

ವಿಜಯವಾಣಿ ಸುದ್ದಿಜಾಲ ಉಡುಪಿ
ಮಹತ್ವದ ಕೊಂಕಣ ರೈಲ್ವೆ ವಿಭಾಗವು ಏಕ ಹಳಿಯ ಪ್ರಯಾಣ ಸೌಲಭ್ಯ ಹೊಂದಿದ್ದು, ಹೆಚ್ಚುವರಿ ರೈಲ್ವೆ ಸಂಚಾರಕ್ಕೆ ಕಷ್ಟವಾಗುತ್ತಿದೆ. ಕೊಂಕಣ ರೈಲ್ವೆಯಲ್ಲಿ ಅನುದಾನ ಕೊರತೆಯೂ ಇದ್ದು, ನೂತನ ರೈಲ್ವೆ ನಿಲ್ದಾಣ ಸೇರಿದಂತೆ ಅಗತ್ಯ ಮೂಲ ಸೌಕರ್ಯ ಒದಗಿಸಲು ಆರ್ಥಿಕ ತೊಂದರೆ ಉಂಟಾಗಿದೆ. ಹೀಗಾಗಿ ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯಲ್ಲಿ ವಿಲೀನ ಮಾಡಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಆಗ್ರಹಿಸಿದರು.
ಉಡುಪಿ ಜಿಲ್ಲೆಯ ಎಲ್ಲ ಶಾಸಕರೊಂದಿಗೆ ಮಾ.17ರಂದು ಬೆಳಗ್ಗೆ ಬೆಂಗಳೂರಿನಲ್ಲಿ ರಾಜ್ಯ ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿ, ಚರ್ಚಿಸಿದರು.
ಕೊಂಕಣ ರೈಲ್ವೆ ಯೋಜನೆಯನ್ನು ಜಾರ್ಜ್ ಫೆರ್ನಾಂಡಿಸ್ ಅವರು ಕೇಂದ್ರ ರೈಲ್ವೆ ಸಚಿವರಾಗಿದ್ದಾಗ ಅನುಷ್ಠಾನಗೊಳಿಸಿದ್ದರು. ಇದು ರಾಜ್ಯದ ಕರಾವಳಿ ಭಾಗದಲ್ಲಿ ಅತ್ಯುಪಯುಕ್ತವಾಗಿದೆ. ಹೀಗಾಗಿ ಭಾರತ ಸರ್ಕಾರದ ಅನುದಾನ ಪಡೆದು ಕರಾವಳಿ ಪ್ರದೇಶದಲ್ಲೂ ರೈಲ್ವೆ ಸೌಲಭ್ಯ ಉನ್ನತಿಕರಿಸಲು ಅವಕಾಶ ಮಾಡಿಕೊಡಬೇಕು. ಭಾರತೀಯ ರೈಲ್ವೆಯಲ್ಲಿ ವಿಲೀನಗೊಂಡರೆ ಮುಂದಿನ ದಿನಗಳಲ್ಲಿ ಲೈನ್ ಡಬ್ಲಿಂಗ್ ಸೇರಿದಂತೆ ಅನೇಕ ಅಭಿವೃದ್ಧಿ ಯೋಜನೆ ಲಭಿಸಲಿದೆ ಎಂದು ಮನವರಿಕೆ ಮಾಡಿದರು.
ಸುದೀರ್ಘ ಚರ್ಚೆಯ ಬಳಿಕ ಸಹಮತ ವ್ಯಕ್ತಪಡಿಸಿದ ಸಚಿವ ಎಂ.ಬಿ. ಪಾಟೀಲ, ಇಲಾಖಾ ಪ್ರಧಾನ ಕಾರ್ಯದರ್ಶಿ ಮಂಜುಳಾ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ತಕ್ಷಣ ಕಡತ ಸಿದ್ಧಪಡಿಸುವಂತೆ ಸೂಚಿಸಿದರು. ಮುಂದಿನ ಸಚಿವ ಸಂಪುಟದಲ್ಲಿ ಅನುಮೋದನೆ ಪಡೆದು, ಭಾರತೀಯ ರೈಲ್ವೆಯಲ್ಲಿ ವಿಲೀನ ಮಾಡಿಸುವ ಬಗ್ಗೆ ನಿಯೋಗಕ್ಕೆ ಭರವಸೆ ನೀಡಿದರು.
ಕಾರ್ಕಳ ಶಾಸಕ ವಿ.ಸುನೀಲಕುಮಾರ್, ಕಾಪು ಶಾಸಕ ಗುರ್ಮೆ ಸುರೇಶ ಶೆಟ್ಟಿ, ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ಕುಂದಾಪುರ ಶಾಸಕ ಕಿರಣಕುಮಾರ್ ಕೊಡ್ಗಿ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಇದ್ದರು.