ಕೇವಲ ಎಸ್ಸೆಸ್ಸೆಲ್ಸಿ ಉತ್ತೀರ್ಣ ವ್ಯಕ್ತಿ ಶಿಕ್ಷಕರ ಪ್ರತಿನಿಧಿಯಾಗಲು ಹೇಗೆ ಸಾಧ್ಯ? : ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್

mysore
Published on

ಮೈಸೂರು: ಕೇವಲ ಎಸ್ಸೆಸ್ಸೆಲ್ಸಿ ವಿದ್ಯಾರ್ಹತೆ ಹೊಂದಿರುವ ವಿಧಾನ ಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಕೆ. ವಿವೇಕಾನಂದ ಅವರನ್ನು ಶಿಕ್ಷಕರು ತಿರಸ್ಕರಿಸುವ ಮೂಲಕ ಕಳೆದ 24 ವರ್ಷಗಳಿಂದ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡರನ್ನು ಗೆಲ್ಲಿಸಬೇಕು ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಮನವಿ ಮಾಡಿದರು.

‘ಜೆಡಿಎಸ್ ಅಭ್ಯರ್ಥಿ ವಿವೇಕಾನಂದ ವಾಗ್ಮಿ ಅಲ್ಲ, ಅವರು ಮಾತನಾಡದೆ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡುತ್ತಾರೆ’ ಎಂದು ಜೆಡಿಎಸ್‌ನ ಮಾಜಿ ಶಾಸಕರೊಬ್ಬರು ಹೇಳಿಕೆ ನೀಡಿದ್ದಾರೆ. ಮೇಲ್ಮನೆಯಲ್ಲಿ ಶಿಕ್ಷಕರ ಸಮಸ್ಯೆಗಳನ್ನು ಸಮರ್ಥವಾಗಿ ಮಂಡಿಸಲು ವಾಗ್ಮಿಯ ಅವಶ್ಯಕತೆ ಇದೆ. ಮಾತನಾಡಲು ಬಾರದವರಿಂದ ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರ ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಟೀಕಿಸಿದರು.

‘ಶಿಕ್ಷಕರ ಎಲ್ಲ ಸಮಸ್ಯೆಗಳನ್ನು ಬಗೆಹರಿಸುತ್ತೇವೆ, ವಿವೇಕಾನಂದ ಅವರನ್ನು ಗೆಲ್ಲಿಸಿ’ ಎಂದು ಶಾಸಕ ಜಿ.ಟಿ. ದೇವೇಗೌಡರು ಹೇಳಿಕೆ ನೀಡಿದ್ದಾರೆ. ಅವರು ಉನ್ನತ ಶಿಕ್ಷಣ ಸಚಿವರಾಗಿದ್ದ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರದ ಸಮಸ್ಯೆಗಳನ್ನು ಬಗೆಹರಿಸಲು ಏತಕ್ಕೆ ಪ್ರಯತ್ನ ನಡೆಸಲಿಲ್ಲ. ಬಿಜೆಪಿ ಮತ್ತು ಜೆಡಿಎಸ್ ನಾಯಕರು ಶಿಕ್ಷಕರುಗಳಿಗೆ ಆಮಿಷಗಳನ್ನು ಒಡ್ಡಿ ವ್ಯವಸ್ಥೆಯನ್ನು ಹಾಳು ಮಾಡುತ್ತಿದ್ದಾರೆ. 24 ವರ್ಷಗಳಿಂದ ವಿಧಾನ ಪರಿಷತ್ ಸದಸ್ಯರಾಗಿ ಯಾವುದೇ ಕಳಂಕ ಇಲ್ಲದೆ ಕಾರ್ಯನಿರ್ವಹಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಅವರನ್ನು ಮತದಾರರು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಹಲವಾರು ವರ್ಷಗಳಿಂದ ನನೆಗುದಿಗೆ ಬಿದ್ದಿದ ಶಿಕ್ಷಕರ ಸಮಸ್ಯೆಗಳನ್ನು ಕಾಂಗ್ರೆಸ್ ಸರ್ಕಾರ ಬಗೆಹರಿಸಿದೆ. ಐಎಎಸ್ ಅಧಿಕಾರಿ ಕುಮಾರ್ ನಾಯಕರ್ ವರದಿ ಜಾರಿಗೊಳಿಸಿ ವೇತನ ತಾರತಮ್ಯ ನಿವಾರಿಸಲಾಗಿದೆ. 2018ರಲ್ಲಿ 6ನೇ ವೇತನ ಆಯೋಗವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಜಾರಿಗೊಳಿಸಿದರು. ಇದರಿಂದ 7 ಲಕ್ಷ ಸರ್ಕಾರಿ ನೌಕರರಿಗೆ ಅನುಕೂಲವಾಯಿತು. ಇದೀಗ 7ನೇ ವೇತನ ಆಯೋಗದ ವರದಿ ಜಾರಿ ಮಾಡಲಿದ್ದಾರೆ. ಶಿಕ್ಷಕರ ಇತರೆ ಸಮಸ್ಯೆಗಳನ್ನು ಬಗೆಹರಿಸಲು ಕಾಂಗ್ರೆಸ್ ಸರ್ಕಾರ ಸಿದ್ಧವಿದೆ ಎಂದು ಹೇಳಿದರು.

ಕಳೆದ ಬಾರಿ ನಾನು ಶಿಕ್ಷಕರ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋಲು ಅನುಭವಿಸಿದೆ. ಆದರೆ, ನನ್ನ ಪಾಲಿನ ದೇವರು ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಕೊಡಿಸಿದರು. ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದ್ದು, ಜೂನ್ 4 ರಂದು ಸಂಸದ ಎನ್ನಿಸಿಕೊಳ್ಳುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಡೆತ್‌ನೋಟ್‌ನಲ್ಲಿ ಅಂದಿನ ಸಚಿವ ಕೆ.ಎಸ್. ಈಶ್ವರಪ್ಪ ಹೆಸರು ಬರೆದಿದ್ದರು. ಈ ಕಾರಣಕ್ಕೆ ಅಂದು ಕೆ.ಎಸ್. ಈಶ್ವರಪ್ಪ ರಾಜೀನಾಮೆ ನೀಡುವ ಪರಿಸ್ಥಿತಿ ನಿರ್ಮಾಣವಾಯಿತು. ಆದರೆ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಡೆತ್‌ನೋಟ್‌ನಲ್ಲಿ ಸಚಿವ ಬಿ.ನಾಗೇಂದ್ರ ಹೆಸರು ಇಲ್ಲ. ಹೀಗಾಗಿ ಅವರು ರಾಜೀನಾಮೆ ನೀಡುವ ಅವಶ್ಯಕತೆ ಇಲ್ಲ ಎಂದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ನಗರಾಧ್ಯಕ್ಷ ಆರ್.ಮೂರ್ತಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಎಂ.ರಾಮು ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net