ಡಿ.16, 17ರಂದು ಕೆಪಿಎಸ್‌ಸಿ ಸ್ಪರ್ಧಾತ್ಮಕ ಪರೀಕ್ಷೆ: ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಮಾಹಿತಿ

Adc Meeting Mandya
Published on

ಮಂಡ್ಯ: ಜಿಲ್ಲೆಯಲ್ಲಿ ಡಿ.16 ಹಾಗೂ 17ರಂದು ನಡೆಯಲಿರುವ ಕೆಪಿಎಸ್‌ಸಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ಯಾವುದೇ ಲೋಪವಿಲ್ಲದಂತೆ ನಡೆಸಲು ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯ ಲೆಕ್ಕ ಪರಿಶೋಧನೆ ಹಾಗೂ ಲೆಕ್ಕಪತ್ರ ಇಲಾಖೆಯ ಗ್ರೂಪ್-ಸಿ ಹುದ್ದೆ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. 16ರಂದು ಮಧ್ಯಾಹ್ನ 2 ಗಂಟೆಯಿಂದ 4 ರವರೆಗೆ ಮಂಡ್ಯ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು(ಕಲ್ಲು ಕಟ್ಟಡ) ಕೇಂದ್ರದಲ್ಲಿ ಕನ್ನಡ ಭಾಷೆ ಹಾಗೂ 17ರಂದು ಬೆಳಗ್ಗೆ 10 ರಿಂದ 11.30ರವರೆಗೆ ಸಾಮಾನ್ಯಜ್ಞಾನ ಪತ್ರಿಕೆ ಪರೀಕ್ಷೆ ನಡೆಯಲಿದೆ. ಅಂತೆಯೇ ಮಧ್ಯಾಹ್ನ 2 ರಿಂದ 4 ರವರೆಗೆ ಅರ್ಕೇಶ್ವರನಗರದ ಪದವಿ ಪೂರ್ವ ಕಾಲೇಜಿನಲ್ಲಿ ಸಾಮಾನ್ಯ ಕನ್ನಡ, ಇಂಗ್ಲೀಷ್ ಮತ್ತು ಕಂಪ್ಯೂಟರ್ ಜ್ಞಾನ ಪರೀಕ್ಷೆ ಇರಲಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಒಟ್ಟು ಎರಡು ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ. ಅದರಲ್ಲಿ 16ರಂದು ನಡೆಯಲಿರುವ ಪರೀಕ್ಷೆಗೆ 16 ಅಭ್ಯರ್ಥಿಗಳು, 17ರಂದು ಬೆಳಗ್ಗಿನ ಪರೀಕ್ಷೆಗೆ 577 ಮತ್ತು ಮಧ್ಯಾಹ್ನ ನಡೆಯಲಿರುವ ಪರೀಕ್ಷೆಗೆ 344 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯ ಒಳಗೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣ, ಮೊಬೈಲ್ ಫೋನ್, ಬ್ಲೂಟೂತ್, ಕ್ಯಾಲ್ಕುಲೇಟರ್ ತರುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕರ್ತವ್ಯಕ್ಕೆಂದು ನಿಯೋಜಿಸುವ ಅಧಿಕಾರಿ ಹಾಗೂ ಸಿಬ್ಬಂದಿ ಮೊಬೈಲ್ ಉಪಯೋಗಿಸಬಾರದು. ಪ್ರಾಂಶುಪಾಲರು ಮತ್ತು ಮುಖ್ಯ ಶಿಕ್ಷಕರನ್ನು ಪರೀಕ್ಷೆಗೆ ಮುಖ್ಯ ಅಧೀಕ್ಷಕರನ್ನಾಗಿ ನೇಮಿಸಲಾಗಿದೆ ಎಂದು ವಿವರಿಸಿದರು.

ಪರೀಕ್ಷಾ ಮಾರ್ಗಸೂಚಿಯಂತೆ ಮಾರ್ಗಾಧಿಕಾರಿಗಳು, ವೀಕ್ಷಕರು, ಸ್ಥಳೀಯ ನಿರೀಕ್ಷಣಾ ಅಧಿಕಾರಿಗಳನ್ನು ನೇಮಿಸಲಾಗಿದೆ. ಪರೀಕ್ಷಾ ಕೊಠಡಿಯಲ್ಲಿ ಸಿ.ಸಿ ಕ್ಯಾಮೆರಾ ಅಳವಡಿಕೆ ಮತ್ತು ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗುವುದು. ಎರಡು ದಿನವೂ ಸುಗಮವಾಗಿ ಪರೀಕ್ಷೆ ನಡೆಯಲು ನಿಗದಿತ ದಿನದಂದು 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಣೆ ಮಾಡಲಾಗಿದೆ. ಅಂತೆಯೇ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಮತ್ತು ಕಂಪ್ಯೂಟರ್/ಸೈಬರ್ ಅಂಗಡಿಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ಡಿಡಿಪಿಐ ಕಚೇರಿಯ ಅಧಿಕಾರಿ ಆರ್.ಪಿ.ಮಹೇಶ್, ಜಿಲ್ಲಾ ಖಜಾನೆ ಇಲಾಖೆಯ ಮುಖ್ಯಲೆಕ್ಕಿಗ ಬಸವರಾಜು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net