ಕೊಪ್ಪಳ: ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ಪ್ರತಿಬಂಧಕ ವಿಧೇಯಕ ವಾಪಸ್ ಪಡೆಯುವಂತೆ ಆಗ್ರಹಿಸಿ ಬಿಜೆಪಿ ನಾಯಕರು ಬುಧವಾರ ನಗರದ ಅಶೋಕ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಡಾ.ಬಸವರಾಜ ಕ್ಯಾವಟರ್ ಮಾತನಾಡಿ, ಸಂವಿಧಾನದ ರಕ್ಷಕರು ಎಂದು ತಮ್ಮನ್ನು ತಾವು ಕರೆದುಕೊಳ್ಳುವ ಕಾಂಗ್ರೆಸ್ಸಿಗರು ಸಂವಿಧಾನದ ಕತ್ತು ಹಿಸುಕಲು ಮುಂದಾಗಿದ್ದಾರೆ. ದ್ವೇಷ ಭಾಷಣ ಪ್ರತಿಬಂಧಕ ಕಾಯ್ದೆ ಮೂಲಕ ವಾಕ್ ಸ್ವಾತಂತ್ರ್ಯ ಕಿತ್ತುಕೊಳ್ಳುತ್ತಿದೆ. ಸಿಎಂ ಸಿದ್ದರಾಮಯ್ಯ ನಿರಂಕುಶ ಪ್ರಭುತ್ವ ಸ್ಥಾಪಿಸಲು ಮುಂದಾಗಿದ್ದಾರೆ. ಯಾವುದೇ ಮುಂದಾಲೋಚನೆ ಇಲ್ಲದೇ ವಿಧೇಯಕ ಮಂಡಿಸಲಾಗಿದೆ. ವಿಪಕ್ಷದವರು ಕೇಳಿದ ಪ್ರಶ್ನೆಗೆ ಸರ್ಕಾರದ ಬಳಿ ಉತ್ತರ ಇಲ್ಲದಂತಾಗಿದೆ. ಇದನ್ನು ಖಂಡಿಸಿ ಹೋರಾಟ ಮುಂದುವರೆಯಲಿದೆ ಎಂದು ಎಚ್ಚರಿಸಿದರು.
ವಿಪ ಸದಸ್ಯೆ ಹೇಮಲತಾ ನಾಯಕ ಮಾತನಾಡಿ, ಮಸೂದೆ ಬಗ್ಗೆ ಸಮಗ್ರವಾಗಿ ಚರ್ಚಿಸಿಲ್ಲ. ವಿಧಾನಸಭೆ, ಪರಿಷತ್ನಲ್ಲೂ ಅವಕಾಶ ಕಲ್ಪಿಸಿಲ್ಲ. ಕೇವಲ 6 ಪುಟದಲ್ಲಿ ತರಾತುರಿಯಲ್ಲಿ ಮಂಡಿಸಿದ್ದಾರೆ. ಪ್ರಭುತ್ವ ವಿರೋಧಿ ವಿಧೇಯಕಕ್ಕೆ ಅನುಮೋದನೆ ಪಡೆದುಕೊಂಡಿದ್ದಾರೆ. ಕಾಯ್ದೆಯಾಗಿ ಜಾರಿಯಾದಲ್ಲಿ ವಾಕ್ ಸ್ವಾತಂತ್ರ$್ಯಕ್ಕೆ ಧಕ್ಕೆಯಾಗಲಿದೆ ಎಂದು ಆರೋಪಿಸಿದರು.
ಪ್ರತಿಭಟನಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ತಹಸೀಲ್ದಾರ್ ವಿಠ್ಠಲ್ ಚೌಗಲಾ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.