

ಉಡುಪಿ: ಆರ್ಥಿಕವಾಗಿ ತೀರಾ ಹಿಂದುಳಿದ ಪರಿಶಿಷ್ಟ ಪಂಗಡ, ಆದಿವಾಸಿ ಬುಡಕಟ್ಟು ಸಮುದಾಯ, ಕೊರಗ ಜನಾಂಗದವರು ತೀವ್ರ ತರಹದ ಖಾಯಿಲೆಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಲ್ಲಿ ಅವರ ವೈದ್ಯಕೀಯ ವೆಚ್ಚವನ್ನು ಈ ಹಿಂದಿನಂತೆಯೇ ಸರ್ಕಾರದ ವತಿಯಿಂದ ಮರುಪಾವತಿಸುವಂತೆ ಆಗ್ರಹಿಸಿ ಉಡುಪಿ ಶಾಸಕ ಕೆ.ರಘುಪತಿ ಭಟ್ ನೇತೃತ್ವದಲ್ಲಿ 3 ಜಿಲ್ಲೆಗಳ ಶಾಸಕರ ನಿಯೋಗ ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
ನಗರ ಪ್ರದೇಶದಿಂದ ದೂರವಿದ್ದು ಕಾಡಂಚಿನಲ್ಲಿ ವಾಸವಿರುವ ಈ ಸಮುದಾಯಗಳ ಮಂದಿ ರಕ್ತ ಹೀನತೆ, ಅಪೌಷ್ಟಿಕತೆ, ಟಿಬಿ, ಕ್ಯಾನ್ಸರ್, ಮಧುಮೇಹ ಮುಂತಾದ ತೀವ್ರ ತರಹದ ಕಾಯಿಲೆಗಳಿಗೆ ತುತ್ತಾದಾಗ ಪರಿಣಾಮಕಾರಿ ಚಿಕಿತ್ಸೆ ಪಡೆಯಲು ಸಾಧ್ಯವಾಗದೆ ಮರಣ ಹೊಂದುತ್ತಿದ್ದಾರೆ.ಈ ಸಮುದಾಯದವರಿಗೆ ವೈದ್ಯಕೀಯ ಚಿಕಿತ್ಸೆಗೆ ಸಂಬಂಧಿಸಿದಂತೆ ಸರ್ಕಾರದ ಯಾವುದೇ ವಿಮಾ ಯೋಜನೆಗಳು ಉಪಯುಕ್ತವಾಗದೆ ಇರುವುದರಿಂದ ವೈದ್ಯಕೀಯ ವೆಚ್ಚವನ್ನು ಸರ್ಕಾರದ ವತಿಯಿಂದ ಮರುಪಾವತಿ ಮಾಡುವುದು ಅವಶ್ಯಕವಾಗಿರುತ್ತದೆ ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಉಡುಪಿ, ದ.ಕ., ಉತ್ತರ ಕನ್ನಡ 3 ಜಿಲ್ಲೆಗಳ ಶಾಸಕರು ಮಾಡಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಯವರು, ಮುಂದುವರೆಸುವುದು ಎಂದು ಷರಾ ಬರೆದು, ವೈದ್ಯಕೀಯ ವೆಚ್ಚ ಮರುಪಾವತಿ ಯೋಜನೆಗೆ ತಕ್ಷಣದಲ್ಲಿ ಆದೇಶ ಹೊರಡಿಸುವಂತೆ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಅವರಿಗೆ ದೂರವಾಣಿ ಮೂಲಕ ಸೂಚಿಸಿದ್ದಾರೆ.
ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್. ಅಂಗಾರ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಜೀವರಾಜ್, ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಬೈಂದೂರು ಶಾಸಕ ಎಂ. ಸುಕುಮಾರ್ ಶೆಟ್ಟಿ, ಮಂಗಳೂರು ಶಾಸಕ ವೇದವ್ಯಾಸ್ ಕಾಮತ್, ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ, ಬಂಟ್ವಾಳ ಶಾಸಕ ರಾಜೇಶ್ ನಾಯಕ್, ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಭಟ್ಕಳ ಶಾಸಕ ಸುನಿಲ್ ನಾಯ್ಕ್, ಕುಮಟಾ ಶಾಸಕ ದಿನಕರ ಶೆಟ್ಟಿ, ಕಾರವಾರ ಶಾಸಕಿ ರೂಪಾಲಿ ನಾಯ್ಕ್ ಉಪಸ್ಥಿತರಿದ್ದರು.