ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ. ಪ್ರಕಾಶ್ ವಿ. ಮಾತನಾಡಿ, ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮದಡಿ ಜಿಲ್ಲೆಯ 1ರಿಂದ 19 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಅಲ್ಬೆಂಡಾಜೋಲ್ ಮಾತ್ರೆ ವಿತರಿಸಲಾಗುವುದು. ಅಂಗನವಾಡಿ ಮಕ್ಕಳಿಗೆ ಅಂಗನವಾಡಿ ಕೇಂದ್ರಗಳಲ್ಲಿ ಹಾಗೂ ಸರ್ಕಾರಿ-&ಖಾಸಗಿ ಶಾಲೆ ಮತ್ತು ಕಾಲೇಜುಗಳ ವಿದ್ಯಾರ್ಥಿಗಳಿಗೆ ಆಯಾ ಶಿಕ್ಷಣ ಸಂಸ್ಥೆಗಳ ಮೂಲಕ ಆಗಸ್ಟ್ 10ರಂದು ಮಾತ್ರೆ ನೀಡಲಾಗುತ್ತಿದ್ದು, ಅಂದು ಗೈರುಹಾಜರಾಗುವ ಮಕ್ಕಳಿಗೆ ಆಗಸ್ಟ್ 17ರಂದು ಮರು ಅವಕಾಶ ಕಲ್ಪಿಸಲಾಗಿದೆ. ಶಾಲೆಯಿಂದ ಹೊರಗುಳಿದ ಮಕ್ಕಳಿಗೂ ಅಂಗನವಾಡಿ ಕೇಂದ್ರಗಳಲ್ಲಿ ಮಾತ್ರೆ ನೀಡಲಾಗುವುದು. ಸಣ್ಣ ಮಕ್ಕಳಿಗೆ ಮಾತ್ರೆಯನ್ನು ನೀರಿನಲ್ಲಿ ಕರಗಿಸಿ ಕುಡಿಸಲು ಸೂಚಿಸಲಾಗಿದ್ದು, ಜಂತುಬಾಧೆ, ಅಪೌಷ್ಟಿಕತೆ ಮತ್ತು ರಕ್ತಹಿನತೆ ತಡೆಗಟ್ಟಿ ಮಕ್ಕಳ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಸಹಕಾರಿಯಾಗುವ ಉದ್ದೇಶದಿಂದ ಪ್ರತಿ ಆರು ತಿಂಗಳಿಗೊಮ್ಮೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಇದೇ ವೇಳೆ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆಗೊಳಿಸಲಾಯಿತು.