ನನ್ನ ಮೇಲಿನ ಆರೋಪ ಸುಳ್ಳು: ಕೋಟ ಶ್ರೀನಿವಾಸ್ ಪೂಜಾರಿ

Kota Srinivas Poojary
Published on

ಉಡುಪಿ: ರಾಜ್ಯ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರ ಪ್ರಕರಣ ಹಾಗೂ ಹುಳುಕು ಮರೆಮಾಚಿಸಲು ಅಧಿವೇಶನದ ಒಳಗೆ ಹಾಗೂ ಹೊರಗೆ ವಿನಾ ಕಾರಣ ಹಿಂದಿನ ಬಿಜೆಪಿ ಸರ್ಕಾರದ ಮೇಲೆ ಭ್ರಷ್ಟಾಚಾರದ ಆರೋಪ ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯ ತನ್ನ ಹೆಸರನ್ನೂ ಉಲ್ಲೇಖಿಸಿ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಇದು ಅಪ್ಪಟ ಸುಳ್ಳು ಎಂದು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.

ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಧರಣಿ ಎಚ್ಚರಿಕೆ

ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿದ ಅವರು, ತಾನು ಸಮಾಜ ಕಲ್ಯಾಣ ಇಲಾಖೆ ಸಚಿವನಾಗಿದ್ದ ಅವಧಿಯಲ್ಲಿ ಕೊಳವೆಬಾವಿ ನಿರ್ಮಾಣ ಹಾಗೂ ಬೋವಿ ನಿಗಮದಲ್ಲಿ ಅವ್ಯವಹಾರ ಮಾಡಿದ್ದಾಗಿ ಆರೋಪಿಸಿದ್ದಾರೆ. ಇದರಲ್ಲಿ ಸತ್ಯಾಂಶ ಇಲ್ಲ. ಹೀಗಾಗಿ ವಾರದೊಳಗೆ ಸಿಎಂ ಸಿದ್ದರಾಮಯ್ಯ ಆರೋಪ ಹಿಂಪಡೆಯಬೇಕು. ಅಥವಾ ನನ್ನ ವಿರುದ್ಧ ಸಿಬಿಐ ತನಿಖೆ ನಡೆಸಬೇಕು. ಇಲ್ಲದಿದ್ದಲ್ಲಿ ಸತ್ಯ ಪ್ರತಿಪಾದನೆಗಾಗಿ ವಿಧಾನಸೌಧದಲ್ಲಿರುವ ಗಾಂಧಿ ಪ್ರತಿಮೆ ಎದುರು ಧರಣಿ ನಡೆಸುತ್ತೇನೆ ಎಂದರು.

ಈಗಿನ ಅಧಿಕಾರಿಗಳೂ ಸಹ ಸಮಾಜ ಕಲ್ಯಾಣ ಇಲಾಖೆಯಲ್ಲಿ ಹಿಂದೆ ಅವ್ಯವಹಾರ ನಡೆದಿಲ್ಲ ಎಂದು ಸಿಎಂಗೆ ಮಾಹಿತಿ ನೀಡಿದ್ದಾರೆ. ಸತ್ಯಕ್ಕೆ ಎಂದೂ ಅಪಚಾರ ಆಗಬಾರದು. ಹೀಗಾಗಿ ಸ್ಪಷ್ಟೀಕರಣಕ್ಕಾಗಿ ಸಿಎಂಗೆ ಪತ್ರ ಬರೆದಿದ್ದೇನೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net