ಕೊಪ್ಪಳ: ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಿನಲ್ಲಿ ರಾಜ್ಯದ ಸಾವಿರಾರು ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿರುವ ಸರ್ಕಾರದ ಕ್ರಮದ ವಿರುದ್ಧ ರಾಜಧಾನಿಯಲ್ಲಿ ಧ್ವನಿ ಮೊಳಗಿಸಬೇಕಿದೆ. ನಮ್ಮೂರ ಶಾಲೆಗಳನ್ನು ಉಳಿಸಿಕೊಳ್ಳಲು ಏಪ್ರಿಲ್ 10ರಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಸಮಾವೇಶದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಎಐಡಿಎಸ್ಓ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯೆ ಸಿಂಧು ಕೌದಿ ಕರೆ ನೀಡಿದರು.
ನಗರದಲ್ಲಿ ಪದವಿ ವಿದ್ಯಾರ್ಥಿಗಳು ಹಾಗೂ ಸ್ವಯಂಸೇವಕರ ಮಧ್ಯೆ ಸಮಾವೇಶದ ಪ್ರಚಾರ ನಡೆಸಿ, ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದರು.
ಸರ್ಕಾರವು ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಅಡಿಯಲ್ಲಿ ರಾಜ್ಯದ ಸುಮಾರು 40,000 ಹಾಗೂ ಕೊಪ್ಪಳ ಜಿಲ್ಲೆಯೊಂದರಲ್ಲೇ 500ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿದೆ. ಈ ನೀತಿಯ ವಿರುದ್ಧ ಕಳೆದ ನಾಲ್ಕು ತಿಂಗಳಿನಿಂದ ನಿರಂತರ ಹೋರಾಟ ನಡೆಯುತ್ತಿದೆ. ಈಗಾಗಲೇ ಜಿಲ್ಲೆಯ ಮಹಮ್ಮದ್ ನಗರ, ರಾಜಾರಾಮ್ ಪೇಟೆ, ಹಿರೇಕಾಸನ ಕಂಡಿ, ಮಳ್ಳಿಕೇರಿ ಸೇರಿದಂತೆ ಅನೇಕ ಹಳ್ಳಿಗಳಲ್ಲಿ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಗಳನ್ನು ರಚಿಸಿ ಪ್ರತಿಭಟಿಸಲಾಗಿದೆ ಎಂದರು.
ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಹೋರಾಟದ ಮುಂದುವರಿದ ಭಾಗವಾಗಿ, ಏಪ್ರಿಲ್ 10ಕ್ಕೆ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ರಾಜ್ಯಮಟ್ಟದ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳುವ ಈ ಮಹತ್ವದ ಹೋರಾಟಕ್ಕೆ ಕೊಪ್ಪಳ ಜಿಲ್ಲೆಯಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗಬೇಕು. ಪದವಿ ಕಾಲೇಜಿನ ವಿದ್ಯಾರ್ಥಿಗಳು ಈ ಅಭಿಯಾನಕ್ಕೆ ಸಾಥ್ ನೀಡಿದ್ದು, ನಮ್ಮೂರಿನ ಶಾಲೆಗಳನ್ನು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿ. ನಾವೆಲ್ಲರೂ ಈ ಸಮಾವೇಶಕ್ಕೆ ಮುನ್ನಡೆಯೋಣ ಎಂದು ಹೇಳಿದರು.