ಏ.12ಕ್ಕೆ ನೌಕರರ ಜಿಲ್ಲಾ ಮಟ್ಟದ ವಾರ್ಷಿಕ ಕ್ರೀಡಾಕೂಟ ನಡೆಸುವುದಾಗಿ ಹೇಳಿದ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್

30032022 koppal DC
Published on

ಕೊಪ್ಪಳ: ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ವಾರ್ಷಿಕ ಕ್ರೀಡಾಕೂಟವನ್ನು ಏ.12 ಮತ್ತು 13 ರಂದು ಎರಡು ದಿನ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗುವುದೆಂದು ಜಿಲ್ಲಾಧಿಕಾರಿ ಎಸ್.ವಿಕಾಸ್ ಕಿಶೋರ್ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. ಏ.12ರಿಂದ ಎರಡು ದಿನ ಕ್ರೀಡಾಕೂಟ ನಡೆಸಲಾಗುವುದು. ಕ್ರೀಡಾ ಇಲಾಖೆ ಕ್ರೀಡಾಕೂಟಕ್ಕೆ ಸಹಕಾರ ನೀಡಬೇಕು. ಕಾರ್ಯಕ್ರಮ ಯಶಸ್ವಿಗೊಳಿಸಲು ಅಧಿಕಾರಿಗಳ ತಂಡ ರಚಿಸಿ ಜವಾಬ್ದಾರಿ ಹಂಚಿಕೆ ಮಾಡಲಾಗುವುದು. ಎಲ್ಲ ಅಧಿಕಾರಿಗಳು ನಿಮಗೆ ವಹಿಸಿದ ಕೆಲಸವನ್ನು ಜವಾಬ್ದಾರಿಯಿಂದ ನಿರ್ವಹಿಸಿ, ಕ್ರೀಡಾಕೂಟ ಯಶಸ್ವಿಗೊಳಿಸಬೇಕು. ಅಥ್ಲೆಟಿಕ್ಸ್, ಕುಸ್ತಿ, ಪವರ್‌ಲಿಫ್ಟಿಂಗ್ ಸೇರಿ ಒಳಾಂಗಣ ಕ್ರೀಡೆಗಳಾದ ಕೇರಂ, ಚೆಸ್ ಹಾಗೂ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು. ಇದರೊಂದಿಗೆ ಈ ಬಾರಿ ಈಜು ಸ್ಪರ್ಧೆ ಇರಲಿದೆ. ಜಿಲ್ಲೆಯ ಎಲ್ಲ ಸರ್ಕಾರಿ ನೌಕರರು ಕಾರ್ಯಕ್ರಮದಲ್ಲಿ ಭಾಗವಹಿಸಿ ಎಂದರು.

ಅಪರ ಜಿಲ್ಲಾಧಿಕಾರಿ ಎಂ.ಪಿ ಮಾರುತಿ ಮಾತನಾಡಿ, 2021-22ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲ ತಾಲೂಕು ನೌಕರರು ಭಾಗವಹಿಸಬೇಕು. ಕ್ರೀಡಾಕೂಟದಲ್ಲಿ ಭಾಗಿಯಾಗುವ ನೌಕರರಿಗೆ ಓಓಡಿ ಸೌಲಭ್ಯ, ಊಟೋಪಹಾರ, ಕ್ರೀಡಾ ಸಾಮಾಗ್ರಿ ಪೂರೈಕೆ, ನಿರ್ಣಾಯಕರ ನಿಯೋಜನೆ, ಕ್ರೀಡಾಂಗಣದಲ್ಲಿ ಪ್ರಥಮ ಚಿಕಿತ್ಸೆ, ಔಷಧೋಪಚಾರ, ಆ್ಯಂಬುಲೆನ್ಸ್ ವ್ಯವಸ್ಥೆಯನ್ನು ಸಂಬಂಧಿಸಿದ ಅಧಿಕಾರಿಳು ಕೈಗೊಳ್ಳುವಂತೆ ಸೂಚನೆ ನೀಡಿದರು.

ನೌಕರರ ಸಂಘದ ಜಿಲ್ಲಾಧ್ಯಕ್ಷ ನಾಗರಾಜ ಜುಮ್ಮನ್ನವರ್ ಮಾತನಾಡಿ, ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಯಶಸ್ವಿಯಾಗಿಸಲು ಎಲ್ಲ ಅಧಿಕಾರಿ, ಸಿಬ್ಬಂದಿ ಹಾಗೂ ನೌಕರರ ಸಹಕಾರ ಅಗತ್ಯ. ಕ್ರೀಡಾಕೂಟದಲ್ಲಿ ಭಾಗವಹಿಸುವವರು ವೆಬ್‌ಸೈಟ್ ಠಿಠಿ://ಚಿಜಿಠಿ.್ಝ/ಟಚ್ಝಜಛಿ ಲಿಂಕ್ ಮೂಲಕ ಏ.5 ರೊಳಗಾಗಿ ಕಡ್ಡಾಯವಾಗಿ ತಮ್ಮ ಹೆಸರನ್ನು ನೋಂದಾಯಿಸಬೇಕೆಂದು ತಿಳಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಅಮೃತ್ ಅಸ್ಟಗಿ, ಜಂಟಿ ಕೃಷಿ ನಿರ್ದೇಶಕ ಸದಾಶಿವ, ಪಶು ಇಲಾಖೆ ಉಪನಿರ್ದೇಶಕ ಡಾ.ಎಚ್.ನಾಗರಾಜ, ವಾರ್ತಾಧಿಕಾರಿ ಜಿ.ಸುರೇಶ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಗೌರವ ಅಧ್ಯಕ್ಷ ಮುಸ್ತಫಾ ಕುದರಿಮೋತಿ, ಕೋಶಾಧ್ಯಕ್ಷ ಸುಶಿಲೇಂದ್ರರಾವ್ ದೇಶಪಾಂಡೆ, ಕಾರ್ಯದರ್ಶಿ ಶಿವಪ್ಪ ಜೋಗಿ, ಸಹ ಕಾರ್ಯದರ್ಶಿ ವೆಂಕಟೇಶ ಕುಲಕರ್ಣಿ, ಬೀರಪ್ಪ ಅಂಡಗಿ ಚಿಲವಾಡಗಿ, ಯಶವಂತ ಸೇರಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net