

ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣ ಇಳಿಮುಖಗೊಂಡಿದ್ದರೂ ಜನರು ನಿರ್ಲಕ್ಷೃ ಮಾಡಿದರೆ ಆಪತ್ತು ಎದುರಿಸಬೇಕಾಗುತ್ತದೆ. ಹಾಗಾಗಿ ಆರೋಗ್ಯ ಅಧಿಕಾರಿಗಳು ಮುಂಜಾಗ್ರತಾ ಕ್ರಮ ವಹಿಸಬೇಕು. ರೋಗ ಹಿಮ್ಮೆಟ್ಟಿಸಲು ಸಹಕರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ವಿವಿಧ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಎರಡನೇ ಹಂತದಲ್ಲಿ ಕರೊನಾ ಹರಡದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿನ ಜನಸಂದಣಿ ಪ್ರದೇಶಗಳಲ್ಲಿ ನಿಗಾವಹಿಸಬೇಕು. ವಿಶೇಷ ಆದ್ಯತೆ ನೀಡಿ ಕ್ರಮ ವಹಿಸಬೇಕು ಎಂದು ಸೂಚಿಸಿದರು.
ಜಿಲ್ಲೆಯಲ್ಲಿ ಗೋಕಾಕ, ಚಿಕ್ಕೋಡಿ, ಹಾಗೂ ಅಥಣಿ ತಾಲೂಕಿನ ಕೋವಿಡ್-19 ಸಕ್ರಿಯ ಪ್ರಕರಣಗಳ ಹಾಗೂ ಮರಣ ಪ್ರಮಾಣ ಸಂಪೂರ್ಣ ಕಡಿಮೆಯಾಗಿದೆ. ಶಾಲೆ-ಕಾಲೇಜ್‌ಗಳ ವಿದ್ಯಾರ್ಥಿಗಳನ್ನು ಕರೊನಾ ಪರೀಕ್ಷೆ ಮಾಡಿಸಲಾಗುತ್ತಿದೆ. ಸೋಂಕಿತರಿಗೆ ಅವರವರ ಮನೆಯಲ್ಲಿ ಚಿಕಿತ್ಸೆ ಸೌಲಭ್ಯ ಕಲ್ಪಿಸಲಾಗುತ್ತಿದೆ. ಆದರೂ ಕರೊನಾ ವಿಚಾರವಾಗಿ ನಿರ್ಲಕ್ಷ್ಯ ಬೇಡ ಎಂದು ಸಚಿವ ರಮೇಶ ಹೇಳಿದರು.
ಮರಣ ಪ್ರಮಾಣ ಇಳಿಕೆ: ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 274 ಪ್ರಕರಣಗಳು ಸಕ್ರಿಯವಾಗಿದ್ದು, ಇಲ್ಲಿಯವರೆಗೆ ಒಟ್ಟು 341 ಜನರು ಸೋಂಕಿನಿಂದ ಮರಣ ಹೊಂದಿದ್ದಾರೆ. ಜಿಲ್ಲೆಯಲ್ಲಿ ಆಕ್ಸಿಜನ್ ಅಭಾವ ಇಲ್ಲ. ಅದೇ ರೀತಿ ಮರಣ ಪ್ರಮಾಣ ಕೂಡ ಶೇ.97 ತಗ್ಗಿದೆ ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಮಹಾನಗರ ಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ, ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಧಿಕಾರಿ ಡಾ. ಎಸ್.ವಿ. ಮುನ್ಯಾಳ ಹಾಗೂ ತಾಲೂಕು ವೈದ್ಯಾಧಿಕಾರಿಗಳು ಇದ್ದರು.