. ಈಗ ಬಂದರೂ ಸಂತೋಷದಿಂದ ಸ್ವಾಗತಿಸುತ್ತೇವೆ ಎಂದರು. ಕುಷ್ಟಗಿ ಕ್ಷೇತ್ರದಿಂದ ಸ್ಪರ್ಧಿಸಲು ಬಯಸಿದರೂ ನಾನು ಕ್ಷೇತ್ರ ಬಿಟ್ಟುಕೊಡುವೆ ಎಂದು ಶಾಸಕ ಅಮರೇಗೌಡ ಬಯ್ಯಪುರ ತಿಳಿಸಿದರು.