

ಮುನಿರಾಬಾದ್: ಸೀಗೆ ಹುಣ್ಣಿಮೆ ಪ್ರಯುಕ್ತ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನಕ್ಕೆ ಸೋಮವಾರ ನಾಲ್ಕು ಲಕ್ಷಕ್ಕೂ ಅಧಿಕ ಭಕ್ತರು ಭೇಟಿ ನೀಡಿ ದರ್ಶನ ಪಡೆದರು.
ಹುಣ್ಣಿಮೆ ಅಂಗವಾಗಿ ಭಾನುವಾರ ಸಂಜೆಯಿಂದಲೇ ವಿವಿಧ ಭಾಗಗಳಿಂದ ಭಕ್ತರು ಕ್ಷೇತ್ರಕ್ಕೆ ಆಗಮಿಸುತ್ತಿದ್ದರು. ರಾತ್ರಿ ದೇವಸ್ಥಾನದ ಆವರಣ ಹಾಗೂ ಸುತ್ತಲಿನ ಪ್ರದೇಶಗಳಲ್ಲಿಯೇ ವಾಸ್ತವ್ಯ ಹೂಡಿದರು. ಸೋಮವಾರ ಬೆಳಗ್ಗೆ ಬ್ರಾಹ್ಮೀ ಮುಹೂರ್ತದಲ್ಲಿ ಜಗನ್ಮಾತೆ ಶ್ರೀ ಹುಲಿಗೆಮ್ಮ ದೇವಿಗೆ ವಿವಿಧ ಬಗೆಯ ಪುಷ್ಪಗಳಿಂದ ವಿಶೇಷ ಅಲಂಕಾರ ಮಾಡಿ, ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಕುಂಕುಮಾರ್ಚನೆ ಹಾಗೂ ಮಹಾಮಂಗಳಾರತಿ ನೆರವೇರಿಸಲಾಯಿತು.
ರಾಜ್ಯ ಮಾತ್ರವಲ್ಲದೆ ನೆರೆಯ ಆಂಧ್ರಪ್ರದೇಶ, ತೆಲಂಗಾಣ ಹಾಗೂ ಮಹಾರಾಷ್ಟ್ರ ಸೇರಿದಂತೆ ವಿವಿಧೆಡೆಯಿಂದ ಆಗಮಿಸಿದ್ದ ಭಕ್ತರು ತುಂಗಭದ್ರಾ ನದಿಯಲ್ಲಿ ಪುಣ್ಯಸ್ನಾನ ಮಾಡಿದರು. ಬಳಿಕ ಕಾಯಿ, ಹೂ-ಹಣ್ಣು ಅರ್ಪಿಸಿ ವಿಶೇಷ ಪೂಜೆ ಸಲ್ಲಿಸಿದರು. ಸರದಿಯಲ್ಲಿ ನಿಂತು ದೇವಿ ದರ್ಶನ ಪಡೆದರು. ಬಳಿಕ ಮನೆಯಿಂದ ತಂದಿದ್ದ ಬುತ್ತಿಯನ್ನು ನದಿದಡ ಹಾಗೂ ದೇವಸ್ಥಾನ ಆವರಣದಲ್ಲಿ ಕುಟುಂಬ ಸದಸ್ಯರೊಂದಿಗೆ ಕುಳಿತು ಸವಿದರು.
ಕಳೆದ ವರ್ಷ ಸೀಗೆ ಹುಣ್ಣಿಮೆ ದಿನ ನಾಲ್ಕು ಲಕ್ಷಕ್ಕೂ ಅಧಿಕ ಭಕ್ತರು ಆಗಮಿಸಿದ್ದರಿಂದ ಕ್ಷೇತ್ರದಲ್ಲಿ ನೂಕುನುಗ್ಗಲು ಉಂಟಾಗಿ ಕಾಲ್ತುಳಿತದ ವಾತಾವರಣ ನಿರ್ಮಾಣವಾಗಿತ್ತು. ಈ ಬಾರಿ ಪೊಲೀಸ್ ಇಲಾಖೆಯು ಮುಂಜಾಗ್ರತಾ ಕ್ರಮವಾಗಿ ಬಿಗಿ ಭದ್ರತೆ ಒದಗಿಸಿತ್ತು. ದೇವಸ್ಥಾನದ ಮುಖ್ಯದ್ವಾರ ಹಾಗೂ ಮುಖ್ಯ ರಸ್ತೆಯಲ್ಲಿ ವಾಹನ ಸಂಚಾರವನ್ನು ಸಂಪೂರ್ಣ ನಿರ್ಬಂಧಿಸಲಾಗಿತ್ತು. ಬದಲಾಗಿ, ಶಿವಪುರ ರಸ್ತೆ ಮೂಲಕ ವಾಹನಗಳನ್ನು ದೇವಸ್ಥಾನದ ಹಿಂಭಾಗದಲ್ಲಿರುವ ನಿಗದಿತ ಪಾರ್ಕಿಂಗ್ ಸ್ಥಳಕ್ಕೆ ಕಳಿಸಿ ಸಂಚಾರ ಸುಗಮಗೊಳಿಸಲಾಯಿತು.
ಶ್ರೀ ಕ್ಷೇತ್ರದಲ್ಲಿ ಪ್ರತಿ ಮಂಗಳವಾರ, ಶುಕ್ರವಾರ ಹಾಗೂ ಹುಣ್ಣಿಮೆಯ ದಿನಗಳಲ್ಲಿ ಲಕ್ಷಾಂತರ ಭಕ್ತರು ಸೇರುತ್ತಾರೆ. ಇತ್ತೀಚೆಗೆ ಮುಜರಾಯಿ ಸಚಿವರು ಕ್ಷೇತ್ರಕ್ಕೆ ಭೇಟಿ ನೀಡಿದ್ದಾಗ ಸ್ವಚ್ಛತೆ ಕೊರತೆ ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಆದರೆ, ಹುಣ್ಣಿಮೆ ದಿನ ಶೌಚಗೃಹ, ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯ ಸಮಸ್ಯೆ ಕಂಡುಬಂತು. ಮಹಿಳೆಯರು, ವೃದ್ಧರಿಗೆ ಇನ್ನಷ್ಟು ಸ್ನಾನಗೃಹಗಳು, ಶೌಚಗೃಹಗಳು ಇರಬೇಕಿತ್ತು. ದೂರದೂರುಗಳಿಂದ ಬಂದ ಭಕ್ತರು ಸುಮಾರು ಎರಡು ಕಿಮೀವರೆಗೆ ನಡೆದುಕೊಂಡೇ ದೇವಸ್ಥಾನ ತಲುಪಬೇಕಾಯಿತು. ದರ್ಶನ ಮುಗಿಸಿ ಹಿಂತಿರುಗುವಾಗ ಸೂಕ್ತ ಬಸ್ ನಿಲ್ದಾಣವಿಲ್ಲದ ಕಾರಣ ಭಕ್ತರು ರಸ್ತೆಯಲ್ಲೇ ಬಸ್ಗಳಿಗಾಗಿ ಕಾಯುವಂತಾಯಿತು. ಬಂದ ಬಸ್ಗಳ ತುಂಬಿದ್ದರೂ ಜೋತುಬಿದ್ದು ಪ್ರಯಾಣಿಸುವ ದುಸ್ಥಿತಿ ನಿರ್ಮಾಣವಾಗಿತ್ತು.