ಬೇಲೂರು: ಭೀಮಾ ಕೋರೆಗಾಂವ್ ವಿಜಯೋತ್ಸವ ಸಮಿತಿ ಹಾಗೂ ದಲಿತ ಸಂಘಟನೆಗಳ ಮಹಾ ಒಕ್ಕೂಟದಿಂದ ಜ.1ರಂದು ಭೀಮ ಕೋರೆಗಾಂವ್ ವಿಜಯೋತ್ಸವ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಅಂಬೇಡ್ಕರ್ ಆಚರಣಾ ಸಮಿತಿ ಮುಖಂಡ ಶಶಿಧರ್ ಮೌರ್ಯ ತಿಳಿಸಿದರು.
ಅಂದು ಬೆಳಗ್ಗೆ 10 ಗಂಟೆಗೆ ಪಟ್ಟಣದ ತಹಸೀಲ್ದಾರ್ ಕಚೇರಿ ಮುಂಭಾಗದ ಡಾ.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಭೀಮಾ ಕೋರೆಗಾಂವ್ ವಿಜಯೋತ್ಸವದ ರಥವನ್ನು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಾಗುವುದು. ನಂತರ ಅಂಬೇಡ್ಕರ್ ನಗರದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಸಲ್ಲಿಸಿದ ಬಳಿಕ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ. ದಲಿತ ಸಂಘಟನೆ ಸಂಸ್ಥಾಪಕ ಸದಸ್ಯ ಶ್ರೀಧರ್ ಕಲಿವೀರ್ ಮುಖ್ಯ ಭಾಷಣ ಮಾಡಲಿದ್ದಾರೆ. ದಲಿತಪರ ಸಂಘಟನೆ ಕಾರ್ಯಕರ್ತರು, ಅಂಬೇಡ್ಕರ್ ಅಭಿಮಾನಿಗಳು, ಪ್ರಗತಿಪರ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.
ಅಂಬೇಡ್ಕರ್ ಆಚರಣಾ ಸಮಿತಿ ಮುಖಂಡರಾದ ಕೆಸಗೋಡು ಪ್ರಕಾಶ್, ಹರೀಶ್ ಕೋನೇರ‌್ಲು, ಅಶೋಕ್ ಕೋಟಿಗನಾಹಳ್ಳಿ, ಹುಣಸೇಕೆರೆ ರಾಕೇಶ್ ಇದ್ದರು.