

ಕೊಪ್ಪಳ: ಕಿಮ್ಸ್ ಕಾಲೇಜಿನ 450 ಹಾಸಿಗೆ ಆಸ್ಪತ್ರೆ ಶೀಘ್ರ ಉದ್ಘಾಟಿಸಲಾಗುವುದೆಂದು ಶಾಸಕ ರಾಘವೇಂದ್ರ ಹಿಟ್ನಾಳ ಭರವಸೆ ನೀಡಿದರು.
ತಾಲೂಕಿನ ಹಿಟ್ನಾಳ ಜಿಪಂ ವ್ಯಾಪ್ತಿಯ ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.
ಆಸ್ಪತ್ರೆ ಕಟ್ಟಡ ಕಾಮಗಾರಿ ಪೂರ್ಣಗೊಂಡಿದ್ದು, ಅಕ್ಟೋಬರ್ ಮೊದಲ ವಾರದಲ್ಲಿ ಸಿಎಂ ಸಿದ್ದರಾಮಯ್ಯ ಉದ್ಘಾಟಸಲಿದ್ದಾರೆ. ಈ ಭಾಗದ ಜನರಿಗೆ ಸಾಕಷ್ಟು ಅನುಕೂಲವಾಗಲಿದೆ. ಕಲಬುರ್ಗಿಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಪೀಠೋಪಕರಣ ಖರೀದಿಗೆ ಅನುಮೋದನೆ ನೀಡಲಾಗಿದೆ. ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆ ಮಂಜೂರು ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಸೆ.22ರಂದು ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲು ಸಿಎಂ ಆಗಮಿಸಲಿದ್ದು ಮತ್ತೊಮ್ಮೆ ಜಿಲ್ಲೆ ನಾಯಕರೊಂದಿಗೆ ಮನವಿ ಸಲ್ಲಿಸಲಾಗುವುದು. ಕ್ಷೇತ್ರದಲ್ಲಿ ಹಾಳಾದ ರಸ್ತೆಗಳ ದುರಸ್ತಿಗೆ ಅನುದಾನ ಮೀಸಲಿಡಲಾಗುವುದು. ರಸ್ತೆ ಅಭಿವೃದ್ಧಿಗೆ 50 ಕೋಟಿ ರೂ. ನೀಡುವಂತೆ ಮನವಿ ಮಾಡಿದ್ದು, ಒಂದೊಂದೆ ಕಾಮಗಾರಿ ಕೈಗೆತ್ತಿಕೊಂಡು ಅಭಿವೃದ್ಧಿಪಡಿಸಲಾಗುವುದೆಂದರು.
ಗ್ಯಾರಂಟಿ ಯೋಜನೆಗಳು ಜನರಿಗೆ ಅನುಕೂಲವಾಗಿವೆ. ಕೊಟ್ಟ ಮಾತಿನಂತೆ ಅರ್ಹರಿಗೆ ಯೋಜನೆ ತಲುಪಿಸಲಾಗುತ್ತಿದೆ. ಹುಲಿಗಿ ಸೇತುವೆ ಮಂಜೂರಾಗಿದ್ದು ಕಾಮಗಾರಿ ಅಚ್ಚುಕಟ್ಟಾಗಿ ನಡೆಸುವಂತೆ ಸೂಚಿಸಲಾಗಿದೆ. ಇದರಿಂದ ಈ ಭಾಗದ ಜನರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು. ಮಾಜಿ ಸಂಸದ ಸಂಗಣ್ಣ ಕರಡಿ, ಜಿಪಂ ಮಾಜಿ ಅಧ್ಯಕ್ಷ ಜನಾರ್ದನ ಹುಲಿಗಿ, ಗ್ರಾಮೀಣ ಬ್ಲಾಕ್ ಅಧ್ಯಕ್ಷ ಕೃಷ್ಣಾರಡ್ಡಿ ಗಲಬಿ, ಗಾಳೆಪ್ಪ ಪೂಜಾರ, ರಾಮಣ್ಣ ಚೌಡ್ಕಿ, ಬಾಲಚಂದ್ರನ್, ಪಾಲಾಕ್ಷಪ್ಪ ಗುಂಗಾಡಿ, ಈರಣ್ಣ ಹುಲಿಗಿ, ಯಂಕಪ್ಪ ಹೊಸಳ್ಳಿ, ಖಾಜಾವಲಿ ಜವಳಿ, ಉಪ ವಿಭಾಗಧಿಕಾರಿ ಕ್ಯಾ.ಮಹೇಶ್ ಮಾಲಗಿತ್ತಿ, ತಹಸೀಲ್ದಾರ್ ವಿಠ್ಠಲ್ ಚೌಗಲಾ, ತಾಪಂ ಇಒ ದುಂಡಪ್ಪ ತುರಾದಿ, ಅಶೋಕ ಹಿಟ್ನಾಳ ಇತರರಿದ್ದರು.